ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಾಲ್ಯವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಇದ್ದರೂ ವಿಳಂಬ ಧೋರಣೆ ಅನುಸರಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸೂಚಿಸಿದರು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬಾಲನ್ಯಾಯ ಕಾಯ್ದೆ-2015 ಅಡಿ ಬರುವ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಬಾಲನ್ಯಾಯ ಮಂಡಳಿ, ಜಿಲ್ಲಾ ತನಿಖಾ ಸಮಿತಿ, ಮಕ್ಕಳ ಸಹಾಯವಾಣಿ ಸಲಹಾ ಮಂಡಳಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಶಾಲಾ ಶಿಕ್ಷಕರಿದ್ದು, 9 ತಿಂಗಳು ಗರ್ಭಿಣಿಯಾಗುವವರೆಗೆ ಏಕೆ ಪ್ರಕರಣ ಗೊತ್ತಾಗುವುದಿಲ್ಲ ಎಂದು ಪ್ರಶ್ನಿಸಿದರು.
ಇಂತಹ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ವಲಯ ಮೇಲ್ವಿಚಾರಕಿಯರು ಮಾಹಿತಿ ನೀಡದಿದ್ದರೆ, ನೋಟಿಸ್ ನೀಡುವಂತೆ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು. ಬಾಲ್ಯವಿವಾಹ, ಪೋಕ್ಸೋ ಪ್ರಕರಣಗಳಲ್ಲಿ ಕೇವಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾತ್ರ ಜವಾಬ್ದಾರಿ ಅಲ್ಲ. ಎಲ್ಲ ಇಲಾಖೆಯವರು ಹೊಣೆಗಾರರು. ಎಲ್ಲರೂ ಕಾರ್ಯಪ್ರವೃತ್ತರಾಗಿ ಮಕ್ಕಳ ರಕ್ಷಣೆಯಲ್ಲಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಇಲ್ಲದಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.ಜಿಪಂ ಸಿಇಒ ಶಶೀಧರ ಕುರೇರ್ ಮಾತನಾಡಿ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ತರಬೇತಿ ಹಾಗೂ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಲ್ಲಿ ಈಗಾಗಲೇ ವಿಳಂಬವಾಗಿದೆ. ಕೇಂದ್ರ ಕಚೇರಿಯ ಮಾದರಿ ನಮೂನೆಯಲ್ಲಿ ತಿಳಿಸಿರುವಂತೆ ಅರಿವು ಕಾರ್ಯಕ್ರಮಗಳನ್ನು ಕೂಡಲೇ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ನಿಲಯಗಳ ಸಹಯೋಗದೊಂದಿಗೆ ಹಾಸ್ಟೆಲ್ ವಾರ್ಡನ್‌ಗಳಿಗೆ ಹಮ್ಮಿಕೊಳ್ಳಲು ಸೂಚಿಸಿದರು.
