ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡು 14 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ:

ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡು 14 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಇಲ್ಲಿಯ ಟಿಸಿಡಿಡಬ್ಲ್ಯೂ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯರು ಬಿಸಿಯೂಟ ಸೇವಿಸಿದ ಬಳಿಕ ಹೊಟ್ಟೆ ನೋವಿನಿಂದ ಬಳಲಿದ್ದಾರೆ. ಅಸ್ವಸ್ಥಗೊಂಡ ಸುಮಾರು 14 ವಿದ್ಯಾರ್ಥಿನಿಯರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾಸ್ಪತ್ರೆಯ ಸರ್ಜನ್ ಸಂಗಪ್ಪ ಗಾಭಿ ಭೇಟಿ ನೀಡಿ ಅಸ್ವಸ್ಥ ಮಕ್ಕಳ ಆರೋಗ್ಯ ವಿಚಾರಿಸಿದರು. ವೈದ್ಯರು ಮಕ್ಕಳಿಗೆ ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ. ಈ ನಡುವೆ ಶಾಸಕ ವಿನಯ ಕುಲಕರ್ಣಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ಮಕ್ಕಳ ಆರೋಗ್ಯ ವಿಚಾರಿಸಿದರು. ಬಳಿಕ ಶಾಲೆಯ ಮುಖ್ಯ ಶಿಕ್ಷಕಿಯಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ವಿನಯ ಕುಲಕರ್ಣಿ, ಎಲ್ಲ ಮಕ್ಕಳ ಆರೋಗ್ಯ ವಿಚಾರಿಸಿದ್ದೇನೆ. ಎಲ್ಲರೂ ಆರೋಗ್ಯವಾಗಿದ್ದಾರೆ. ಒಂದೇ ತರಗತಿಯ ಮಕ್ಕಳಿಗೆ ಈ ರೀತಿ ಆಗಿರುವುದಕ್ಕೆ ಕಾರಣವೇನು ಎಂಬುದರ ಕುರಿತು ಸರಿಯಾಗಿ ಮಾಹಿತಿ ಪಡೆದುಕೊಳ್ಳುವಂತೆ ಡಿಡಿಪಿಐ ಅವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಘಟನೆಗೆ ನಿಖರ ಕಾರಣವೇನು ಎಂಬುದು ವೈದ್ಯಕೀಯ ಪರಿಶೀಲನೆ ಹಾಗೂ ಸಂಬಂಧಿಸಿದ ಅಧಿಕಾರಿಗಳ ವರದಿಯಿಂದ ಸ್ಪಷ್ಟವಾಗಬೇಕಿದೆ.