ಕೊಡಗಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ; ವಿಶೇಷ ಪ್ಯಾಕೇಜ್‌ ನಿರೀಕ್ಷೆ

| Published : Jan 25 2024, 02:04 AM IST

ಕೊಡಗಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ; ವಿಶೇಷ ಪ್ಯಾಕೇಜ್‌ ನಿರೀಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಳಗ್ಗೆ 10 ಗಂಟೆಗೆ ವಿರಾಜಪೇಟೆ ತಾಲೂಕು ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ 10.20ಕ್ಕೆ ವಿರಾಜಪೇಟೆ ಶಾಸಕರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. 10.30ಕ್ಕೆ ವಿರಾಜಪೇಟೆಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಗಂಟೆಗೆ ಮಡಿಕೇರಿ ನಗರದ ನೂತನ ಆರಕ್ಷಕ ಅಧೀಕ್ಷಕರ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ವಿಘ್ನೇಶ್ ಎಂ. ಭೂತನಕಾಡು

ಕನ್ನಡಪ್ರಭ ವಾರ್ತೆ ಮಡಿಕೇರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಗುರುವಾರ ಭೇಟಿ ನೀಡುತ್ತಿದ್ದು, ಸಿಎಂ ಆಗಮನಕ್ಕೆ ಕೊಡಗು ಜಿಲ್ಲೆ ಸಜ್ಜಾಗಿದೆ. ಜಿಲ್ಲೆಗೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವುದರಿಂದ ಕೊಡಗಿನ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನಿರೀಕ್ಷಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಳಗ್ಗೆ 10 ಗಂಟೆಗೆ ವಿರಾಜಪೇಟೆ ತಾಲೂಕು ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ 10.20ಕ್ಕೆ ವಿರಾಜಪೇಟೆ ಶಾಸಕರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. 10.30ಕ್ಕೆ ವಿರಾಜಪೇಟೆಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಗಂಟೆಗೆ ಮಡಿಕೇರಿ ನಗರದ ನೂತನ ಆರಕ್ಷಕ ಅಧೀಕ್ಷಕರ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಜಿಲ್ಲೆಯಲ್ಲಿ ಎರಡು ದಶಕಗಳ ಬಳಿಕ ಮಡಿಕೇರಿ ಹಾಗೂ ವಿರಾಜಪೇಟೆ ಎರಡೂ ವಿಧಾನಸಭಾ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಅಲ್ಲದೆ ಇಬ್ಬರು ಯುವಕರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದಾರೆ. ಇವರು ಮುಖ್ಯಮಂತ್ರಿಗಳಿಗೆ ಹತ್ತಿರವಾಗಿದ್ದಾರೆ. ಇದರಿಂದ ಜಿಲ್ಲೆಗೆ ವಿಶೇಷ ಅನುದಾನ ಸಿಗುವ ನಿರೀಕ್ಷೆ ಮೂಡಿದೆ.

ಜಿಲ್ಲೆಯಲ್ಲಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಕಾನೂನು ಕಾಲೇಜು, ನರ್ಸಿಂಗ್ ಕಾಲೇಜು, ಕುಡಿಯುವ ನೀರಿನ ಯೋಜನೆ, ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ, ಕೊಡಗು ವಿಶ್ವ ವಿದ್ಯಾನಿಲಯಕ್ಕೆ ಅನುದಾನ ಸೇರಿದಂತೆ ಕೊಡಗಿನ ಸರ್ವಾಂಗೀಣ ಅಭಿವೃದ್ಧಿಗೆ ಮುಖ್ಯಮಂತ್ರಿಗಳಿಗೆ ಶಾಸಕರು ಮನವಿ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿಗಳೊಂದಿಗೆ ಗೃಹ ಸಚಿವ ಜಿ. ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್, ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕರ್ತರಲ್ಲಿ ಸಂಭ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಜಿಲ್ಲೆಯ ವಿರಾಜಪೇಟೆ ಹಾಗೂ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ ನಡೆಯಲಿದ್ದು, ಶಾಸಕರಾದ ಎ.ಎಸ್. ಪೊನ್ನಣ್ಣ ಹಾಗೂ ಡಾ. ಮಂತರ್ ಗೌಡ ಅವರು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತೆ ಸಾರ್ವಜನಿಕರ ಬಳಿ ತೆರಳಿ ಈಗಾಗಲೇ ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಬಾಕ್ಸ್...

ಕೊಡಗಿನ ಅಭಿವೃದ್ಧಿ, ವಿಶೇಷ ಪ್ಯಾಕೇಜ್‌ಗೆ ಮನವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಜಿಲ್ಲೆಯ ಉಸ್ತುವಾರಿ ಸಚಿವ ಭೋಸರಾಜು ಹಾಗೂ ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ. ಮಂಥರ್ ಗೌಡ ಮನವಿ ಸಲ್ಲಿಸಲಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಪದವಿ ಕಾಲೇಜು, ನರ್ಸಿಂಗ್ ಕಾಲೇಜು ಸ್ಥಾಪನೆ ಹಾಗೂ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗೆ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ.

ಸಿಎಂ ಆಗಿ ಕೊಡಗಿಗೆ ಬರುತ್ತೇನೆ ಎಂದಿದ್ದ ಸಿದ್ದರಾಮಯ್ಯ!

