ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್‌ಪಿ ಕುಶಾಲ್ ಚೌಕ್ಸೆ ಅಧ್ಯಕ್ಷತೆಯಲ್ಲಿ ಮಂಗಳವಾರ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆ ಕಾರ್ಯಕ್ರಮಕ್ಕೆ ಸಂಬಂಸಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಹಿಂದೂ ಮಹಾಗಣಪತಿ ಪ್ರತಿಷ್ಠಾಪನಾ ಸಮಿತಿ ಸದಸ್ಯರ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ನಗರದಲ್ಲಿ ಅ. 3ರಂದು ಜರುಗಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆಗೆ ಯಾವುದೇ ರೀತಿಯ ಲೋಪಬಾರದಂತೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಟ್ಟುನಿಟ್ಟಿನ ಬಂದೋಬಸ್ತ್ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆ ಕಾರ್ಯಕ್ರಮಕ್ಕೆ ಸಂಬಂಸಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಹಿಂದೂ ಮಹಾಗಣಪತಿ ಪ್ರತಿಷ್ಠಾಪನಾ ಸಮಿತಿ ಸದಸ್ಯರೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೊಡ್ಡ ಮಟ್ಟದಲ್ಲಿ ಜನಸಂದಣಿ ಸೇರುವ ಪ್ರಮುಖ ಉತ್ಸವಗಳಲ್ಲಿ ಚಿತ್ರದುರ್ಗದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯೂ ಒಂದಾಗಿದೆ. ಈ ಬಾರಿಯ ಶೋಭಾಯಾತ್ರೆ ಹಾಗೂ ವಿಸರ್ಜನಾ ಮೆರವಣಿಗೆಯಲ್ಲಿ ಸುಮಾರು 3 ರಿಂದ 4 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಕಳೆದ ಹಲವು ವರ್ಷಗಳಿಂದ ವಿವಿಧ ಇಲಾಖೆಗಳ ಉತ್ತಮ ಸಹಕಾರ ಹಾಗೂ ಸಾರ್ವಜನಿಕರ ಸಹಭಾಗಿತ್ವದಿಂದ ಶೋಭಾಯಾತ್ರೆಯು ಅತ್ಯಂತ ಶಾಂತಿಯುತವಾಗಿ ನೆರವೇರುತ್ತಾ ಬಂದಿದೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಪ್ರತಿಯೊಂದು ಇಲಾಖೆಯು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದರು.

ಶಾಂತಿ ಸುವ್ಯವಸ್ಥೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಮೆರವಣಿಗೆ ಸಾಗುವ ಪ್ರಮುಖ ಮಾರ್ಗಗಳಲ್ಲಿ ಶೀಘ್ರದಲ್ಲೇ ಪೊಲೀಸರಿಂದ ಪಥಸಂಚಲನ ನಡೆಸಲಾಗುವುದು. ಭದ್ರತೆ ಹಾಗೂ ಬಂದೋಬಸ್ತ್ ಕೇವಲ ಪೊಲೀಸ್ ಇಲಾಖೆಗೆ ಮಾತ್ರ ಸೀಮಿತವಾಗಿರದೆ, ಪ್ರತಿಯೊಂದು ಇಲಾಖೆಯ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಗತ್ಯ. ವಿವಿಧ ಇಲಾಖೆಗಳಿಗೆ ವಹಿಸಲಾಗಿರುವ ಜವಾಬ್ದಾರಿಗಳ ಕುರಿತು ಈಗಾಗಲೇ ಪತ್ರಗಳನ್ನು ತಲುಪಿಸಲಾಗಿದೆ. ಶೋಭಾಯಾತ್ರೆ ಸಾಗುವ ಮಾರ್ಗದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳ ಅಳವಡಿಕೆ, ವಾಚ್ ಟವರ್ ನಿರ್ಮಾಣ, ಬ್ಯಾನರ್ ಮತ್ತು ಪ್ಲೆಕ್ಸ್ ನಿಯಂತ್ರಣ ಕ್ರಮಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಸಾರ್ವಜನಿಕ ಭದ್ರತೆಯ ದೃಷ್ಠಿಯಿಂದ ಲೋಕೋಪಯೋಗಿ ಇಲಾಖೆ ಹಾಗೂ ಸಾರಿಗೆ ಇಲಾಖೆಯಿಂದ ವಾಹನಗಳು ಮತ್ತು ವೇದಿಕೆಗಳ ಫಿಟ್‍ನೆಸ್ ಪ್ರಮಾಣಪತ್ರಗಳನ್ನು ಸಮಯಕ್ಕೆ ಸರಿಯಾಗಿ ಪಡೆಯುವುದು ಕಡ್ಡಾಯ. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಪ್ರತಿದಿನವೂ ಕೈಗೊಂಡ ಕಾರ್ಯಗಳ ಪರಿಶೀಲನೆ ನಡೆಸಬೇಕು ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಮಾತನಾಡಿ, ಶೋಭಾಯಾತ್ರೆಯಲ್ಲಿ ಭಾಗವಹಿಸುವ ಆಯೋಜಕರು ಹಾಗೂ ಸ್ವಯಂ ಸೇವಕರಿಗೆ ನಿರ್ದಿಷ್ಟ ಬಣ್ಣದ ಟಿ ಶರ್ಟ್ ವ್ಯವಸ್ಥೆ ಮಾಡಬೇಕು. ಜನ ಸಾಮಾನ್ಯರು, ಮಕ್ಕಳು ಹಾಗೂ ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಈಗಾಗಲೇ ಹೊರಡಿಸಿರುವ ಆದೇಶದಂತೆ ಬಂಟಿಂಗ್ಸ್, ಪೇಪರ್ ಬ್ಲಾಸ್ಟರ್ಸ್ ಹಾಗೂ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪೊಲೀಸ್ ಇಲಾಖೆಯ ಅನುಮತಿ ಇಲ್ಲದೆ ಖಾಸಗಿಯವರು ಡ್ರೋನ್ ಕ್ಯಾಮೆರಾ ಹಾರಿಸುವುದನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಡ್ರೋನ್ ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗುವುದು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಚಿತ್ರದುರ್ಗ ಡಿವೈಎಸ್‍ಪಿ ಅರುಣ್ ನಾಗೇಗೌಡ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ತಹಸೀಲ್ದಾರ್ ಬಿ.ಎಂ.ಗೋವಿಂದರಾಜ್, ನಗರಸಭೆ ಪೌರಾಯುಕ್ತೆ ಲಕ್ಷ್ಮೀ, ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನಾ ಸಮಿತಿಯ ಸಂಘಟಕರು ಇದ್ದರು.