ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಕುರುಬರ ಸಂಘದ ವಿದ್ಯಾರ್ಥಿ ನಿಲಯದ ಕಟ್ಟಡದ ಭೂಮಿ ಪೂಜಾ ಸಮಾರಂಭಕ್ಕೆ ಮೇ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ನಗರಕ್ಕೆ ಆಗಮಿಸುತ್ತಿದ್ದಾರೆ. ಸಮಾಜದ ಬಂಧುಗಳು ಹಾಗೂ ಹಿಂದುಳಿದ ಸಮುದಾಯಗಳ ಜನರು ಮುಖ್ಯಮಂತ್ರಿಗಳಿಗೆ ಹೃದಯ ಸ್ಪರ್ಶಿ ಸ್ವಾಗತ ನೀಡುವಂತೆ ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್ ಮನವಿ ಮಾಡಿದರು.ಪಟ್ಟಣದ ಟಿಎಪಿಸಿಎಂಎಸ್‌ನ ಎಂ.ಕೆ.ಬೊಮ್ಮೇಗೌಡ ಸಮುದಾಯ ಭವನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸಮುದಾಯ ಮುಖಂಡರ ಪೂರ್ವಭಾವಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೇ 8 ರಂದು ನಗರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕಾಗಿ ನಿಲಯದ ಕಟ್ಟಡದ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೃತ ಹಸ್ತದಿಂದ ಭೂಮಿ ಪೂಜಾ ಕಾರ್ಯ ನಡೆಸಲಿದ್ದಾರೆ. ಕಟ್ಟಡದ ಕಾಮಗಾರಿಗೆ ರಾಜ್ಯ ಸರ್ಕಾರವು ಈಗಾಗಲೇ 2 ಕೋಟಿ ರು. ವಿಶೇಷ ಅನುದಾನ ಬಿಡುಗಡೆ ಮಾಡಿದೆ. ಇನ್ನೊಂದು ವರ್ಷದಲ್ಲಿ ನೂತನ ಕಟ್ಟಡವು ತಲೆ ಎತ್ತಲಿದೆ ಎಂದರು.ಕಾರ್ಯಕ್ರಮದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು ಮುಖಂಡರು ಭಾಗವಹಿಸುವರು ಎಂದರು.
ಕುರುಬರ ಸಂಘದ ವಿದ್ಯಾರ್ಥಿ ನಿಲಯ ಕೇವಲ ಕುರುಬ ಸಮುದಾಯದ ಮಕ್ಕಳ ಕಲಿಕೆಗೆ ಮಾತ್ರ ಮೀಸಲಾಗಿಲ್ಲ. ಬದಲಾಗಿ ಜಿಲ್ಲೆಯ ಸರ್ವ ಸಮುದಾಯದ ವಿದ್ಯಾರ್ಥಿಗಳಿಗೂ ಆಸರೆಯಾಗಲಿದೆ ಎಂದರು.ಸಭೆಯಲ್ಲಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಕರ್ನಾಟಕ ನಗರಾಭಿವೃದ್ಧಿ ಹಣಕಾಸು ನಿಗಮದ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಜಿಪಂ ಮಾಜಿ ಸದಸ್ಯರಾದ ಎಲ್.ಕೆ.ಮಂಜುನಾಥ್, ಕೊಡಗಹಳ್ಳಿ ವಿ.ಮಂಜೇಗೌಡ, ತಾಪಂ ಮಾಜಿ ಅಧ್ಯಕ್ಷ ಪಿ.ನಂಜುಂಡೇಗೌಡ, ತಾಲೂಕು ಕರುಬರ ಸಂಘದ ಅಧ್ಯಕ್ಷ ಕೆ.ಪುರುಷತ್ತಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್, ಮುಖಂಡರಾದ ಎಲ್.ಪಿ.ನಂಜಪ್ಪ, ಸಮಾಜ ಸೇವಕ ಮಲ್ಲಿಕಾರ್ಜುನ, ತಾಲೂಕು ಪ್ರಧಾನ ಕಾರ್ಯದರ್ಶಿ ಕಾಡುಮೆಣಸ ಚಂದ್ರು, ಯುವ ಘಟಕದ ಅಧ್ಯಕ್ಷ ಸಾಯಿ ಸುಮಿತ್ ಸೇರಿದಂತೆ ನೂರಾರು ಜನರು ಇದ್ದರು.