ವಿಪಕ್ಷ ನಾಯಕರಾಗಿದ್ದ ಸಂದರ್ಭದಲ್ಲಿ 2022ರ ಆ.18ರಂದು ಪ್ರಕೃತಿ ವಿಕೋಪ ಸ್ಥಳಕ್ಕೆ ಭೇಟಿ ನೀಡಲು ಕೊಡಗಿಗೆ ಆಗಮಿಸಿದ್ದ ಸಿದ್ದರಾಮಯ್ಯ ಅವರ ಕಾರಿಗೆ ಮಡಿಕೇರಿ ಹಾಗೂ ಗುಡ್ಡೆಹೊಸೂರಿನಲ್ಲಿ ಮೊಟ್ಟೆ ಎಸೆಯಲಾಗಿತ್ತು. ಅಂದು ಸುದ್ದಿ ತೀವ್ರ ಸಂಚಲನ ಮೂಡಿಸಿತ್ತು. ಕೊಡಗಿನ ಎರಡೂ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ನಾನು ಮುಖ್ಯಮಂತ್ರಿಯಾಗಿ ಕೊಡಗಿಗೆ ಬರುತ್ತೇನೆ ಎಂದು ಅಂದು ಸಿದ್ದರಾಮಯ್ಯ ಹೇಳಿದ್ದರು. ಹಾಗೆಯೇ ಇಂದು ಕೊಡಗಿಗೆ ಮುಖ್ಯಮಂತ್ರಿಯಾಗಿಯೇ ಬರುತ್ತಿದ್ದಾರೆ. 2014ರ ನ.3ರಂದು ಕೊಡಗು ಜಿಲ್ಲೆಗೆ, ಮುಖ್ಯಮಂತ್ರಿಯಾಗಿದ್ದ ಸಂದರ್ಭ ಆಗಮಿಸಿದ್ದರು. ಅಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಭವನ ಸಂಕೀರ್ಣ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಕೊಡಗಿನಲ್ಲಿ ವಿವಿಧ ಕಾಮಗಾರಿಗಳಿಗೆ 194 ಕೋಟಿ ರು. ಅನುದಾನ ಬಿಡುಗಡೆಗೊಂಡಿದೆ. ವಿರಾಜಪೇಟೆ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದೆ. ಜಿಲ್ಲೆಯ ಕಾನೂನು ಪದವಿ ಕಾಲೇಜು, ನರ್ಸಿಂಗ್ ಕಾಲೇಜು ಸ್ಥಾಪನೆ ಹಾಗೂ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ರಸ್ತೆ, ಕುಡಿಯುವ ನೀರು ಯೋಜನೆ ಸೇರಿದಂತೆ ಕೊಡಗಿನ ಸರ್ವಾಂಗೀಣ ಅಭಿವೃದ್ಧಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ.

-ಎ.ಎಸ್. ಪೊನ್ನಣ್ಣ, ಶಾಸಕ, ವಿರಾಜಪೇಟೆ ಕ್ಷೇತ್ರ

ಜಿಲ್ಲೆಯಲ್ಲಿ ಕಾನೂನು ಕಾಲೇಜು ಸ್ಥಾಪನೆ, ಮಡಿಕೇರಿ ಪೊಲೀಸ್ ವಸತಿ ನಿಲಯ, ಕುಶಾಲನಗರಕ್ಕೆ ಅಗ್ನಿ ಶಾಮಕ ದಳ ಕಚೇರಿ, ಮೆಡಿಕಲ್ ಕಾಲೇಜು ಸಿಬ್ಬಂದಿಗೆ ವಸತಿ ನಿಲಯ, ಸೋಮವಾರಪೇಟೆ ಕಾಲೇಜು ಶತಮಾನೋತ್ಸವ ಕಟ್ಟಡ, ಸೋಮವಾರಪೇಟೆ, ಮಡಿಕೇರಿ ಹಾಗೂ ಕುಶಾಲನಗರದ ನಗರ ಹಾಗೂ ಗ್ರಾಮಾಂತರ ಕುಡಿಯುವ ನೀರಿನ ಯೋಜನೆಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು - ಡಾ. ಮಂತರ್ ಗೌಡ, ಶಾಸಕ, ಮಡಿಕೇರಿ ಕ್ಷೇತ್ರ

ಕೊಡಗಿಗೆ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದು, ಸಾರ್ವಜನಿಕ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಸರ್ಕಾರ ಈಗಾಗಲೇ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ರು. 200 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಕೊಡಗಿನಲ್ಲಿ ಎರಡು ದಶಗಳ ಬಳಿಕ ಇಬ್ಬರು ಕಾಂಗ್ರೆಸ್‌ನ ಶಾಸಕರು ಗೆದ್ದಿರುವ ಹಿನ್ನೆಲೆಯಲ್ಲಿ ಕೊಡಗಿಗೆ ಈ ಬಾರಿ ವಿಶೇಷ ಪ್ಯಾಕೇಜ್ ನೀಡುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ಅವರಿಗೆ ಕೊಡಗಿನ ಬಗ್ಗೆ ವಿಶೇಷ ಕಾಳಜಿಯಿದೆ. ಆದರೆ ಕೆಲವರು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ

- ಧರ್ಮಜ ಉತ್ತಪ್ಪ, ಅಧ್ಯಕ್ಷರು, ಕೊಡಗು ಜಿಲ್ಲಾ ಕಾಂಗ್ರೆಸ್