ಸಾರಾಂಶ
ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಡಿಕೇರಿಗೆ ಆಗಮಿಸಲಿದ್ದಾರೆ. ಅವರು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪರ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪರ ಪ್ರಚಾರಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಡಿಕೇರಿಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 3 ಗಂಟೆ ತನಕ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಸಚಿವರಾದ ಎಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಸ್ಥಳೀಯ ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ ಹಾಗೂ ಅಭ್ಯರ್ಥಿ ಲಕ್ಷ್ಮಣ್ ಭಾಗವಹಿಸುವರು ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ. ಪಿ. ರಮೇಶ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪರ ಜಿಲ್ಲೆಯಾದ್ಯಂತ ಪ್ರಚಾರ ನಡೆಸಲಾಗುತ್ತಿದೆ. ಸೋಮವಾರಪೇಟೆ, ಕುಶಾಲನಗರ ಹಾಗೂ ಪೊನ್ನಂಪೇಟೆ ಬ್ಲಾಕ್‌ನಲ್ಲಿ ಈಗಾಗಲೇ ಪ್ರಚಾರ ನಡೆದಿದೆ. ಮಡಿಕೇರಿ ನಗರ, ಮಡಿಕೇರಿ ಹಾಗೂ ವಿರಾಜಪೇಟೆ ಬ್ಲಾಕ್‌ನಲ್ಲಿ ಪ್ರಚಾರ ಕಾರ್ಯ ಇನ್ನಷ್ಟೇ ನಡೆಯಬೇಕಿದೆ ಎಂದರು.ಮತದಾರರ ನಿರೀಕ್ಷೆ ಕಾಂಗ್ರೆಸ್ ಪರ ಇದೆ. ವಿಧಾನಸಭಾ ಚುನಾವಣೆ ಸಂದರ್ಭ ಗ್ಯಾರಂಟಿ ಕಾರ್ಡ್ ಹಂಚುವ ಮೂಲಕ ಮೂಲಕ ಪ್ರಚಾರ ನಡೆಸಲಾಗಿತ್ತು ಎಂದರು.ರಾಜ್ಯದಲ್ಲಿರುವ ಐದು ಗ್ಯಾರಂಟಿ ಯೋಜನೆಗಳಂತೆ ರಾಷ್ಟ್ರ ಮಟ್ಟದಲ್ಲಿ 25 ಗ್ಯಾರಂಟಿಗಳನ್ನು ಕಾಂಗ್ರೆಸ್ ಪಕ್ಷ ಘೋಷಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖಂಡ ರಾಹುಲ್ ಗಾಂಧಿ ಅವರ ಸಹಿ ಇರುವ ಗ್ಯಾರಂಟಿ ಕಾರ್ಡ್‍ಗಳನ್ನು ಮನೆ ಮನೆಗೆ ತಲುಪಿಸುತ್ತಿದ್ದೇವೆ. ನಿರುದ್ಯೋಗಿಗಳಿಗೆ ವಾರ್ಷಿಕ ರು.1 ಲಕ್ಷ, ಬಡ ಮಹಿಳೆಗೆ ರು.1 ಲಕ್ಷ, ನರೇಗಾದಡಿ ಕಾರ್ಮಿಕರಿಗೆ ದಿನಕ್ಕೆ 400 ರು. ವೇತನ, ಉದ್ಯೋಗ ಭಾಗ್ಯ ಸೇರಿದಂತೆ 25 ಗ್ಯಾರಂಟಿಗಳ ಭರವಸೆಯನ್ನು ನೀಡಲಾಗಿದೆ ಎಂದು ವಿವರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಪ್ರಮುಖರಾದ ಮುನೀರ್ ಅಹಮ್ಮದ್, ಭವಿನ್ ಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.