ಸಾರಾಂಶ
ಮಡಿಕೇರಿ ನಗರದ ನೂತನ ಆರಕ್ಷಕ ಅಧೀಕ್ಷಕರ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ.
ಕನ್ನಡಪ್ರಭ ವಾರ್ತೆ ಮಡಿಕೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜ. 25ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ವಿರಾಜಪೇಟೆ ತಾಲೂಕಿನ ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ ಬೆಳಗ್ಗೆ 10.20 ಗಂಟೆಗೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಗಂಟೆಗೆ ಮಡಿಕೇರಿ ನಗರದ ನೂತನ ಆರಕ್ಷಕ ಅಧೀಕ್ಷಕರ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಾರ್ವಜನಿಕ ಸಭೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಕಾರ್ಯದರ್ಶಿ ಕೆ. ಚಿರಂಜೀವಿ ತಿಳಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಜ. 25ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಎಸ್. ಭೋಸರಾಜು ಮಂಗಳವಾರ ಸಂಜೆ ಜಿಲ್ಲೆಯ ಅಧಿಕಾರಿಗಳ ಜೊತೆ ಚರ್ಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಇತರರು ಇದ್ದರು.ಶಿಕ್ಷಣ, ಆರೋಗ್ಯ, ಅರಣ್ಯ, ಐಟಿಡಿಪಿ, ಸಮಾಜ ಕಲ್ಯಾಣ, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕೃತಿ ಹೀಗೆ ವಿವಿಧ ಇಲಾಖೆ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಗೆ ಭೇಟಿ ನೀಡಿ, ಉದ್ಘಾಟನೆ ಸಂಬಂಧ ಪರಿಶೀಲಿಸಿದರು. ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಇದ್ದರು.