ಸಾರಾಂಶ
ಕನ್ನಡಪ್ರಭವಾರ್ತೆ, ಚಿತ್ರದುರ್ಗ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮತದಾನ ಕೇಂದ್ರಗಳ ಕರಡು ಪಟ್ಟಿಯನ್ನು ಬಿಡುಗಡೆ ಮಾಡಿದರು.ಜಿಲ್ಲೆಯಲ್ಲಿ ಒಟ್ಟು ಆರು ವಿಧಾನಸಭಾ ಕ್ಷೇತ್ರಗಳಿದ್ದು, ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ 285 ಮತಗಟ್ಟೆಗಳು, ಚಳ್ಳಕೆರೆ-260, ಚಿತ್ರದುರ್ಗ-288, ಹಿರಿಯೂರು-287, ಹೊಸದುರ್ಗ-242 ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ 299 ಮತಗಟ್ಟೆಗಳು ಸೇರಿದಂತೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 1661 ಮತಗಟ್ಟೆಗಳನ್ನು ಹೊಂದಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಎಲ್ಲ ಪಕ್ಷಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಚುನಾವಣಾ ತಹಶೀಲ್ದಾರ್ ಎಲ್.ಜಯಣ್ಣ, ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಮಿತಿ ಸದಸ್ಯ ಯಶವಂತ್ ಕುಮಾರ್, ಸಿಪಿಐ ಡಿಇಒ ಗೌಸ್‍ಪೀರ್, ಬಿಎಸ್‍ಪಿ ಜಿಲ್ಲಾ ಅಧ್ಯಕ್ಷ ಎನ್.ಪ್ರಕಾಶ್ ಸೇರಿದಂತೆ ಮತ್ತಿತರರು ಇದ್ದರು.ನೀತಿಸಂಹಿತೆ ಉಲ್ಲಂಘಿಸಿದರೆ ಕಾನೂನು ಕ್ರಮ: ಆನಂದ್ಚಳ್ಳಕೆರೆ: ಚುನಾವಣಾ ಆಯೋಗ ಲೋಕಸಭಾ ಚುನಾವಣೆಯನ್ನು ಘೋಷಣೆ ಮಾಡಿ, ನೀತಿಸಂಹಿತೆ ಇಂದಿನಿಂದಲೇ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರದ ನಾಮಫಲಕ ಗಳಲ್ಲಿ ರಾಜಕೀಯ ವ್ಯಕ್ತಿಗಳ ಭಾವಚಿತ್ರಕ್ಕೆ ಪೇಪರ್ ಅಂಟಿಸುವುದಲ್ಲದೆ, ಇತರೆ ಖಾಸಗಿ ಕಟೌಟ್‌ಗಳನ್ನು ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಚುನಾವಣಾಧಿಕಾರಿ ಬಿ.ಆನಂದ್ ತಿಳಿಸಿದರು.
ಅವರು, ಈ ಬಗ್ಗೆ ಮಾಹಿತಿ ನೀಡಿ, ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ನಗರದ ನಾಲ್ಕು ಮುಖ್ಯರಸ್ತೆಗಳಲ್ಲಿ ಚೆಕ್‌ಪೋಸ್ಟ್ ನಿರ್ಮಾಣ ಸಿಬ್ಬಂದಿ ವರ್ಗ ತಪಾಸಣೆಗೆ ಮುಂದಾಗಿದ್ದಾರೆ. ಚುನಾವಣೆಗೆ ಈಗಾಗಲೇ ನೇಮಕಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ತಮಗೆ ನಿಯೋಜಿಸಿರುವ ಕರ್ತವ್ಯವನ್ನು ಚಾಚೂ ತಪ್ಪದೆ ನಿರ್ವಹಿಸುವಂತೆ ಮಾರ್ಗದರ್ಶನ ನೀಡಲಾಗಿದೆ ಎಂದರು.ಶಾಂತಿಯುತ ಚುನಾವಣೆಯ ಬಗ್ಗೆ ಈಗಾಗಲೇ ಅಧಿಕಾರಿಗಳ ತಂಡದೊಂದಿಗೆ ಎರಡು ಬಾರಿ ಸಭೆಯನ್ನು ನಡೆಸಿ ಸೂಚನೆ ನೀಡಲಾಗಿದೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಲ್ಲಿ ಯಾವುದೇ ಸೌಲಭ್ಯಕ್ಕೆ ಕೊರತೆ ಉಂಟಾಗದಂತೆ ಜಾಗ್ರತೆ ವಹಿಸಲಾಗುವುದು ಎಂದು ತಿಳಿಸಿದರು.