ಚಿಕ್ಕಮಗಳೂರು ಜಿಲ್ಲೆ ಬಂದ್‌ಗೆ ಅನುಮತಿ ಇಲ್ಲ

| Published : May 05 2025, 12:49 AM IST

ಸಾರಾಂಶ

ಮಂಗಳೂರು ಘಟನೆಯನ್ನು ಖಂಡಿಸಿ ಕೆಲ ಸಂಘಟನೆಗಳು ಸೋಮವಾರ ಚಿಕ್ಕಮಗಳೂರು ಜಿಲ್ಲಾ ಬಂದ್ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿವೆ. ಆದರೆ ಈ ಬಂದ್‌ಗೆ ಜಿಲ್ಲಾಡಳಿತವಾಗಲಿ ಅಥವಾ ಪೊಲೀಸ್ ಇಲಾಖೆಯಾಗಲಿ ಅನುಮತಿ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ಜಿಲ್ಲಾಡಳಿತ ಸ್ಪಷ್ಟನೆ । ಬಂದ್‌ ಮಾಡಲು ಮುಂದಾದ್ರೆ ಕಠಿಣ ಕ್ರಮ । ವಿಎಚ್‌ಪಿ, ಬಜರಂಗದಳ ಮುಖಂಡರಿಗೆ ನೋಟಿಸ್‌

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಮಂಗಳೂರು ಘಟನೆಯನ್ನು ಖಂಡಿಸಿ ಕೆಲ ಸಂಘಟನೆಗಳು ಸೋಮವಾರ ಚಿಕ್ಕಮಗಳೂರು ಜಿಲ್ಲಾ ಬಂದ್ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿವೆ. ಆದರೆ ಈ ಬಂದ್‌ಗೆ ಜಿಲ್ಲಾಡಳಿತವಾಗಲಿ ಅಥವಾ ಪೊಲೀಸ್ ಇಲಾಖೆಯಾಗಲಿ ಅನುಮತಿ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾರೇ ಬಂದ್ ಮಾಡುವುದಾದರೂ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಗೆ ಮನವಿ ನೀಡಿ ಅನುಮತಿ ಪಡೆಯಬೇಕಿತ್ತು. ಆದರೆ, ಸೋಮವಾರ ಬಂದ್‌ಗೆ ಸಂಬಂಧಿಸಿದಂತೆ ಯಾರೂ ಕೂಡ ಅನುಮತಿ ಪಡೆದಿಲ್ಲ ಎಂದರು.

ಸೋಮವಾರ ಜಿಲ್ಲೆಯ ಹಲವೆಡೆ ಸಂತೆ ನಡೆಯುತ್ತದೆ. ಜೊತೆಗೆ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪರೀಕ್ಷೆ ನಡೆಯುತ್ತಿದೆ. ಈ ಪರೀಕ್ಷೆಯನ್ನು 648 ವಿದ್ಯಾರ್ಥಿಗಳು ತೆಗೆದುಕೊಂಡಿದ್ದಾರೆ. ಜನರು, ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಹಿನ್ನೆಲೆ ಬಂದ್‌ಗೆ ಯಾವುದೇ ಅನುಮತಿ ನೀಡುವುದಿಲ್ಲ ಎಂದು ಹೇಳಿದರು.

ಬಂದ್‌ಗೆ ಕರೆ ನೀಡಿದ್ದ ಸಂಘಟನೆಗಳ ಪ್ರಮುಖರಿಗೆ ನೋಟಿಸ್ ನೀಡಿ ಜಿಲ್ಲಾಧಿಕಾರಿ ಕಚೇರಿಗೆ ಕರೆಯಿಸಿ ಅವರಿಗೆ ಬಂದ್‌ನಿಂದ ಆಗುವ ಸಮಸ್ಯೆ ಹಾಗೂ ಸುಪ್ರೀಂ ಕೋರ್ಟ್ ಆದೇಶಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು.

