ಸಾರಾಂಶ
ಕಾಮಗಾರಿ ಸ್ಥಳದಲ್ಲಿ ಹೆದ್ದಾರಿ ಪ್ರಾಧಿಕಾರದ ಯಾವುದೇ ಅಧಿಕಾರಿಗಳು ಇರದೇ ಇರುವುದು ಕಂಡುಬಂದಿದೆ. ಕಾಮಗಾರಿ ಗುಣಮಟ್ಟದ ಪ್ರಶ್ನೆ ಮಾಡಲು ಅಧಿಕಾರಿಗಳನ್ನು ಸಂಪರ್ಕಿಸಲು ಕರೆ ಮಾಡಿದರೂ ಸಹ ಯಾವುದೇ ಅಧಿಕಾರಿಗಳು ಕರೆ ಸ್ವೀಕರಿಸುತ್ತಿಲ್ಲ, ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಕನ್ನಡ ಬಾರದ ಕಾರಣ ಸರಿಯಾದ ಮಾಹಿತಿಯನ್ನು ಸಹ ಪಡೆಯಲಾಗಲಿಲ್ಲ.
ಕನ್ನಡಪ್ರಭ ವಾರ್ತೆ ಮಂಡ್ಯ
ನಗರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ಪಾದಚಾರಿ ರಸ್ತೆ ಕಾಮಗಾರಿ ಬಗ್ಗೆ ನಗರಸಭಾ ಅಧ್ಯಕ್ಷ ಎಂ.ವಿ.ನಾಗೇಶ್ ಅಸಮಾಧಾನ ವ್ಯಕ್ತಪಡಿಸಿದರು.ಮಂಡ್ಯ ನಗರ ವ್ಯಾಪ್ತಿಯಲ್ಲಿ ೩೩ ಕೋಟಿ ರು. ವೆಚ್ಚದ ಪಾದಚಾರಿ ರಸ್ತೆ ಕಾಮಗಾರಿ ಗುಣಮಟ್ಟದಿಂದ ನಡೆಯುತ್ತಿಲ್ಲವೆಂಬ ಸಾರ್ವಜನಿಕರ ದೂರಿನ ಮೇರೆಗೆ ಸಾರಿಗೆ ಬಸ್ ನಿಲ್ದಾಣದ ಬಳಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಕಾಮಗಾರಿಗೆ ಬಳಸುತ್ತಿರುವ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿಲ್ಲದಿರುವುದು ಕಂಡುಬಂದಿದೆ.
ಕಾಮಗಾರಿ ಸ್ಥಳದಲ್ಲಿ ಹೆದ್ದಾರಿ ಪ್ರಾಧಿಕಾರದ ಯಾವುದೇ ಅಧಿಕಾರಿಗಳು ಇರದೇ ಇರುವುದು ಕಂಡುಬಂದಿದೆ. ಕಾಮಗಾರಿ ಗುಣಮಟ್ಟದ ಪ್ರಶ್ನೆ ಮಾಡಲು ಅಧಿಕಾರಿಗಳನ್ನು ಸಂಪರ್ಕಿಸಲು ಕರೆ ಮಾಡಿದರೂ ಸಹ ಯಾವುದೇ ಅಧಿಕಾರಿಗಳು ಕರೆ ಸ್ವೀಕರಿಸುತ್ತಿಲ್ಲ, ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಕನ್ನಡ ಬಾರದ ಕಾರಣ ಸರಿಯಾದ ಮಾಹಿತಿಯನ್ನು ಸಹ ಪಡೆಯಲಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಕಾಮಗಾರಿ ಗುಣಮಟ್ಟದ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಸಹ ಇದುವರೆಗೂ ಯಾವುದೇ ಅಧಿಕಾರಿಗಳು ಕಾಮಗಾರಿ ವೀಕ್ಷಣೆಗೆ ಬಂದಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷ ಎಂ.ಪಿ.ಅರುಣ್‌ಕುಮಾರ್ ಇತರರಿದ್ದರು.