ಚನ್ನಪಟ್ಟಣ: ಮಕ್ಕಳೇ ದೇಶದ ನಿಜವಾದ ಸಂಪತ್ತು. ಮಕ್ಕಳಲ್ಲಿ ಅಡಗಿರುವ ಪ್ರತಿಭೆ, ಸೃಜನಶೀಲತೆ ಮತ್ತು ಆತ್ಮವಿಶ್ವಾಸವನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರು ಹಾಗೂ ಪೋಷಕರ ಜವಾಬ್ದಾರಿ ಎಂದು ಮುಖ್ಯ ಶಿಕ್ಷಕ ಯೋಗೇಶ್ ಚಕ್ಕೆರೆ ಹೇಳಿದರು

ಚನ್ನಪಟ್ಟಣ: ಮಕ್ಕಳೇ ದೇಶದ ನಿಜವಾದ ಸಂಪತ್ತು. ಮಕ್ಕಳಲ್ಲಿ ಅಡಗಿರುವ ಪ್ರತಿಭೆ, ಸೃಜನಶೀಲತೆ ಮತ್ತು ಆತ್ಮವಿಶ್ವಾಸವನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರು ಹಾಗೂ ಪೋಷಕರ ಜವಾಬ್ದಾರಿ ಎಂದು ಮುಖ್ಯ ಶಿಕ್ಷಕ ಯೋಗೇಶ್ ಚಕ್ಕೆರೆ ಹೇಳಿದರು. ತಾಲೂಕಿನ ಚಕ್ಕೆರೆ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪಂಡಿತ್ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಶಿಕ್ಷಣದ ಜೊತೆಗೆ ಕ್ರೀಡೆ, ಕಲೆ, ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಾಗ ಮಕ್ಕಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಸಾಧ್ಯ. ಮಕ್ಕಳ ಸಂತೋಷವೇ ಶಾಲೆಯ ನಿಜವಾದ ಸಂಭ್ರಮ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಗುರಿ ಹೊಂದಿ ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಕರೆ ನೀಡಿದರು.

ಎಸ್‌ಡಿಎಂಸಿ ಅಧ್ಯಕ್ಷ ಉಮೇಶ್ ಮಾತನಾಡಿ, ಮಕ್ಕಳು ದೇಶದ ಭವಿಷ್ಯದ ಪ್ರಜೆಗಳು. ಪ್ರತಿಯೊಂದು ಮಗುವಿನಲ್ಲಿಯೂ ವಿಶೇಷ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಹೊರತರುವಲ್ಲಿ ಶಾಲೆ ಮತ್ತು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರ, ಶಿಸ್ತು ಹಾಗೂ ಜೀವನ ಮೌಲ್ಯಗಳನ್ನು ಕಲಿಸಬೇಕು. ಮಕ್ಕಳು ಪೋಷಕರಿಗೆ, ಶಿಕ್ಷಕರಿಗೆ ಮತ್ತು ಶಾಲೆಗೆ ಕೀರ್ತಿ ತರುವಂತೆ ಬೆಳೆಯಬೇಕು ಎಂದು ಹಾರೈಸಿದರು.

ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾತ್ಮಕ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಕ್ಕಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ನಡೆದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಮಧುಸೂದನ್, ಬಿ.ಕೆ.ಲತಾ, ರಶ್ಮಿ, ಶಶಿಕುಮಾರ್, ಶಶಿರೇಖಾ, ರಾಜಣ್ಣ, ರಾಜೇಶ್ವರಿ, ಸಾಕಮ್ಮ, ಪಲ್ಲವಿ, ರಾಜಮ್ಮ, ಸುಶೀಲಮ್ಮ, ಲತಾ, ಲಕ್ಷ್ಮಿ ಶಾಲೆಯ ಬೋಧಕ/ಬೋಧಕೇತರ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೊಟೋ೧೫ಸಿಪಿಟಿ೨:ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.