ಸಾರಾಂಶ
ಕನ್ನಡಪ್ರಭ ವಾರ್ತೆ ರಾಯಚೂರು
ಎಲ್ಲರ ಸಹಕಾರದಿಂದ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಬುಡ ಸಹಿತ ಕಿತ್ತೊಗೆಯಲು ಸಾಧ್ಯವಾಗಲಿದ್ದು, ಈ ಹಿನ್ನೆಲೆ ಜನಸಾಮಾನ್ಯರು ಹಾಗೂ ವಿವಿಧ ಇಲಾಖೆಗಳು ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಹೇಳಿದರು.ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಪಂ, ಪೋಲಿಸ್ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಘಟಕ, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ಬಾಲಕಾರ್ಮಿಕ ಯೊಜನೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬುಧವಾರ ಮಾತನಾಡಿ, ಮಕ್ಕಳನ್ನು ಬಾಲ ಕಾರ್ಮಿಕ ಪದ್ಧತಿಗೆ ದೂಡುತ್ತಿರುವ ಪ್ರಕರಣ ಗೊತ್ತಾದ ಕೂಡಲೇ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯವರ ಗಮನಕ್ಕೆ ತಂದು ಮಕ್ಕಳನ್ನು ಅನಿಷ್ಟ ಪದ್ಧತಿಯಿಂದ ಮುಕ್ತರನ್ನಾಗಿ ಮಾಡಿ ಮುಖ್ಯವಾಹಿನಿಗೆ ತರಲು ಸಹಕಾರ ನೀಡಬೇಕೆಂದರು.
ಮಕ್ಕಳನ್ನು ಬಾಲ್ಯದಲ್ಲೇ ಕೆಲಸಕ್ಕೆ ಕಳುಹಿಸಿ ಇವರ ಭವಿಷ್ಯ ಹಾಳು ಮಾಡುವ ಬದಲು ಶಿಕ್ಷಣ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದಲ್ಲಿ ಮಕ್ಕಳು ನಿಜಕ್ಕೂ ಮುಂದಿನ ಸತ್ಪ್ರಜೆಗಳಾಗುವುದರಲ್ಲಿ ಅನುಮಾನವಿಲ್ಲವೆಂದು ಹೇಳಿದರು.6 ರಿಂದ 18ವರ್ಷದ ಮಕ್ಕಳು ಕಾರ್ಖಾನೆಗಳು, ಮಂಡಕ್ಕಿ ಭಟ್ಟಿ, ಇಟ್ಟಿಗೆ ಭಟ್ಟಿ, ಹೋಟೆಲ್, ಸಿನಿಮಾ ಥಿಯೇಟರ್ ಮುಂತಾದ ಕಡೆಗಳಲ್ಲಿ ಶಕ್ತಿ ಮೀರಿ ದುಡಿಯುತ್ತಿದ್ದು, ಇದಕ್ಕೆ ಕಾನೂನಿನಲ್ಲಿ ಆಸ್ಪದವಿಲ್ಲ. ಗ್ರಾಮೀಣ ಭಾಗದಲ್ಲಿ ಬಡತನ ನೆಪವೊಡ್ಡಿ ಮಕ್ಕಳಿಗೆ ಸರಿಯಾದ ಶಿಕ್ಷಣ ಕೊಡಸಲು ಪ್ರಯತ್ನ ಪಡುವುದಿಲ್ಲ. ಹೀಗಾಗಿ ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ದೊರೆಯುವಂತಾಗಬೇಕು ಎಂದರು.
ಜಾಥಾವು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬಸವೇಶ್ವರ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಮಾರ್ಗವಾಗಿ ತಹಸೀಲ್ದಾರ್ ಕಚೇರಿವರೆಗೂ ವಿವಿಧ ಘೋಷಣೆಗಳ ಮೂಲಕ ನಡೆಸಲಾಯಿತು.ಇದೇ ವೇಳೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಭಿರಕ್ಷಕ ಶರಣಪ್ಪ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಗಳಾ ಹೆಗಡೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುದುಕಪ್ಪ, ಜಿಲ್ಲಾ ಬಾಲ ಕಾರ್ಮಿಕರ ಯೋಜನೆ ನಿರ್ದೇಶಕ ಮಂಜುನಾಥ ರೆಡ್ಡಿ, ಕಾರ್ಮಿಕ ನಿರೀಕ್ಷಕರಾದ ಪರುಶುರಾಮ ಎನ್.ಎಸ್, ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಭಂಡರಿ ಸೇರಿ ಇತರೆ ಇಲಾಖೆ ಅಧಿಕಾರಿ, ಸಿಬ್ಬಂದಿ, ವಿದ್ಯಾರ್ಥಿಗಳು ಭಾಗಹಿಸಿದರು.
;Resize=(128,128))
;Resize=(128,128))
;Resize=(128,128))