ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ನ್ಯಾ.ಶ್ರೀಧರ

| Published : Mar 04 2024, 01:24 AM IST / Updated: Mar 04 2024, 03:17 PM IST

ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ನ್ಯಾ.ಶ್ರೀಧರ
Share this Article
  • FB
  • TW
  • Linkdin
  • Email

ಸಾರಾಂಶ

ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕಾರ್ಯಗಾರ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಅನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಮೆಗೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದಲ್ಲಿ ಚಾಮರಾಜನಗರ ತಾಲೂಕನ್ನು ಬಾಲಕಾರ್ಮಿಕ ಮುಕ್ತ ತಾಲೂಕ್ಕಾಗಿ ಘೋಷಿಸುವ ಸಂಬಂಧ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ತಿದ್ದುಪಡಿ 2016 ರ ಬಗ್ಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಗ್ರಾಪಂ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಪದ್ಧತಿ ನಡೆಯುತ್ತಿದೆಯೇ ಎಂದು ಗಮನಹರಿಸಿ. ಬಾಲ್ಯವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ಅನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಮೆಗೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಕಾಯ್ದೆಯಡಿ ಮಕ್ಕಳಿಗೆ ರಕ್ಷಣೆ ಮತ್ತು ಪುನರ್‌ವಸತಿ ಕಲ್ಪಿಸಬೇಕೆಂದರು.

ಮಕ್ಕಳ ರಕ್ಷಣೆಗಾಗಿ 54 ಕ್ಕೂ ಹೆಚ್ಚು ಮಕ್ಕಳ ಹಕ್ಕುಗಳನ್ನು ದೇಶದಲ್ಲಿ ಮಾನ್ಯ ಮಾಡಲಾಗಿದೆ. ವಿಶೇಷವಾಗಿ ಮಕ್ಕಳಿಗೆ ಬದುಕುವ, ಭಾಗವಹಿಸುವ, ವಿಕಾಸ ಹೊಂದುವ ಹಕ್ಕಿದೆ. ಬಾಲ ಕಾರ್ಮಿಕರು ದುಡಿಯುತ್ತಿರುವ ಬಗ್ಗೆ ಕಂಡು ಬಂದಲ್ಲಿ ಕೂಡಲೇ ತಿಳಿಸಬೇಕು. ಅಂತಹ ಬಾಲ ಕಾರ್ಮಿಕರನ್ನು ರಕ್ಷಿಸಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತವನ್ನಾಗಿ ಮಾಡಲು ಸಾಧ್ಯವಾಗಲಿದೆ. 

ಇದಕ್ಕಾಗಿ ಪ್ರತಿ ಗ್ರಾಪಂ ಪ್ರತಿನಿಧಿಗಳು, ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದು ನ್ಯಾಯಾಧೀಶರಾದ ಎಂ. ಶ್ರೀಧರ ಅವರು ತಿಳಿಸಿದರು. 

ತಹಸೀಲ್ದಾರ್ ಇ. ಬಸವರಾಜು ಮಾತನಾಡಿ, ಪ್ರಜಾಸತ್ತಾತ್ಮಕ ಮೌಲ್ಯವನ್ನು ಅಳವಡಿಸಿಕೊಂಡು ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಪಡೆದು ಉತ್ತಮ ಸಮಾಜ ನಿರ್ಮಾಣ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ನಾವೆಲ್ಲರೂ ಕೆಲಸ ಮಾಡುವುದು ನಮ್ಮ ಸಮಾಜಕ್ಕಾಗಿ. ಇದನ್ನು ನಾವು ಮೊದಲು ಅರಿಯಬೇಕು. 

ಉತ್ತಮ ಸಮಾಜ ಕಟ್ಟಬೇಕೆಂದರೆ ಮಕ್ಕಳಿಗೆ ಶಿಕ್ಷಣ ನೀಡಬೇಕು. ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕು ಎಂದರು.ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ.ಎಂ.ಸವಿತಾ ಅವರು ಮಾತನಾಡಿ ಮಕ್ಕಳು ಸಮಾಜದ ಸಂಪತ್ತು. ಬೌದ್ಧಿಕವಾಗಿ, ಮಾನಸಿಕವಾಗಿ, ದೈಹಿಕವಾಗಿ, ಸದೃಢವಾಗಿ ಮಕ್ಕಳು ಬೆಳೆದು ದೇಶದ ಆಸ್ತಿಯಾಗಬೇಕು. 

ಈ ನಿಟ್ಟಿನಲ್ಲಿ ನಮ್ಮ ಇಲಾಖೆಯಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಹಲವಾರು ಕಾರ್ಯಕ್ರಮಗಳು, ಕಾರ್ಯಗಾರಗಳನ್ನು ಆಯೋಜಿಸುತ್ತಿದ್ದೇವೆ. ಬೀದಿ ನಾಟಕ ಪ್ರದರ್ಶನದ ಮೂಲಕವೂ ಬಾಲಕಾರ್ಮಿಕ ಪದ್ದತಿ ಹೋಗಲಾಡಿಸುವ ಉದ್ದೇಶದಿಂದ ಜಾಗೃತಿ ಮೂಡಿಸಲಾಗುತ್ತಿದೆ. 

ಗ್ರಾಮ ಮಟ್ಟದ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿ ಬಿನುವರ್ಗಿಸ್ ಬಾಲ್ಯಾವಸ್ಥೆ ಮತ್ತು ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ತಿದ್ದುಪಡಿ 2016 ರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. 

ಎಡಿಸಿ ಗೀತಾ ಹುಡೇದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕ ನಿರೀಕ್ಷಕರಾದ ವೀಣಾ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯದರ್ಶಿ ಮಹೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.