ಸಾರಾಂಶ
ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು । ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಸಭೆ,
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವತೆಯಿಂದ ಕೆಲಸ ಮಾಡಿ ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆದ ಕೌಟುಂಬಿಕ ಹಿಂಸೆ ಯಿಂದ ಸಂರಕ್ಷಣಾ ಕಾಯ್ದೆ 2015, ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ ಹಾಗೂ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.2023- 24 ನೇ ಸಾಲಿನ ಬಾಲ್ಯ ವಿವಾಹ ಸಂಬಂಧ ಸ್ವೀಕರಿಸಿದ 56 ದೂರುಗಳಲ್ಲಿ 50 ಪ್ರಕರಣ ತಡೆ ಹಿಡಿದು ಉಳಿದ 6 ಪ್ರಕರಣಗಳು ನ್ಯಾಯಾಲಯದ ಹಂತದಲ್ಲಿದೆ. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ದಾಖಲಾ ಗಿರುವ ಪ್ರಕರಣಗಳು, ಮಹಿಳೆಯರ ಮತ್ತು ಮಕ್ಕಳ ಸಾಗಾಟ ನಿವಾರಣೆ ಯೋಜನೆಯಲ್ಲಿ ಹಲವಾರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದ್ದು, ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ನೊಂದವರಿಗೆ ನ್ಯಾಯ ಸಿಗುವಂತೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಿ ಶೀಘ್ರ ನ್ಯಾಯ ಸಿಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಯೋಜನೆ, ಒನ್ ಸ್ಟಾಪ್ ಸೆಂಟರ್ (ಸಖಿ) ನಲ್ಲಿ ಒದಗಿಸಲಾಗುತ್ತಿದೆ. ಅನ್ಯಾಯಕ್ಕೆ ಒಳಗಾದ ಜನರಿಗೆ ಸೂಕ್ತ ರಕ್ಷಣೆ ಮತ್ತು ಸರ್ಕಾರದಿಂದ ದೊರೆಯುವ ಸೌಲಭ್ಯವನ್ನು ಸಕಾಲದಲ್ಲಿ ಒದಗಿಸಿ ನ್ಯಾಯ ಕೊಡಿಸುವ ಜವಾಬ್ದಾರಿ ನಿರ್ವಹಣೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಉದಾಸೀನ ಮಾಡದೆ ಕರ್ತವ್ಯ ಮಾಡಬೇಕು. ಇಂತಹ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಜಾಗೃತಿ ಮೂಡಿಸುವಂತೆ ಯೋಜನೆ ಕೈಕೊಳ್ಳಬೇಕು ಎಂದರು.ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹ ಭಾಗಿತ್ವವಿದ್ದು, 2023-24ನೇ ಸಾಲಿನ ಮೊದಲನೆಯ ಗರ್ಭಿಣಿ 4946 ಫಲಾನುಭವಿಗಳ ನೋಂದಣಿಯಾಗಿದ್ದು 86.90 ಲಕ್ಷ ರು.ಗಳನ್ನು ಹಾಗೂ 2ನೇ ಫಲಾನುಭವಿಗಳು (ಹೆಣ್ಣು ಮಗು) 4340 ನೋಂದಾಯಿಸಿ 1.54 ಕೋಟಿ ಸೇರಿದಂತೆ ಒಟ್ಟು 2.41 ಕೋಟಿ ರು.ಗಳಲ್ಲಿ ಸಹಾಯಧನವನ್ನು ನೇರವಾಗಿ (ಡಿಬಿಟಿ) ಮೂಲಕ ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲೇ ಪ್ರಥಮ ಸ್ಥಾನ ಜಿಲ್ಲೆಗೆ ಬಂದಿದೆ. ಶಕ್ತಿ ಸದನ ಮತ್ತು ಸ್ವಾಧಾರ ಗೃಹ ಯೋಜನೆಯಡಿ ನಡೆಯುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಬಾಕಿ ಇರುವ ಹಣವನ್ನು ಶೀಘ್ರ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.ಈ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಶೋಕಾಸ್ ನೊಟೀಸ್ ನೀಡಲು ಸಂಬಂಧಪಟ್ಟ ಸೂಚಿಸಿದರು. ಇನ್ನು ಮುಂದೆ ಸಭೆಗೆ ಬರುವ ಅಧಿಕಾರಿಗಳು ಅಂಕಿ- ಅಂಶಗಳ ಸಮೇತ ಸೂಕ್ತ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಸರ್ಜನ್ ಡಾ. ಮೋಹನ್‌ಕುಮಾರ್, ಡಿಡಿಪಿಐ ಮಂಜುನಾಥ್ ಸೇರಿದಂತೆ ಜಿಲ್ಲೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು. ವಕೀಲರ ಸಂಘದ ಅಧ್ಯಕ್ಷ ಡಿ.ಬಿ. ಸುಜೇಂದ್ರ, ಸ್ವಯಂ ಸೇವಾ ಸಂಸ್ಥೆಯ ಪದಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಜಾನಾಯಕ್ ಇಲಾಖೆಯ ಕಾರ್ಯಕ್ರಮಗಳ ಮಾಹಿತಿ ನೀಡಿದರು.ಪೋಟೋ ಫೈಲ್ ನೇಮ್ 24 ಕೆಸಿಕೆಎಂ 1ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಕೌಟುಂಬಿಕ ಹಿಂಸೆಯಿಂದ ಸಂರಕ್ಷಣಾ ಕಾಯ್ದೆ, ಮಹಿಳೆ ಮತ್ತು ಮಕ್ಕಳ ಸಾಗಾಣಿಕೆ ಹಾಗೂ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ತ್ರೈಮಾಸಿಕ ಸಭೆ ನಡೆಯಿತು.