ಸಾರಾಂಶ
ಕೊಪ್ಪಳ: ಜಿಲ್ಲೆಯ ಎಲ್ಲ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ, ಬಾಲಮಂದಿರಗಳಲ್ಲಿ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಅನ್ನು ಕಡ್ಡಾಯವಾಗಿ ಅಳವಡಿಸಿಕೊಂಡು, ನಿಯಮಾನುಸಾರ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ರಕ್ಷಣಾ ವ್ಯವಸ್ಥೆಗಳ ಕುರಿತು ಭಾಗೀದಾರರೊಂದಿಗೆ ಸಮಾಲೋಚನೆ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಕ್ಕಳ ರಕ್ಷಣಾ ನೀತಿ-2016ರಲ್ಲಿ ಮಕ್ಕಳಿಗೆ ಒದಗಿಸಬೇಕಾದ ಅಗತ್ಯ ಮೂಲಭೂತ ಸೌಕರ್ಯಗಳು, ಭದ್ರತೆ, ಮಕ್ಕಳ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಮುಂತಾದ ವಿಷಯಗಳ ಕುರಿತು ವಿಶೇಷ ಹಾಗೂ ವಿವರವಾದ ನಿಯಮಗಳಿವೆ. ಆದ್ದರಿಂದ ಜಿಲ್ಲೆಯ ಎಲ್ಲ ವಸತಿ ನಿಲಯ, ವಸತಿ ಶಾಲೆ, ಶೈಕ್ಷಣಿಕ ಸಂಸ್ಥೆಗಳು, ಬಾಲಮಂದಿರಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಆ ಮೂಲಕ ನೀತಿಯನ್ವಯ ಎಲ್ಲ ಸೌಲಭ್ಯವನ್ನು ಮಕ್ಕಳಿಗೆ ಒದಗಿಸಬೇಕು. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ನೀತಿಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಿ, ಪಾಲಿಸುತ್ತೇವೆ ಎಂಬುದಾಗಿ ಬದ್ಧತಾ ಪತ್ರಕ್ಕೆ ಸಹಿ ಹಾಕಬೇಕು ಎಂದು ಸದಸ್ಯರು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲ ವಸತಿ ನಿಲಯಗಳಲ್ಲಿ ಸಲಹಾ ಪೆಟ್ಟಿಗೆ ಇಡಬೇಕು. ಊಟದ ಕೋಣೆ, ಸ್ಟಡಿ ರೂಂಗೆ ಹೋಗುವ ಮಾರ್ಗ, ಶೌಚಾಲಯ, ಸ್ನಾನಗೃಹಕ್ಕೆ ಹೋಗುವ ಮಾರ್ಗಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ವಸತಿ ನಿಲಯದ ವಿದ್ಯಾರ್ಥಿಗಳು ಸಲಹಾ ಪೆಟ್ಟಿಗೆಯಲ್ಲಿ ತಮ್ಮ ದೂರು, ಸಲಹೆಗಳನ್ನು ಹಾಕುವಂತೆ ಸೂಚಿಸಬೇಕು. ಯಾವುದೇ ಕಾರಣಕ್ಕೂ ವಸತಿ ನಿಲಯದ ವಾರ್ಡನ್‌ಗಳು ಸಲಹಾ ಪೆಟ್ಟಿಗೆಯನ್ನು ತೆರೆದು ನೋಡುವಂತಿಲ್ಲ. ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಮಹಿಳಾ ವಸತಿ ನಿಲಯ ಪಾಲಕರು ಇರಬೇಕು. ಈ ಎಲ್ಲ ಕ್ರಮಗಳ ಬಗ್ಗೆ ಹಾಗೂ ಮಕ್ಕಳ ರಕ್ಷಣಾ ನೀತಿ-2016 ಅನ್ನು ಅಳವಡಿಸಿಕೊಂಡ ಬಗ್ಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ವರದಿ ಸಲ್ಲಿಸಬೇಕು. ಇಲಾಖೆಗಳ ಅಧಿಕಾರಿಗಳು ನಿಯಮಿತವಾಗಿ ವಸತಿ ನಿಲಯ, ವಸತಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದರು.ಆರೋಗ್ಯ ಇಲಾಖೆಯಲ್ಲಿ ದಾಖಲಾಗುವ ಅಪ್ರಾಪ್ತ ಗರ್ಭಿಣಿಯರ ಪ್ರಕರಣಗಳ ಬಗ್ಗೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಪೋಕ್ಸೋ ಕಾಯ್ದೆಯ ಕಲಂ 19ರಡಿಯಲ್ಲಿ ಮೊದಲು ಮಾಹಿತಿ ಬಂದವರು ಪ್ರಕರಣ ದಾಖಲಿಸಲು ಅವಕಾಶವಿದ್ದು, ಅದನ್ನು ಪಾಲಿಸಬೇಕು. ಆರ್‌ಸಿಎಚ್ ಪೋರ್ಟಲ್‌ನಲ್ಲಿ ದಾಖಲಾದ 14ರಿಂದ 17 ವರ್ಷದೊಳಗಿನ ಬಾಲಗರ್ಭಿಣಿಯರ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಬೇಕು. ಬಾಲಕಿಯ ವಯಸ್ಸಿನ ದೃಢೀಕರಣಕ್ಕೆ ಜನನ ಪ್ರಮಾಣ ಪತ್ರ ಮತ್ತು ಶಾಲಾ ದಾಖಲಾತಿಗಳನ್ನು ಪರಿಶೀಲಿಸಬೇಕು. ಶಾಲಾ ಮುಖ್ಯಸ್ಥರು ಬಾಲ್ಯವಿವಾಹ ಮತ್ತು ಪೋಕ್ಸೋ ಪ್ರಕರಣಗಳಲ್ಲಿ ಶೀಘ್ರ ಮಾಹಿತಿ ಒದಗಿಸಬೇಕು ಎಂದರು.
ಡಿವೈಎಸ್‌ಪಿ ಮುತ್ತಣ್ಣ ಸವರಗೋಳ ಮಾತನಾಡಿ, ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಿವಿಧ ಇಲಾಖೆಗಳ ಸಹಕಾರ ಮುಖ್ಯವಾಗುತ್ತದೆ. ಪೋಷಕರು ಮಕ್ಕಳಿಗೆ ಉತ್ತಮ ವಾತಾವರಣ ನಿರ್ಮಿಸಿ, ಮಕ್ಕಳ ಮನೋ-ದೈಹಿಕ ಬೆಳವಣಿಗೆಗೆ ಪೂರಕ ಪರಿಸರ ನಿರ್ಮಿಸಬೇಕು ಎಂದು ಹೇಳಿದರು.ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಜಿಪಂ ಮುಖ್ಯ ಯೋಜನಾಧಿಕಾರಿ ಡಿ. ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಉಪಸ್ಥಿತರಿದ್ದರು.