ಮಣಿಪಾಲ: ಬಾಲಕಾರ್ಮಿಕ ಪದ್ಧತಿಯು ಮಕ್ಕಳು ಬಾಲ್ಯಾವಸ್ಥೆಯ ಅನುಭವವನ್ನು ಮತ್ತು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಅನೇಕ ಕಾನೂನು ಕಾಯಿದೆಗಳನ್ನು ಜಾರಿಗೆ ತರಲಾಗಿದ್ದರೂ ಈ ಸಾಮಾಜಿಕ ಅನಿಷ್ಟ ಪದ್ಧತಿ ಇನ್ನೂ ಇದೆ ಎನ್ನುವುದು ವಿಷಾದನೀಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ್ ಹೇಳಿದರು. ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, 14 ವರ್ಷದೊಳಗಿನ ಯಾವುದೇ ಮಗುವು ಹೋಟೆಲ್, ಕಾರ್ಖಾನೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ದುಡಿಯುತ್ತಿರುವುದು ಕಂಡುಬಂದಲ್ಲಿ ಅವರುಗಳ ಮನವೊಲಿಸಿ, ಶಿಕ್ಷಣ ಪಡೆಯುವಂತೆ ಮಾಡಬೇಕು. ನಮ್ಮ ದೇಶದಲ್ಲಿ ಯುವಜನತೆ ಹೆಚ್ಚಿದ್ದು, ಈ ಯುವಸಂಪತ್ತಿನಿಂದ ದೇಶದ ಅಭಿವೃದ್ಧಿ ಸಾಧ್ಯವಿದೆ. ಈ ನಿಟ್ಟಿನಲ್ಲಿ ಯುವ ಸಂಪನ್ಮೂಲವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು. ಬಾಲ ಕಾರ್ಮಿಕರು ಕಂಡುಬಂದಲ್ಲಿ ಕಾರ್ಮಿಕ ಇಲಾಖೆಗೆ ಅಥವಾ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ 112 ಗೆ ಕರೆ ಮಾಡಿ ಮಾಹಿತಿ ನೀಡಬೇಕು. ಸಂಬಂಧಪಟ್ಟ ಇಲಾಖೆಯವರು ಆ ಮಗುವನ್ನು ರಕ್ಷಿಸಿ, ಶಿಕ್ಷಣದೊಂದಿಗೆ ಪುನರ್ವಸತಿ ಕಲ್ಪಿಸಲಿದ್ದಾರೆ ಎಂದರು.ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಛೇಂಬರ್ ಆಫ್ ಕಾಮರ್ಸ್ ನ ಪ್ರಧಾನ ಕಾರ್ಯದರ್ಶಿ ಡಾ. ವಿಜೇಂದ್ರ ಮಾತನಾಡಿದರು. ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತ ಮತ್ತಿತರರು ಉಪಸ್ಥಿತರಿದ್ದರು. ಕಾರ್ಕಳ ವೃತ್ತ ಕಾರ್ಮಿಕ ನಿರೀಕ್ಷಕ ನವೀನ್ ಕುಮಾರ್ ಸಿ.ಹೆಚ್. ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ಕುಂದಾಪುರ ವೃತ್ತ ಕಾರ್ಮಿಕ ನಿರೀಕ್ಷಕ ವಿಜೇಂದ್ರ ಕೆ ವಂದಿಸಿದರು.