ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನೈರ್ಮಲ್ಯೀಕರಣದ ಮೂಲಕ ಸಾರ್ವಜನಿಕರ ಆರೋಗ್ಯ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುವ ಪೌರಕಾರ್ಮಿಕರು ತಮ್ಮ ಆರೋಗ್ಯಕ್ಕೆ ಒತ್ತು ಕೊಡುವ ಜೊತೆಗೆ ಮಕ್ಕಳ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಬೇಕೆಂದು ಉಪನ್ಯಾಸಕ ಎನ್.ಚಂದ್ರಶೇಖರ್ ಸಲಹೆ ನೀಡಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಗರಸಭೆ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪೌರಕಾರ್ಮಿಕರಿಗೆ ಸರ್ಕಾರಿ ಯೋಜನೆಗಳ ಅರಿವು ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಆರೋಗ್ಯ ರಕ್ಷಣೆಗೆ ಒತ್ತು ನೀಡಿಸದಾ ಅನೈರ್ಮಲ್ಯದ ನಡುವೆಯೇ ಬದುಕು ದೂಡುವ ಪೌರಕಾರ್ಮಿಕರಿಗೆ ಸರ್ಕಾರ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿ ತಮಗೆ ತಾವೇ ಸಮಸ್ಯೆ ತಂದೊಡ್ಡುಕೊಳ್ಳುತ್ತಾರೆ. ಸಮೀಕ್ಷೆಯೊಂದರ ಪ್ರಕಾರ ಪೌರ ಕಾರ್ಮಿಕರ ಸರಾಸರಿ ಆಯಸ್ಸು 45-50 ವರ್ಷಗಳು ಎಂಬ ಮಾಹಿಯಿದ್ದು ಆತಂಕಕಾರಿ ಸಂಗತಿ ಎಂದರು.
ವಿದೇಶದಲ್ಲಿ ಶಿಕ್ಷಣಕ್ಕೆ ಅವಕಾಶತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶೇಷಾದ್ರಿ ಮಾತನಾಡಿ, ಪರಿಶಿಷ್ಟ ಪೌರಕಾರ್ಮಿಕರು ಮತ್ತವರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ವಿದೇಶಗಳಲ್ಲಿನ 200 ವಿಶ್ವವಿದ್ಯಾಲಯಗಳಲ್ಲಿ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆಯ್ಕೆಯಾಗುವವರಿಗೆ 50 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು ಎಂದರು.ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಜೆ.ನಾಗರಾಜ್,ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ಅಧಿಕಾರಿ ಶ್ರೀನಿವಾಸ್, ನಗರಸಭೆ ಪರಿಸರ ಅಭಿಯಂತರ ಉಮಾಶಂಕರ್, ನಗರಸಭೆಯ ಪೌರಕಾರ್ಮಿಕರು ಮತ್ತು ಅವರ ಮಕ್ಕಳು ಇದ್ದರು.