ಮಕ್ಕಳ ರಕ್ಷಣೆ ಎಲ್ಲ ಇಲಾಖೆಯ ಜವಾಬ್ದಾರಿ: ಡಾ.ಕೆ.ಟಿ.ತಿಪ್ಪೇಸ್ವಾಮಿ

| Published : Aug 04 2024, 01:28 AM IST

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು ಗರ್ಭಿಣಿಯರಾಗುತ್ತಿರುವ ಪ್ರಕರಣ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿ ಇಂತಹ ಪ್ರಕರಣಗಳು ನಡೆಯದಂತೆ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸಬೇಕು. ಶಾಲೆ ಬಿಟ್ಟ ಮಕ್ಕಳ ಸರ್ವೆ ಮಾಡಿಸಿ ಪುನಃ ಶಾಲೆಗೆ ಸೇರಿಸುವ ಜವಾಬ್ದಾರಿ ಶಿಕ್ಷಣ ಇಲಾಖೆಯದ್ದಾಗಿದ್ದು, ಪ್ರತಿ ವಾರಕ್ಕೊಂದು ಬಾರಿ ಪೊಲೀಸ್ ಠಾಣೆಗೆ ಮಕ್ಕಳನ್ನು ಕರೆದುಕೊಂಡು ಹೋಗಬೇಕು. ಪ್ರತಿ ಶಾಲೆಗಳಲ್ಲಿ ಸಲಹಾ ಪೆಟ್ಟಿಗಳನ್ನು ಇಡಬೇಕು.

ಕನ್ನಡಪ್ರಭ ವಾರ್ತೆ ತಿಪಟೂರು

ಮಕ್ಕಳ ರಕ್ಷಣೆ ಹಾಗೂ ಸುರಕ್ಷತೆಗಾಗಿ ಸರ್ಕಾರ ಜಾರಿಗೆ ತಂದಿರುವ ಮಕ್ಕಳ ಕಾಯ್ದೆಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ಶಾಲಾ ಕಾಲೇಜುಗಳ ಮಕ್ಕಳಿಗೆ ಅರಿವು ಮೂಡಿಸುವ ಕೆಲಸ ಪ್ರತಿ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದರು.

ನಗರದ ತಾಲೂಕು ಆಡಳಿತ ಸೌಧದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಮಕ್ಕಳ ರಕ್ಷಣೆಯಲ್ಲಿ ಪ್ರತಿ ಇಲಾಖೆಗಳ ಪಾತ್ರವಿದ್ದು, ಎಲ್ಲ ಅಧಿಕಾರಿಗಳು ಅದನ್ನು ಸಮರ್ಥವಾಗಿ ನಿರ್ವಹಿಸಬೇಕೆಂದು ಸೂಚಿಸಿದರು.

ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಫೋಕ್ಸೋ, ಮಕ್ಕಳ ಸಹಾಯವಾಣಿ ಹೀಗೆ ಹಲವಾರು ವಿಷಯಗಳ ಬಗ್ಗೆ ಮಕ್ಕಳಿಗೆ ಪ್ರತಿ ಶಾಲಾ-ಕಾಲೇಜುಗಳಲ್ಲಿ ಹಾಗೂ ಸಮುದಾಯಕ್ಕೆ ಮಾಹಿತಿ ನೀಡುವ ಕೆಲಸವಾಗಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರಲ್ಲಿ ಪ್ರಮುಖ ಪಾತ್ರವಹಿಸಲಿದ್ದು, ಮಕ್ಕಳ ರಕ್ಷಣಾ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು ಗರ್ಭಿಣಿಯರಾಗುತ್ತಿರುವ ಪ್ರಕರಣ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿ ಇಂತಹ ಪ್ರಕರಣಗಳು ನಡೆಯದಂತೆ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸಬೇಕು. ಶಾಲೆ ಬಿಟ್ಟ ಮಕ್ಕಳ ಸರ್ವೆ ಮಾಡಿಸಿ ಪುನಃ ಶಾಲೆಗೆ ಸೇರಿಸುವ ಜವಾಬ್ದಾರಿ ಶಿಕ್ಷಣ ಇಲಾಖೆಯದ್ದಾಗಿದ್ದು, ಪ್ರತಿ ವಾರಕ್ಕೊಂದು ಬಾರಿ ಪೊಲೀಸ್ ಠಾಣೆಗೆ ಮಕ್ಕಳನ್ನು ಕರೆದುಕೊಂಡು ಹೋಗಬೇಕು. ಪ್ರತಿ ಶಾಲೆಗಳಲ್ಲಿ ಸಲಹಾ ಪೆಟ್ಟಿಗಳನ್ನು ಇಡಬೇಕು. ಶಾಲಾ ಆವರಣದಲ್ಲಿ, ಶಾಲೆಗಳ ಮೇಲೆ ವಿದ್ಯುತ್ ತಂತಿಗಳು ಹಾದು ಹೋಗಿದ್ದರೆ ಅವುಗಳನ್ನು ತೆರವು ಗೊಳಿಸುವಂತೆ ಬೆಸ್ಕಾಂ ಇಲಾಖೆಗೆ ಸೂಚಿಸಿದರು.