ಜಿಲ್ಲಾ ರಕ್ಷಣಾಧಿಕಾರಿ ಡಾ.ವಿಕ್ರಂ ಅಮಟೆ, ಪಹಲ್ಗಾಮ್, ಮಂಗಳೂರಿನಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿ ಜಿಲ್ಲೆಯಲ್ಲಿ ಹಲವಾರು ಪ್ರತಿಭಟನೆಗಳು ನಡೆದಿವೆ. ಮಂಗಳೂರಿನ ಪ್ರಕರಣದಲ್ಲಿ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಈ ಎಲ್ಲಾ ಸೂಕ್ಷ್ಮಗಳನ್ನು ಜಿಲ್ಲಾ ಬಂದ್ ಗೆ ಕರೆ ನೀಡಿದ ಸಂಘಟನೆಗಳ ಪ್ರಮುಖರಿಗೆ ತಿಳಿಸಲಾಗಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಇದ್ದರು.

ಸಾರ್ವಜನಿಕರಿಗೆ ಗೊಂದಲ ಬೇಡ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ ಯಾವುದೇ ಬಂದ್ ಇರುವುದಿಲ್ಲ. ಸಾರ್ವಜನಿಕರಿಗೆ ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಎಸ್‌ಪಿ ಡಾ. ವಿಕ್ರಂ ಅಮಟೆ ತಿಳಿಸಿದರು.

ಸೋಮವಾರ ಜಿಲ್ಲೆಯಲ್ಲಿ ಎಂಟು ಕಡೆ ಸಂತೆಗಳು ಎಂದಿನಂತೆಯೇ ನಡೆಯುತ್ತವೆ. ಬಸ್ ಹಾಗೂ ವಾಹನ ಸಂಚಾರವೂ ಎಂದಿನಂತೆಯೇ ಇರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಗೊಂದಲವಿಲ್ಲದೆ ನಡೆಯುತ್ತದೆ ಎಂದು ಮಾಹಿತಿ ನೀಡಿದರು.

16 ಚೆಕ್‌ಪೋಸ್ಟ್ ಆರಂಭ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯ 16 ಕಡೆ ಚೆಕ್ ಪೋಸ್ಟ್ ಆರಂಭಿಸಿ, ಎಲ್ಲೆಡೆಯು ಶಸ್ತ್ರ ಸಜ್ಜಿತ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಎಸ್‌ಪಿ ವಿಕ್ರಂ ಅಮಟೆ ತಿಳಿಸಿದರು.

ಈ ಚೆಕ್ ಪೋಸ್ಟ್ ಗಳಲ್ಲಿ ಬೇರೆ ಜಿಲ್ಲೆಗಳಿಂದ ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸುವ ಪ್ರತಿ ವಾಹನಗಳನ್ನು ದಿನದ 24 ಗಂಟೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಭದ್ರತೆ ದೃಷ್ಠಿಯಿಂದ ಎಸ್ ಎಲ್ ಆರ್, 303 ರೈಫಲ್ ಹಾಗೂ ಅಧಿಕಾರಿಗಳಿಗೆ ರಿವಾಲ್ವರ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮಂಗಳೂರು ಪೊಲೀಸರಿಂದ ಬಂಧನ ಕೊಳಗಾಗಿರುವ ಇಬ್ಬರು ಆರೋಪಿಗಳ ಮೇಲೆ ಕಳಸ ವ್ಯಾಪ್ತಿಯಲ್ಲಿ ಯಾವುದೇ ಪ್ರಕರಣಗಳು ಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಸಂಗ್ರಹಿಸಲಾಗುವುದು ಎಂದರು.

ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಿದ್ದೇವೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸುವುದಿಲ್ಲ, ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಬೇಕೆಂದು ಮನವಿ ಮಾಡಿದ್ದೇವೆ. ಎಂದಿನಂತೆ ಬಸ್‌ ಸಂಚಾರ ಇರುತ್ತದೆ. ಸರ್ಕಾರಿ ಕಚೇರಿಗಳನ್ನು ಮುಚ್ಚಿಸುವುದಿಲ್ಲ, ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ.

ರಂಗನಾಥ್‌, ಜಿಲ್ಲಾ ಕಾರ್ಯದರ್ಶಿ, ವಿಎಚ್‌ಪಿ