ಕೊಪ್ಪಳ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಬುಧವಾರ ಮಕ್ಕಳ ಹಕ್ಕುಗಳು, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಹಾಗೂ ಬಾಲ್ಯ ವಿವಾಹ ನಿಷೇಧ ಮತ್ತು ಪೋಕ್ಸೋ ಕಾಯ್ದೆ ಕುರಿತು ತರಬೇತುದಾರರ ತರಬೇತಿ ಕಾರ್ಯಕ್ರಮ ನಡೆಯಿತು.

ಕೊಪ್ಪಳ: ಸಮಾಜದಲ್ಲಿ ಮಕ್ಕಳನ್ನು ಸುರಕ್ಷಿತವಾಗಿಡುವುದು ಮತ್ತು ರಕ್ಷಿಸುವುದು ಶಿಕ್ಷಕರ ಮೂಲಭೂತ ಕರ್ತವ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಬುಧವಾರ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳು, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಹಾಗೂ ಬಾಲ್ಯ ವಿವಾಹ ನಿಷೇಧ ಮತ್ತು ಪೋಕ್ಸೋ ಕಾಯ್ದೆ ಕುರಿತು ತರಬೇತುದಾರರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಪೋಷಕರಿಗಿಂತ ಶಿಕ್ಷಕರ ಮಾತಿಗೆ ಹೆಚ್ಚಿನ ಮಹತ್ವ ನೀಡುತ್ತಾರೆ. ಆದ್ದರಿಂದ ಶಿಕ್ಷಕರು ಮಕ್ಕಳನ್ನು ತಮ್ಮ ಮಕ್ಕಳಂತೆ ಕಂಡು ಅವರ ಸುರಕ್ಷತೆ ಮತ್ತು ರಕ್ಷಣೆಗೆ ಆದ್ಯತೆ ನೀಡಬೇಕು. ಮಕ್ಕಳ ಮೇಲಿನ ದೌರ್ಜನ್ಯ ಅಥವಾ ಕಿರುಕುಳದ ಯಾವುದೇ ಘಟನೆಯನ್ನು ನಿರ್ಲಕ್ಷಿಸಬಾರದು. ತರಬೇತಿಯಲ್ಲಿ ಪಡೆದ ಮಾಹಿತಿಯನ್ನು ತಮ್ಮ ಶಾಲೆಯ ಇತರ ಶಿಕ್ಷಕರಿಗೂ ಹಂಚಿಕೊಂಡು ತಕ್ಷಣ ಅನುಷ್ಠಾನಗೊಳಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ದರಗದ ಮಾತನಾಡಿ, ಬಾಲ್ಯವಿವಾಹ ಹಾಗೂ ಪೋಕ್ಸೋ ಕಾಯ್ದೆ ಕುರಿತು ಶಿಕ್ಷಕರು ಜಾಗೃತಿ ಹೊಂದುವುದು ಅಗತ್ಯ. ವಿದ್ಯಾರ್ಥಿಗಳು ಸತತ 2-3 ದಿನ ಶಾಲೆಗೆ ಗೈರುಹಾಜರಾದರೆ ಕಾರಣ ವಿಚಾರಿಸುವ ಮೂಲಕ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿ ತಡೆಯಲು ಸಾಧ್ಯ ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್‌ಕುಮಾರ್ ಎನ್. ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ, ಕಿರುಕುಳ ಅಥವಾ ಬಾಲ್ಯವಿವಾಹದ ಮಾಹಿತಿ ದೊರೆತರೆ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ತಿಳಿಸುವುದು ಕಾನೂನಾತ್ಮಕ ಕರ್ತವ್ಯವಾಗಿದೆ ಎಂದರು.

ಯುನಿಸೆಫ್‌ನ ಡಾ. ಕೆ. ರಾಘವೇಂದ್ರ ಭಟ್, ಹರೀಶ ಜೋಗಿ ತರಬೇತಿ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ, ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಸತೀಶ್ ಜಿ. ಉಪಸ್ಥಿತರಿದ್ದರು.