ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳು ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಯಶಸ್ವಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದರು.
ಪಟ್ಟಣದ ಶಾಂತಿ ಕಾಲೇಜಿನ ಮುಂಭಾಗ ವೇದಿಕೆಯ ಪೂರ್ವ ಸಿದ್ಧತೆಗಳನ್ನು ಶಾಸಕ ಪಿ.ಎಂ ನರೇಂದ್ರಸ್ವಾಮಿ ನೇತೃತ್ವದಲ್ಲಿ ಪರೀಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸುಮಾರು 50 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಎಲ್ಲರಿಗೂ ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆ ಕಲ್ಪಿಸಲಿದ್ದೇವೆ ಎಂದರು.ರೈತರು ಮತ್ತು ಸಾರ್ವನಿಕರಿಗೆ ಅನುಕೂಲವಾಗಲು ಸರ್ಕಾರದ ವಿವಿಧ ಯೋಜನೆಗಳ ಕಾರ್ಯಕ್ರಮಗಳನ್ನು ಕುರಿತು ಅರಿವು ಮೂಡಿಸಲು 40 ಮಳಿಗೆಗಳನ್ನು ಸ್ಥಾಪಿಸಲಾಗಿದೆ ಎಂದರು.
ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.ಪೂರಿಗಾಲಿ ಹನಿ ನೀರಾವರಿ ಯೋಜನೆ ಕೆಲವ ತಿಂಗಳಲ್ಲಿ ಅನುಷ್ಠಾನಗೊಳ್ಳುವುದರಿಂದ ರೈತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಹನಿನೀರಾವರಿ ಪ್ರಾತ್ಯೆಕ್ಷತೆ ಹಮ್ಮಿಕೊಳ್ಳಲಾಗಿದೆ. ಅಶ್ವಮೇಥ 10 ಸಾರಿಗೆ ಬಸ್ ಲೋಕಾರ್ಪಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಪೊಲೀಸ್ ಬಂದೋಬಸ್ತ್:ಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಭಾಗವಹಿಸುವ ಹಿನ್ನೆಲೆಯಲ್ಲಿ ಸಮಾವೇಶದ ಸ್ಥಳ ಸೇರಿದಂತೆ ಪಟ್ಟಣಾಧ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ, ಎಸ್‌ಪಿ ಯತೀಶ್ ನೇತೃತ್ವದಲ್ಲಿ ಇಬ್ಬರು ಹೆಚ್ಚವರಿ ಪೊಲೀಸ್ ವರಿಷ್ಠಾಧಿಕಾರಿಗಳು, 7 ಡಿವೈಎಸ್ಪಿ, 23 ಸರ್ಕಲ್ ಇನ್ಸ್ ಪೆಕ್ಟರ್ , 65 ಪಿಎಸ್‌ಐ, 75 ಎಎಸ್‌ಐ, 750 ಪೊಲೀಸ್ ಸಿಬ್ಬಂದಿ, 5 ಕೆಎಸ್‌ಆರ್‌ಪಿಸಿ ತುಕ್ಕಡಿ, 7 ಡಿಆರ್ ಪೊಲೀಸ್ ಸೇರಿದಂತೆ 1100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಸಮಾವೇಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಮುಖ್ಯಮಂತ್ರಿಗಳಿಗೆ ಶುಭಕೋರಿ ಆಳವಡಿಸಿರುವ ಬ್ಯಾನರ್‌ಗಳು ಪಟ್ಟಣದಲ್ಲಿ ರಾರಾಜಿಸುತ್ತಿವೆ.
ಈ ವೇಳೆ ಜಿಲ್ಲಾ ಎಸ್ಪಿ ಎನ್.ಯತೀಶ್, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ತಹಸೀಲ್ದಾರ್ ಕೆ.ಎನ್ ಲೊಕೇಶ್, ತಾಪಂ ಇಓ ಎಲ್ .ಮಮತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.