ಕರ್ನಾಟಕ ಬಾಲವಿಕಾಸ ಅಕಾಡೆಮಿ ವತಿಯಿಂದ ನವೆಂಬರ್ ಮೊದಲ ವಾರದಲ್ಲಿ ನಗರದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕರ್ನಾಟಕ ಬಾಲವಿಕಾಸ ಅಕಾಡೆಮಿ ವತಿಯಿಂದ ನವೆಂಬರ್ ಮೊದಲ ವಾರದಲ್ಲಿ ನಗರದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನ ಆಯೋಜನೆ ಕುರಿತು ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ನಗರದ ಸಿಪಿಎಡ್ ಮೈದಾನದಲ್ಲಿ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದ್ದು, ಜಿಲ್ಲಾಧಿಕಾರಿಯೊಂದಿಗೆ ಸಭೆ ನಡೆಸಿದ ಬಳಿಕ ದಿನಾಂಕ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.ಮೂರು ದಿನಗಳ ಕಾಲ ಸಮ್ಮೇಳನ ನಡೆಸುವ ಚಿಂತನೆ ಇದೆ. ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ 10 ರಿಂದ 15 ಸಾವಿರ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಮಕ್ಕಳ ಸಾಹಿತ್ಯ, ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆ ಕಲ್ಪಿಸುವ ಜತೆಗೆ ಮಕ್ಕಳಿಗೆ ಎದುರಾಗುತ್ತಿರುವ ಹಲವು ಸಮಸ್ಯೆಗಳ ಕುರಿತು ಅರಿವು ಮೂಡಿಸಲಾಗುವುದು ಎಂದರು.ಮಕ್ಕಳೊಂದಿಗೆ ಪಾಲಕರು ಹೇಗೆ ನಡೆದುಕೊಳ್ಳಬೇಕು, ಮಕ್ಕಳಿಗೆ ಮೊಬೈಲ್ ಅಗತ್ಯವೇ, ಮೊಬೈಲ್ ಬಳಕೆಯನ್ನು ಹೇಗೆ ನಿಯಂತ್ರಿಸಬೇಕು ಎಂಬ ಕುರಿತು ತಜ್ಞರಿಂದ ಮಾಹಿತಿ ನೀಡಲಾಗುವುದು. ಇಂದಿನ ದಿನಗಳಲ್ಲಿ ಮಕ್ಕಳ ಮೊಬೈಲ್ ಬಳಕೆಯ ಬಗ್ಗೆ ಪಾಲಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.ಮಕ್ಕಳ ಪ್ರತಿಭೆಗೆ ವೇದಿಕೆ:

ಮಕ್ಕಳ ಕಲೆ, ಸಾಹಿತ್ಯ, ನೃತ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮ್ಮೇಳನದ ಪ್ರಮುಖ ಉದ್ದೇಶವಾಗಿದೆ. ಈ ಕುರಿತು ಮಕ್ಕಳ ಸಾಹಿತಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಾಲವಿಕಾಸ ಅಕಾಡೆಮಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಸಾಹಿತಿಗಳನ್ನು ಸಮ್ಮೇಳನದಲ್ಲಿ ಸನ್ಮಾನಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಕ್ಕಳನ್ನು ಗುರುತಿಸಿ ವಿಶೇಷ ಬಹುಮಾನ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.ಗೋಷ್ಠಿಯಲ್ಲಿ ವಿರೂಪಾಕ್ಷ ಪಾಟೀಲ, ಮಂಜುನಾಥ ನರಸಪ್ಪನವರ, ಮೇಘಾ ಹಿರೇಮಠ, ರೇಣುಕಾ ಪುತ್ತನ್ನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಸಾಹಿತಿಗಳನ್ನು ಸಮ್ಮೇಳನದಲ್ಲಿ ಸನ್ಮಾನಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಕ್ಕಳನ್ನು ಗುರುತಿಸಿ ವಿಶೇಷ ಬಹುಮಾನ ನೀಡಲು ನಿರ್ಧರಿಸಲಾಗಿದೆ.

-ಅಡಿವೇಶ ಇಟಗಿ,

ಅಧ್ಯಕ್ಷರು, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ.