ರೈಲ್ವೆ ಖಾಸಗೀಕರಣ ವಿರೋಧಿಸಿ ಸಿಐಟಿಯು ಪ್ರತಿಭಟನೆ

| Published : Nov 04 2023, 12:31 AM IST

ಸಾರಾಂಶ

ರೈಲ್ವೆ ವಲಯವನ್ನು ಸಂಪೂರ್ಣ ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಅಸ್ತು ಎಂದಿದ್ದು, ಕೂಡಲೇ ಕೇಂದ್ರ ತನ್ನ ನಿಲುವಿನಿಂದ ಹಿಂದಕ್ಕೆ ಸರಿಯಬೇಕು.

ಕನ್ನಡಪ್ರಭ ವಾರ್ತೆ ಬಳ್ಳಾರಿ

ರೈಲ್ವೆ ಖಾಸಗೀಕರಣ ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್(ಸಿಐಟಿಯು) ಕಾರ್ಯಕರ್ತರು ಇಲ್ಲಿನ ಕೇಂದ್ರೀಯ ರೈಲ್ವೆ ನಿಲ್ದಾಣ ಎದುರು ಪ್ರತಿಭಟನೆ ನಡೆಸಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರೈಲ್ವೆ ಸೇರಿದಂತೆ ವಿವಿಧ ವಲಯಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಸರ್ಕಾರಿ ಸ್ವಾಮ್ಯದ ಕ್ಷೇತ್ರಗಳನ್ನು ಬಲಪಡಿಸುವುದು ಬಿಟ್ಟು ದೊಡ್ಡ ದೊಡ್ಡ ಬಂಡವಾಳಗಾರರ ಹಿತ ಕಾಯಲು ಖಾಸಗೀಕರಣದ ಹುನ್ನಾರ ನಡೆದಿದೆ.

ಈ ಮೂಲಕ ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಕೇಂದ್ರದ ಸರ್ಕಾರ ತುದಿಗಾಲಲ್ಲಿ ನಿಂತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ರೈತರ ಹಿತ ಕಾಯುವ ಯಾವುದೇ ಕಾರ್ಯಕ್ರಮ ರೂಪಿಸುತ್ತಿಲ್ಲ. ಬರ ಹಾಗೂ ಹೆಚ್ಚುತ್ತಿರುವ ಕೃಷಿ ವೆಚ್ಚಗಳಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ, ರೈತರ ಸಾಲಮನ್ನಾ ಮಾಡುವ ಕಾಳಜಿ ತೋರಿಸುತ್ತಿಲ್ಲ. ಆದರೆ, ಕಳೆದ 9 ವರ್ಷಗಳಲ್ಲಿ ಸಾರ್ವಜನಿಕ ಒಡೆತನದ ಬ್ಯಾಂಕುಗಳಿಂದ ಕಾರ್ಪೊರೇಟ್ ಕುಳಗಳು ಪಡೆದ ₹14.56 ಲಕ್ಷ ಕೋಟಿ ಸಾಲಮನ್ನಾ ಮಾಡಲಾಗಿದೆ ಎಂದು ದೂರಿದರಲ್ಲದೆ, ಕೇಂದ್ರದ ಹಾದಿ ತಪ್ಪಿದ ಆರ್ಥಿಕ ನೀತಿಯಿಂದ ಪ್ರಸ್ತುತ ದೇಶದ ಸಾಲ ₹153 ಲಕ್ಷ ಕೋಟಿ ಏರಿಕೆಯಾಗಿದೆ ಎಂದು ದೂರಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಐಟಿಯು ಜಿಲ್ಲಾಧ್ಯಕ್ಷ ಜೆ. ಸತ್ಯಬಾಬು ಮಾತನಾಡಿ, ಜನರ ಜೀವನಾಡಿಯಾಗಿರುವ ರೈಲ್ವೆ ವಲಯವನ್ನು ಸಂಪೂರ್ಣ ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಅಸ್ತು ಎಂದಿದ್ದು, ಕೂಡಲೇ ಕೇಂದ್ರ ತನ್ನ ನಿಲುವಿನಿಂದ ಹಿಂದಕ್ಕೆ ಸರಿಯಬೇಕು. ದೇಶದ ಆರ್ಥಿಕ ವ್ಯವಸ್ಥೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ರೈಲ್ವೆಇಲಾಖೆಯನ್ನು ಬಲವರ್ಧನೆಗೊಳಿಸಲು ವಿವಿಧ ಯೋಜನೆಗಳನ್ನು ರೂಪಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ರಾಜ್ಯ ಉಪಾಧ್ಯಕ್ಷ ಆರ್.ಎಸ್. ಬಸವರಾಜ್ ಅವರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಜೆ.ಎಂ. ಚನ್ನಬಸಯ್ಯ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ವಿ.ಎಸ್. ಶಿವಶಂಕರ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಚಂದ್ರಕುಮಾರಿ

ಸೇರಿದಂತೆ ಸಿಐಟಿಯು ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.