ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಕಲಾಪ ವೀಕ್ಷಣೆಗೆ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಅವರನ್ನು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಕೃತಜ್ಞತೆ ಸಲ್ಲಿಸಿದರು.ವಿಧಾನ ಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದ ಕಲಾಪವನ್ನು ನೇರವಾಗಿ ವೀಕ್ಷಿಸುವ ಅವಕಾಶವನ್ನು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 100 ವಿದ್ಯಾರ್ಥಿಗಳಿಗೆ ಶಾಸಕರು ಸ್ವಂತ ಖರ್ಚಿನಲ್ಲಿ ಬೆಂಗಳೂರಿಗೆ ತೆರಳಿ ವಿಧಾನಸಭೆ ಕಲಾಪ ವೀಕ್ಷಿಸಲು ಎರಡು ಬಸ್ಸುಗಳು ಜೊತೆಗೆ ತಿಂಡಿ ಊಟದ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕಲಾಪ ವೀಕ್ಷಿಸಿ ಕಾಲೇಜಿಗೆ ಹಿಂತಿರುಗಿದ ವಿದ್ಯಾರ್ಥಿಗಳ ತಂಡ ಕಾಲೇಜು ಆವರಣದಲ್ಲಿ ಶಾಸಕರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿತು.
ಪ್ರಾಂಶುಪಾಲ ಪ್ರೊ.ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಕಾರ್ಯವೈಖರಿ, ವಿಧಾನಸಭೆ ಕಲಾಪ, ಶಾಸಕರ ಜವಾಬ್ದಾರಿ ಹಾಗೂ ಜನಪ್ರತಿನಿಧಿಗಳ ಕರ್ತವ್ಯಗಳು ಹೇಗಿರಬೇಕು ಎಂಬುದರ ಕುರಿತು ನೇರ ಅನುಭವ ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಈ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದರು.ಪಠ್ಯಪುಸ್ತಕಗಳಲ್ಲಿ ಓದುವ ಸಂಸದೀಯ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವದ ಪ್ರಕ್ರಿಯೆಯನ್ನು ಕಣ್ಣಾರೆ ವೀಕ್ಷಿಸುವ ಅವಕಾಶ ವಿದ್ಯಾರ್ಥಿಗಳಿಗೆ ದೊರೆತಿರುವುದು ಅವರ ಜ್ಞಾನವನ್ನು ಮತ್ತಷ್ಟು ವಿಸ್ತರಿಸಲು ಸಹಕಾರಿಯಾಗಿದೆ. ಅಧಿವೇಶನದಲ್ಲಿ ಜನರ ಸಮಸ್ಯೆಗಳು, ಅಭಿವೃದ್ಧಿ ವಿಚಾರ ಕುರಿತು ನಡೆಯುವ ಚರ್ಚೆಗಳನ್ನು ವೀಕ್ಷಿಸುವ ಮೂಲಕ ವಿದ್ಯಾರ್ಥಿಗಳು ಉತ್ತಮ ನಾಗರೀಕರಾಗಿ ರೂಪುಗೊಳ್ಳಲು ಪ್ರೇರಣೆ ಪಡೆಯಲು ಒಂದು ಉತ್ತಮ ಅವಕಾಶವಾಗುತ್ತದೆ ಎಂದರು.
ಈ ಅವಕಾಶವನ್ನು ಕಲ್ಪಿಸಿಕೊಟ್ಟ ಶಾಸಕ ಎಚ್.ಟಿ.ಮಂಜು ಅವರಿಗೆ ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.