ಸಾರಾಂಶ
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು.
ಮಣಿಪಾಲ: ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಉಡುಪಿದೇಶದ ಅರ್ಹ ಪ್ರತಿಯೊಬ್ಬ ನಾಗರಿಕರು ಮತದಾನದ ಹಕ್ಕನ್ನು ಹೊಂದಿ ಚುನಾವಣಾ ಪ್ರಕ್ರಿಯೆಯಲ್ಲಿ ತಪ್ಪದೇ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್. ಗಂಗಣ್ಣನವರ್ ಕರೆ ನೀಡಿದರು.ಅವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ಜನಸಾಮಾನ್ಯರು ಚುನಾವಣೆಯಲ್ಲಿ ತೋರಿಸುವಂತಹ ಪ್ರಬುದ್ಧತೆಯಿಂದಾಗಿ ಬೇರೆ ಬೇರೆ ಪಕ್ಷಗಳು ಅಧಿಕಾರಕ್ಕೆ ಬಂದರೂ ಕೂಡ ದೇಶದ ಆಡಳಿತಾತ್ಮಕ ಅಳವಡಿಸಿಕೊಂಡಿರುವಂತಹ ಪ್ರಜಾಸತಾತ್ಮಕ ವ್ಯವಸ್ಥೆ ತನ್ನ ಬಹುರೂಪಿ ಅಸ್ಥಿತ್ವದಲ್ಲಿ ತನ್ನತನವನ್ನು ಉಳಿಸಿಕೊಂಡಿದೆ ಎಂದರು.ದೇಶದಲ್ಲಿ ಕಾಲಕಾಲಕ್ಕೆ ನಡೆಯುವ ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತದಾರರು ಭಾಗವಹಿಸುವ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ರೀತಿಯ ಮತದಾರರ ದಿನಾಚಾರಣೆ ಆಚರಿಸಲಾಗುತ್ತಿದೆ ಎಂದು ಹೇಳಿದರು.ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಮತದಾರರು ಅರ್ಜಿ ನಮೂನೆ 6ರ ಅಡಿಯಲ್ಲಿ ವಾಸ ಸ್ಥಳ ಧೃಡಿಕರಣ ಪತ್ರ ಹಾಗೂ ಛಾಯಾಚಿತ್ರಗಳನ್ನು ನೀಡಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಳ್ಳುವುದರೊಂದಿಗೆ ಚುನಾವಣೆ ಪ್ರಕ್ರಿಯೆಗಳಲ್ಲಿ ತೋಡಗಿಸಿಕೊಳ್ಳಬೇಕು ಎಂದರು.ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.ಡಯೆಟ್ ಕಾಲೇಜಿನ ಉಪ ಪ್ರಾಂಶುಪಾಲ ಅಶೋಕ್ ಕಾಮತ್, ಮತದಾನದ ಮಹತ್ವ ಕುರಿತು ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಹೊಸದಾಗಿ ಸೇರ್ಪಡೆಯಾದ ಮತದಾರರಿಗೆ ಮತದಾರರ ಗುರುತಿನ ಚೀಟಿಯನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಚುನಾವಣಾ ಕರ್ತವ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ಸನ್ಮಾನ ಹಾಗೂ ಮತದಾರರ ದಿನಚರಣೆ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಉಡುಪಿ ತಾಲೂಕು ತಹಸೀಲ್ದಾರ್ ಪಿ.ಆರ್. ಗುರುರಾಜ್, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ (ಪ್ರಭಾರ) ನಾಗರಾಜ ವಿ. ನಾಯಕ್ ಸ್ವಾಗತಿಸಿದರು. ಅಶೋಕ್ ಕಾಮತ್ ನಿರೂಪಿಸಿ, ವಂದಿಸಿದರು.