ಯಾವುದೇ ಖಾಸಗಿ ವ್ಯಕ್ತಿಗಳು ವಸತಿ ನಿಲಯಗಳಲ್ಲಿ ಒಳಗಡೆ ಬರುವಂತಿಲ್ಲ. ಜತೆಗೆ ಮಹಿಳಾ ವಸತಿ ನಿಲಯಗಳಲ್ಲಿ ಮಹಿಳಾ ವಾರ್ಡನ್‌ಗಳನ್ನೇ ನೇಮಿಸಬೇಕು. ನಿಲಯಗಳಲ್ಲಿ ಸಿಸಿ ಕ್ಯಾಮರಾ ಚಾಲ್ತಿಯಲ್ಲಿರಬೇಕು. ಈ ಕುರಿತು ಸುತ್ತೋಲೆ ಹೊರಡಿಸಲು ಸಂಬಂಧಿಸಿದ ಇಲಾಖೆಯವರಿಗೆ ಸೂಚಿಸಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ ಮಾತನಾಡಿ, ಪೋಕ್ಸೋ ಕಾಯ್ದೆ-2012 ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿದರು. ಹೀಗಾದಾಗ ಮಾತ್ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಅಮರೇಶ ಎಚ್. ಬಾಲನ್ಯಾಯ ಕಾಯ್ದೆಯಡಿ ಬರುವ ಯೋಜನೆಗಳ ಪ್ರಗತಿ ವರದಿಯನ್ನು ಸಭೆಗೆ ಮಂಡಿಸಿದರು. ವಿಶೇಷ ಪಾಲನಾ ಯೋಜನೆಯಡಿ ಎಚ್‌ಐವಿ ಸೋಂಕಿತ ಮತ್ತು ಬಾಧಿತ ಮಕ್ಕಳಿಗೆ ಪೌಷ್ಟಿಕ ಆಹಾರ, ವೈದ್ಯಕೀಯ ವೆಚ್ಚ ಹಾಗೂ ಇತರೆ ವೆಚ್ಚಕ್ಕಾಗಿ ಪ್ರತಿ ತಿಂಗಳು ₹1000 ನಂತೆ ಡಿಬಿಟಿ ಮೂಲಕ ಆರ್ಥಿಕ ಸಹಾಯಧನ ನೀಡಲಾಗುತ್ತದೆ. ಪ್ರಸಕ್ತ ಸಾಲಿನ ಮೂರನೇ ತ್ರೈಮಾಸಿಕದಲ್ಲಿ 515 ಮಕ್ಕಳು ಆರ್ಥಿಕ ಸೌಲಭ್ಯ ಪಡೆಯಲು ಅರ್ಹರಿದ್ದಾರೆ ಎಂದು ಸಭೆಗೆ ತಿಳಿಸಿದರು.ಪ್ರಾಯೋಜಕತ್ವ ಯೋಜನೆಯಡಿ ಮಕ್ಕಳ ಪಾಲನಾ ಸಂಸ್ಥೆಗಳಿಂದ ಬಿಡುಗಡೆಯಾದ ಮಕ್ಕಳು, ಅನಾಥ, ಏಕ ಪೋಷಕ, ಜೈಲಿನಲ್ಲಿರುವ ಪಾಲಕರ ಮಕ್ಕಳಿಗೆ ಹಾಗೂ ಇತರೆ ಮಕ್ಕಳಿಗೆ ಕುಟುಂಬದ ವಾತಾವರಣದಲ್ಲಿ ಬೆಳೆಯಲು ಹಾಗೂ ವಿದ್ಯಾಭ್ಯಾಸ ಮುಂದುವರಿಸಲು ಪ್ರತಿ ತಿಂಗಳು ₹ 4 ಸಾವಿರದಂತೆ ಡಿ.ಬಿ.ಟಿ ಮೂಲಕ 209 ಮಕ್ಕಳಿಗೆ ಆರ್ಥಿಕ ಸಹಾಯಧನ ನೀಡಲಾಗುತ್ತಿದೆ ಎಂದು ವಿವರಿಸಿದರು.
ಸಭೆಯಲ್ಲಿ ವಿಶೇಷ ಮಕ್ಕಳ ಪೊಲೀಸ್ ಘಟಕದ ಉಪ ಅಧೀಕ್ಷಕ ಪಂಪನಗೌಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಸ್ತಗಿರಿಸಾಬ ಮುಲ್ಲಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಬಾಲನ್ಯಾಯ ಮಂಡಳಿ ಸದಸ್ಯರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸರ್ಕಾರಿ ಬಾಲಕಿಯರ ಬಾಲಮಂದಿರದ ಅಧೀಕ್ಷಕಿ ಜಯಮಾಲಾ ದೊಡಮನಿ ಸೇರಿದಂತೆ ಮಕ್ಕಳ ಪಾಲನಾ ಸಂಸ್ಥೆಯ ಮುಖ್ಯಸ್ಥರು, ಮಕ್ಕಳ ಸಹಾಯವಾಣಿ ಸಂಯೋಜಕರು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))