ಸಾರಾಂಶ
ಕೊಪ್ಪಳ: ಅಪ್ರಾಪ್ತ ವಯಸ್ಸಿನವರಿಗೆ ಮದುವೆ ಮಾಡುವುದರಿಂದ ಅವರ ದೈಹಿಕ, ಮಾನಸಿಕ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದ್ದರಿಂದ ಬಾಲ್ಯ ವಿವಾಹ ಮಾಡಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ ಅವರು ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಇರಕಲ್ಲಗಡಾ ಗ್ರಾಪಂ ಸಂಯುಕ್ತ ಆಶ್ರಯದಲ್ಲಿ ಇರಕಲ್ಲಗಡಾ ಗ್ರಾಮದಲ್ಲಿ ಜಾಥಾ ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹ ಮಾಡುವುದರಿಂದ ಮಕ್ಕಳು ದೈಹಿಕ, ಮಾನಸಿಕ, ಶಾರೀರಿಕ ಬೆಳವಣಿಗೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು. ಅಲ್ಲದೇ ಹುಟ್ಟುವ ಮಗುವು ವಿಕಲಚೇತನ ಅಪೌಷ್ಟಿಕ ಅಥವಾ ಶಿಶುಮರಣ ಸಾಧ್ಯತೆ ಅಧಿಕವಾಗಿರುತ್ತದೆ. ತಾಯಿ ಅಥವಾ ಮಗು ಇಬ್ಬರೂ ಮರಣ ಹೊಂದಬಹುದು. ಈ ಎಲ್ಲ ಅಂಶಗಳನ್ನು ಗಮನಿಸಿ ಸರ್ಕಾರ ಬಾಲ್ಯವಿವಾಹ ನಿಷೇಧ ಕಾಯ್ದೆ -2006 ಜಾರಿಗೆ ತಂದಿದೆ. ರಾಜ್ಯದಲ್ಲಿ ಬಾಲ್ಯವಿವಾಹ ಪ್ರಮಾಣಗಳು ಅಧಿಕವಾಗಿರುವುದನ್ನು ಗಮನಿಸಿ ಕರ್ನಾಟಕ ಸರ್ಕಾರ ಮತ್ತಷ್ಟು ಪರಿಣಾಮಕಾರಿಯಾಗಿ ಈ ಕಾಯ್ದೆಯನ್ನು ಅನುಷ್ಠಾನಗೊಳಿಸಲು-2016ರಲ್ಲಿ ತಿದ್ದುಪಡಿ ತಂದಿದೆ. ಅದರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆ ಮಾಡಿದವರಿಗೆ, ಭಾಗವಹಿಸಿದವರಿಗೆ ಮತ್ತು ಪ್ರೋತ್ಸಾಹಿಸಿದವರಿಗೆ ಕನಿಷ್ಠ ಒಂದು ವರ್ಷದಿಂದ ಎರಡು ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು ಒಂದು ಲಕ್ಷ ರು. ದಂಡ ವಿಧಿಸಬಹುದಾಗಿದೆ ಎಂದರು.
2018 ಮಾ. 33ರಿಂದ ಎಲ್ಲ ಬಾಲ್ಯವಿವಾಹಗಳು ಅಸಿಂಧು ವಿವಾಹಗಳಾಗಿರುತ್ತವೆ. ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಲೈಂಗಿಕ ಸಂಪರ್ಕವೂ ಅಪರಾಧಗಳೆಂದು ಪರಿಗಣಿಸಲಾಗುತ್ತದೆ ಎಂದು ಹೇಳಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಮಾತನಾಡಿ, ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಗರ್ಭಿಣಿಯರಾಗಿರುವ ಪ್ರಕರಣಗಳು ವರದಿಯಾಗಿವೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ತಿದ್ದುಪಡಿ 2019ರನ್ವಯ ಮಕ್ಕಳ ಮೇಲಿನ ಲೈಂಗಿಕ ಹಲ್ಲೆ, ದೌರ್ಜನ್ಯಗಳಿಗೆ ಕನಿಷ್ಠ 20 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷೆ ಶಿವಮ್ಮ ಶೇಖರಪ್ಪ ನಾಯಕ್, ಗ್ರಾಪಂ ಸದಸ್ಯರಾದ ರಾಮಣ್ಣ ಗೋಸಲ್‌ದಡ್ಡಿ, ಮರಿಯಪ್ಪ ಪಿಣ್ಣಿ, ವೀರಭದ್ರಯ್ಯ ಕಲ್ಮಠ, ವೀರಬಸಪ್ಪ ಪಟ್ಟಣ ಶೆಟ್ಟರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾರ್ಚಾರ್ಯ ಎಚ್.ಎಂ. ಗುಡಿಹಿಂದಿನ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾರ್ಚಾರ್ಯ ಡಾ. ನಾಗಭೂಷಣ ಲತಾ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಲಕ್ಷ್ಮಿ, ಪ್ರಭಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣೇಂದ್ರಯ್ಯ ಸ್ವಾಮಿ ಬೋಸೂರುಮಠ ಭಾಗವಹಿಸಿದ್ದರು. ಶರಣಪ್ಪ ಸಿಂಗನಾಳ ಸ್ವಾಗತಿಸಿದರು.