ವಸತಿ ನಿಲಯಗಳ ಸುತ್ತಾಮುತ್ತಾ ಪೊಲೀಸ್ ಬೀಟ್ ವ್ಯವಸ್ಥೆ ಮಾಡುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು. ತೆಂಗಿನ ಕಾಯಿ ಘಟಕಗಳು ಮತ್ತು ಗ್ಯಾರೇಜ್‌ಗಳಲ್ಲಿ ಬಾಲಕಾರ್ಮಿಕ ಪದ್ಧತಿ ಕಂಡುಬಂದಲ್ಲಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾರ್ಮಿಕ ಇಲಾಖೆಗೆ ಸೂಚಿಸಿದರು.

ಶಾಲೆಗಳಿಗೆ ಹೋಗಿ ಬರುವಾಗ, ಆಟವಾಡುವ ಸಂದರ್ಭದಲ್ಲಿ ಮಕ್ಕಳ ಮೇಲೆ ನಾಯಿ ದಾಳಿಗಳ ಪ್ರಕರಣಗಳು ನಡೆಯುತ್ತಿದ್ದು ಇದಕ್ಕೆ ನಗರಸಭೆ ಮತ್ತು ಪಶು ಇಲಾಖೆ ಅಗತ್ಯ ಕ್ರಮ ವಹಿಸಬೇಕು. ಒಟ್ಟಾರೆ ಪ್ರತಿಯೊಂದು ಇಲಾಖೆಗಳಲ್ಲಿಯೂ ಮಕ್ಕಳ ರಕ್ಷಣೆಯ ಜವಾಬ್ದಾರಿಯಿದ್ದು ಅದನ್ನು ಸಮರ್ಥವಾಗಿ ನಿರ್ವಹಿಸಬೇಕೆಂದರು.

ತಹಸೀಲ್ದಾರ್ ಪವನ್‌ಕುಮಾರ್, ತಾಪಂ ಇಒ ಸುದರ್ಶನ್, ನಗರಸಭೆ ಪೌರಾಯಕ್ತ ವಿಶ್ವೇಶ್ವರ ಬದರಗಡೆ, ಗ್ರೇಡ್-೨ ತಹಸೀಲ್ದಾರ್ ಜಗನ್ನಾಥ್ ಭಾಗವಹಿಸಿದ್ದರು.

ಸಭೆಗೂ ಮುನ್ನಾ ಕರಡಿ ಮತ್ತು ಹುಚ್ಚಗೊಂಡನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಕೆಲ ಶಾಲಾ-ಕಾಲೇಜುಗಳು, ವಸತಿ ನಿಲಯಗಳಿಗೆ ಹಾಗೂ ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಳೇಪಾಳ್ಯದ ವಿದ್ಯಾರ್ಥಿನಿ ಚಂದನಾ ಮನೆಗೆ ಭೇಟಿ ನೀಡಿದರು.