ಉಡುಪಿ: ಉಡುಪಿ ಜಿಲ್ಲೆಯಲ್ಲಿ 1 - 10ನೇ ತರಗತಿವರೆಗೆ 1,59,731 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರ ಆಧಾರ್ ಸೀಡಿಂಗ್ ಮತ್ತು ಆಧಾರ್ ಮ್ಯಾಪಿಂಗ್ ಕಡ್ಡಾಯವಾಗಿ ಆಗಿರಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ಅವರು ಸಮಸ್ಯೆ ಎದುರಿಸುತ್ತಾರೆ. ಆದ್ದರಿಂದ ತಿಂಗಳೊಳ‍‍ಗೆ ಜಿಲ್ಲೆಯ ಎಲ್ಲ ಮಕ್ಕಳ ಆಧಾರ್ ಸೀಡಿಂಗ್ - ಮ್ಯಾಪಿಂಗ್ ಮಾಡಿಸಬೇಕು, ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಎಚ್ಚರಿಕೆ ನೀಡಿದರು.ಶುಕ್ರವಾರ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಆರ್‌ಟಿಇ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆಗಳ ಪ್ರಗತಿ ಪರಿಶೀಲನಾ ಸಭೆಯ ಅಧಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ 1481 ವಿಶೇಷ ಚೇತನ ಮಕ್ಕಳಿದ್ದು, ಅವರಲ್ಲಿ 575 ಮಕ್ಕಳಿಗೆ ಮಾತ್ರ ಯುಡಿಐಡಿ ಕಾರ್ಡ್ ನೀಡಿಲ್ಲ. ಇದರಿಂದ ಅವರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ, ಆದ್ದರಿಂದ ತಿಂಗಳೊಳಗೆ ಎಲ್ಲ ವಿಶೇಷ ಮಕ್ಕಳಿಗೂ ಯುಡಿಐಡಿ ಕಾರ್ಡ್ ವಿತರಿಸಬೇಕು ಎಂದು ಅಂಗವಿಕಲ ಕಲ್ಯಾಣಧಿಕಾರಿಗಳಿಗೆ ಸೂಚನೆ ನೀಡಿದರು.ಸರ್ಕಾರಿ ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ನೋಂದಣಿಯಾಗಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಪಥ್ಯಾಹಾರವನ್ನು ಉಚಿತವಾಗಿ ನೀಡಬೇಕು. ಪಥ್ಯಾಹಾರದಲ್ಲಿ ಅನ್ನ, ಸಾಂಬಾರ್, ಚಪಾತಿ ಮೊಟ್ಟೆ, ಬಾಳೆಹಣ್ಣು ನೀಡಬೇಕು. ಆದರೆ ಕೆಲವು ಕಡೆ ಪಥ್ಯಾಹಾರ ನೀಡದಿರುವುದು ಕಂಡು ಬಂದಿದ್ದು ಈ ಬಗ್ಗೆ ಜಿಲ್ಲಾಧಿಕಾರಿ ಪರಿಶೀಲಿಸಬೇಕು ಎಂದರು.


ನಿಯಮ ಪಾಲಿಸಿದ 2 ಸ್ಕ್ಯಾನಿಂಗ್‌ ಸೆಂಟರ್‌: ಜಿಲ್ಲೆಯಲ್ಲಿ 76ಕ್ಕೂ ಹೆಚ್ಚು ಸ್ಕ್ಯಾನಿಂಗ್ ಸೆಂಟರ್‌ಗಳಿದ್ದು,2 ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಕೆಲವು ನಿಯಮಗಳನ್ನು ಪಾಲಿಸದೇ, ಕೆಲವು ದಾಖಲೆಗಳನ್ನು ಸಹ ನಿರ್ವಹಿಸದೆ ಇರುವುದು ಕಂಡುಬಂದಿದೆ. ಈ ಬಗ್ಗೆ ಪರಿಶೀಲಿಸಿ ಆಯೋಗಕ್ಕೆ ವರದಿ ನೀಡಬೇಕು ಎಂದರು.

ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಅವರು, ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ ಪ್ರದರ್ಶಿಸುವುದು ಕಡ್ಡಾಯವಾಗಿದ್ದರೂ, ಬ್ರಹ್ಮಾವರದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿಯೇ ಪ್ರದರ್ಶಿಸದಿರುವುದು ಕಂಡುಬಂದಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪರಿಶೀಲಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಹೆಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್. ಎಸ್. ಕಾದ್ರೊಳ್ಳಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.