ಸಾರಾಂಶ
ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ಮಗು ಸಾವನ್ನಪ್ಪಿದ್ದು, ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮ ಜರುಗಿಸಬೇಕು
ಬಳ್ಳಾರಿ: ಜ್ವರ ಹಾಗೂ ಹೊಟ್ಟೆ ಊತದಿಂದ ಇಲ್ಲಿನ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದ (ಬಿಎಂಸಿಆರ್‌ಸಿ) ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಗುವೊಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಮಗು ಸಾವಿಗೆ ಕಾರಣ ಎಂದು ಆರೋಪಿಸಿ ಆಸ್ಪತ್ರೆಯ ಮುಂದೆ ಮಗುವಿನ ಶವವಿಟ್ಟು ಪೋಷಕರು ಹಾಗೂ ಸಾರ್ವಜನಿಕರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.
ಒಂದುವರೆ ವರ್ಷದ ರಘುನಂದನ್ ಸಾವಿಗೀಡಾದ ಮಗುವಾಗಿದ್ದು, ಜ್ವರ ಹಾಗೂ ಹೊಟ್ಟೆ ಊತ ಸಮಸ್ಯೆಯಿಂದ ಕಳೆದ ಮೂರು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ಮಗು ಸಾವನ್ನಪ್ಪಿದ್ದು, ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಪೋಷಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.ಸ್ಥಳಕ್ಕೆ ಆಗಮಿಸಿದ ಬಿಎಂಸಿಆರ್‌ಸಿ ನಿರ್ದೇಶಕ ಡಾ. ಗಂಗಾಧರಗೌಡ ಪೋಷಕರ ಜೊತೆ ಮಾತುಕತೆ ನಡೆಸಿದರಲ್ಲದೆ, ಒಂದು ವೇಳೆ ವೈದ್ಯ ಸೇವೆಯ ಬಗ್ಗೆ ಗುಮಾನಿಯಿದ್ದರೆ ಮರಣೋತ್ತರ ಪರೀಕ್ಷೆ ಮಾಡಿಸಲಾಗುವುದು ಎಂದು ತಿಳಿಸಿದರು. ಪೊಲೀಸರು ಹಾಗೂ ಬಿಎಂಸಿಆರ್‌ಸಿ ನಿರ್ದೇಶಕರ ಮನವೊಲಿಕೆಯ ಬಳಿಕ ಪ್ರತಿಭಟನೆ ಹಿಂದಕ್ಕೆ ಪಡೆದರು.