ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನೆಗೆ ಚಿತ್ರದುರ್ಗ ಸಜ್ಜಾಗುತ್ತಿದೆ. ಇಲ್ಲಿನ ಬಸವಕೇಂದ್ರ ಮುರುಘಾಮಠದ ಅನುಭವ ಮಂಟಪದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜು.25 ರಂದು ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮತ್ತು ಹೊಸದುರ್ಗ ಶಾಸಕ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ ಭೇಟಿ ನೀಡಿ ಸಿದ್ದತೆ ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನೆಗೆ ಚಿತ್ರದುರ್ಗ ಸಜ್ಜಾಗುತ್ತಿದೆ. ಇಲ್ಲಿನ ಬಸವಕೇಂದ್ರ ಮುರುಘಾಮಠದ ಅನುಭವ ಮಂಟಪದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜು.25 ರಂದು ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮತ್ತು ಹೊಸದುರ್ಗ ಶಾಸಕ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ ಭೇಟಿ ನೀಡಿ ಸಿದ್ದತೆ ಪರಿಶೀಲನೆ ನಡೆಸಿದರು.ಈ ವೇಳೆ ಮಾತನಾಡಿದ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮುಖ್ಯಮಂತ್ರಿಗಳು ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಗೆ, ಬೆಂಗಳೂರು ವಿಭಾಗದ 9 ಜಿಲ್ಲೆಗಳ ಸಚಿವರು, ಶಾಸಕರು ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಇದರೊಂದಿಗೆ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಹಾಗೂ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್ಪಿ ಮತ್ತು ಅರಣ್ಯ ಸಂರಕ್ಷಣಾಧಿಕಾರಿ ಸೇರಿ ಒಟ್ಟು 350 ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ಭಾಗವಹಿಸುತ್ತಿದ್ದು ಎಲ್ಲಾ ಸಿದ್ಧತೆಗಳು ಪೂರ್ಣಗೊಳ್ಳುವ ಹಂತದಲ್ಲಿವೆ ಎಂದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜು.25ರ ಬೆಳಿಗ್ಗೆ 11ಕ್ಕೆ ಹಿರಿಯೂರು ತಾಲೂಕಿನ ಎರಡ್ಮೂರು ಕಡೆಗಳಲ್ಲಿ ಬರ ಪರಿಶೀಲನೆ ನಡೆಸಿ ನಂತರ ಚಿತ್ರದುರ್ಗದ ಸಭೆಗೆ ಆಗಮಿಸುತ್ತಿದ್ದಾರೆ ಎಂದರು.ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಾಮರ್ಶೆಗಾಗಿ ಜು. 25 ಮತ್ತು 26 ರಂದು ಮುಖ್ಯಮಂತ್ರಿಗಳು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಿದ್ದು, ಈ ಪ್ರವಾಸದ ಅಂಗವಾಗಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.ಜು. 25 ರಂದು ಬೆಳಿಗ್ಗೆ ಆಗಮಿಸಲಿರುವ ಸಿಎಂ ಡಿ.ಕೆ.ಶಿವಕುಮಾರ್ ಅವರು, ಹಿರಿಯೂರು ತಾಲೂಕಿಗೆ ಆಗಲಿದ್ದಾರೆ. ಬಳಿಕ ಮಳೆ ಅಭಾವ ಹಾಗೂ ತೀವ್ರ ಬರದ ಹಿನ್ನೆಲೆ ಒಣಗಿರುವ ಒಂದೆರಡು ಕೃಷಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಲಿದ್ದಾರೆ. ನಂತರ ಮಧ್ಯಾಹ್ನ 12.30ರಿಂದ ಸಂಜೆ 4 ರವರೆಗೆ ನಗರದ ಅನುಭವ ಮಂಟಪದಲ್ಲಿ ಬೆಂಗಳೂರು ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಜು.25ರಂದು ಸಭೆ, ವಾಸ್ತವ್ಯದ ನಂತರ, ಜು.26ರಂದು ದಿವಂಗತ ಮಾಜಿ ಸಚಿವ ಡಿ.ಸುಧಾಕರ್ ಅವರ ‘ನುಡಿನಮನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳಲಿದ್ದಾರೆ ಎಂದರು.
ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಎಸ್ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು. ಸಭೆಯ ನಂತರ ಮುಖ್ಯಮಂತ್ರಿಯವರು ನಗರದ ಭೋವಿ ಮಠಕ್ಕೂ ಭೇಟಿ ನೀಡಲಿದ್ದು, ಎರಡೂ ಕಡೆ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗುತ್ತಿದೆ ಎಂದರು.ಒಟ್ಟಾರೆಯಾಗಿ 3 ಜನ ಎಸ್ಪಿ, 8 ಜನ ಡಿವೈಎಸ್ಪಿ, 20 ಇನ್‌ಸ್ಪೆಕ್ಟರ್ ಗಳು 120 ಪಿಎಸ್‍ಐಗಳು ಹಾಗೂ 1,000ಕ್ಕೂ ಹೆಚ್ಚು ಹೆಚ್‍ಸಿ/ಪಿಸಿ ದರ್ಜೆಯ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ. ಹೆಚ್ಚುವರಿಯಾಗಿ 8 ಕೆಎಸ್‍ಆರ್‍ಪಿ ಹಾಗೂ 10 ಡಿಎಆರ್ ತುಕಡಿಗಳನ್ನು ನಿಯೋಜಿಸಲು ಯೋಜಿಸಲಾಗಿದೆ ಎಂದರು.
ದಾವಣಗೆರೆ ಪೂರ್ವ ವಲಯ ಐಜಿಪಿ ರವಿಕಾಂತೇಗೌಡ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ತಹಸೀಲ್ದಾರ್ ಗೋವಿಂದರಾಜು ಇದ್ದರು.