ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ನಿಗದಿಪಡಿಸಲಾಗಿರುವ ಎಲ್ಲ ಮತಗಟ್ಟೆಗಳನ್ನು ಮೂಲಭೂತ ಸೌಕರ್ಯಗಳೊಂದಿಗೆ ಸುಸಜ್ಜಿತಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.ಲೋಕಸಭೆ ಚುನಾವಣೆ ಸಿದ್ಧತೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳೊಂದಿಗಿನ ವಿಡಿಯೋ ಸಂವಾದದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮತಗಟ್ಟೆಗಳಿಗೆ ಕಡ್ಡಾಯವಾಗಿ ರ್ಯಾಂಪ್ ವ್ಯವಸ್ಥೆ ಇರಬೇಕು. ಅಲ್ಲದೆ ಶೌಚಾಲಯ, ಕುಡಿವ ನೀರು, ವಿದ್ಯುತ್ ಸಂಪರ್ಕ ಸೇರಿ ಅಗತ್ಯ ಮೂಲಭೂತ ಸೌಕರ್ಯ ಮಾಡಿಕೊಂಡು, ಮತಗಟ್ಟೆಗಳನ್ನು ಚುನಾವಣೆಗೆ ಸುಸಜ್ಜಿತಗೊಳಿಸಬೇಕು. ಅಧಿಕಾರಿಗಳು ಚುನಾವಣೆಗೆ ಅಗತ್ಯವಿರುವ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಚುನಾವಣಾ ಸಿಬ್ಬಂದಿಯನ್ನು ಈಗಾಗಲೇ ಗುರುತಿಸಿದ್ದು, ಮ್ಯಾಪಿಂಗ್ ಕಾರ್ಯ ಪೂರ್ಣಗೊಳಿಸಿರಬೇಕು ಎಂದರು.
ಮತ ಎಣಿಕಾ ಕೇಂದ್ರವನ್ನು ಈಗಾಗಲೆ ಗುರುತಿಸಿದ್ದು, ಅಗತ್ಯವಿರುವ ಸೌಲಭ್ಯಗಳನ್ನು ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಬೇಕು. ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ತಕ್ಷಣದಿಂದಲೇ ಎಂಸಿಸಿ ತಂಡ ಕಾರ್ಯಪ್ರವೃತ್ತರಾಗಬೇಕು, ಅಲ್ಲದೆ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಸ್ಥಾಪಿಸಲಾಗುವ ಚೆಕ್‍ಪೋಸ್ಟ್ ಗಳೂ ಕೂಡ ಕಾರ್ಯಾರಂಭಗೊಳ್ಳುವಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು, ತಹಸೀಲ್ದಾರರು, ಚುನಾವಣಾ ವಿವಿಧ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.