ಸಾರಾಂಶ
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಹೆಣ್ಣುಮಕ್ಳಳ ಮದುವೆ ಮಾಡಿ ಬೇಗನೆ ಜವಾಬ್ದಾರಿ ಕಳೆದುಕೊಳ್ಳುವ ತರಾತುರಿಯಲ್ಲಿ ಬಾಲ್ಯವಿವಾಹಕ್ಕೆ ಮುಂದಾಗಬಾರದಂದು ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರ ಹೇಳಿದರು.ನಗರದ ಜಿಲ್ಲಾ ಕ್ರೀಡಾಂಗಣದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ 10 ವರ್ಷ ಪೂರ್ಣಗೊಳಿಸಿದ ಪ್ರಯುಕ್ತ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು ರಾಜ್ಯದಲ್ಲಿಯೇ ಚಿತ್ರದುರ್ಗದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಿದೆ. ಕಡಿವಾಣ ಹಾಕುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಅಗತ್ಯ ಎಂದರು.
ನಿಗದಿತ ವಿವಾಹ ವಯಸ್ಸು ಉಲ್ಲಂಘಿಸಿ ಅಪ್ರಾಪ್ತರನ್ನು ವಿವಾಹ ಮಾಡುವ ಪದ್ಧತಿ ಕಾನೂನಿನ ಪ್ರಕಾರ ಅಪರಾಧ. ಹಾಗಾಗಿ ಬಾಲ್ಯವಿವಾಹಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೋಷಕರು ಹೆಚ್ಚು ನಿಗಾ ವಹಿಸಿ ಬಾಲ್ಯವಿವಾಹ ತಡೆಯಲು ಪ್ರಯತ್ನ ಮಾಡಬೇಕು. ಹೆಣ್ಣು ಮಕ್ಕಳಿಗಿರುವ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸಲಾಗುತ್ತಿದೆ. ಆಸ್ತಿ ಹಕ್ಕು ಸೇರಿದಂತೆ ಹೆಣ್ಣು ಮಕ್ಕಳಿಗೆ ವಿವಿಧ ಹಕ್ಕುಗಳು ಕಾನೂನಿನ ಅಡಿಯಲ್ಲಿ ಇವೆ. ಅವುಗಳನ್ನು ತಿಳಿದುಕೊಳ್ಳಬೇಕು. ಮಗು ತಾಯಿ ಗರ್ಭದಲ್ಲಿ ಇರುವಾಗಲೇ ಹೆಣ್ಣು ಮಕ್ಕಳಿಗೆ ಹಕ್ಕುಗಳು ಪ್ರಾರಂಭವಾಗುತ್ತವೆ ಎಂದು ಹೇಳಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು 2008ರಿಂದಲೂ ಪ್ರತಿ ವರ್ಷ ಆಚರಣೆ ಮಾಡಲಾಗುತ್ತಿದೆ. ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲಾಗುತ್ತಿದೆ. ಹಾಗೆಯೇ ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ ಹಾಗೂ ಕಲ್ಯಾಣವನ್ನು ಎತ್ತಿಹಿಡಿಯಲು ಮೀಸಲಾಗಿರುವ ಮಹತ್ವದ ಸಂದರ್ಭವೂ ಹೌದು. ಲಿಂಗ ತಾರತಮ್ಯ ಬಗ್ಗೆ ಅಡೆತಡೆ ಇಲ್ಲದೆ ಅಭಿವೃದ್ದಿ ಹೊಂದುವ ವಾತಾವರಣ ಸೃಷ್ಠಿಸುವ ಗುರಿ ಹೊಂದಿದೆ ಎಂದರು.
ಹೆಣ್ಣು ಮಕ್ಕಳ ಬಗೆಗಿನ ಸಾಮಾಜಿಕ ವರ್ತನೆ ಬದಲಾಯಿಸುವುದು, ಹೆಣ್ಣು ಭ್ರೂಣ ಹತ್ಯೆಯಂತಹ ಸಮಸ್ಯೆಗಳನ್ನು ಪರಿಹರಿಸುವುದು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆ, ಬಾಲನ್ಯಾಯ ಕಾಯ್ದೆ, ಮಕ್ಕಳ ಸಹಾಯವಾಣಿ ಸೇರಿದಂತೆ ಹೆಣ್ಣು ಮಕ್ಕಳನ್ನು ಸಬಲೀಕರಣಗೊಳಿಸಲು, ಸಮಾನತೆ ಮತ್ತು ಅವಕಾಶದ ವಾತಾವರಣ ಬೆಳೆಸುವ ನಿಟ್ಟಿನಲ್ಲಿ ಅನೇಕ ಕಾನೂನುಗಳ ಜಾರಿಯಲ್ಲಿವೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ ಪ್ರಧಾನ, ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಸುಧಾ, ವೀಣಾ ಇದ್ದರು.