ಸೆ.14ರಿಂದ ಅ.2ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ: ಡಿಸಿ ಡಾ.ಕೆ.ವಿದ್ಯಾಕುಮಾರಿ

| Published : Sep 07 2024, 01:34 AM IST

ಸೆ.14ರಿಂದ ಅ.2ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ: ಡಿಸಿ ಡಾ.ಕೆ.ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ರಜತಾದ್ರಿಯ ಜಿಪಂ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಪಾಕ್ಷಿಕ ವಿಶೇಷ ಆಂದೋಲನ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಣಿಪಾಲ

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಸೆಪ್ಟಂಬರ್ 14ರಿಂದ ಅಕ್ಟೋಬರ್ 2ರ ವರೆಗೆ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.

ಅವರು ಶುಕ್ರವಾರ ಇಲ್ಲಿನ ರಜತಾದ್ರಿಯ ಜಿಪಂ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಪಾಕ್ಷಿಕ ವಿಶೇಷ ಆಂದೋಲನ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಲ್ಲಿ ನೈರ್ಮಲ್ಯ, ಶುಚಿತ್ವದ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯಗಳು ಈ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ ಎಂಬ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಅಧಿಕಾರಿಗಳ‍ು ಸಾರ್ವಜನಿಕರಿಗೆ ತಮ್ಮ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಯ ಮಹತ್ವದ ಕುರಿತು ಮಾಹಿತಿ ನೀಡುವುದರೊಂದಿಗೆ ಅವರಲ್ಲಿ ಜಾಗೃತಿ ಮೂಡಿಸಬೇಕು. ಜನಪ್ರತಿನಿಧಿಗಳನ್ನು ಸೇರಿಸಿ ಬೀಚ್ ಡ್ರೈವ್ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಜಿಲ್ಲೆಯ ಜನನಿಬಿಡ ಪ್ರದೇಶಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಪ್ರವಾಸಿ ತಾಣ, ರಾಷ್ಟ್ರೀಯ ಹೆದ್ದಾರಿಗಳ ಬದಿಗಳಲ್ಲಿ, ನೀರಿನ ಮೂಲಗಳು, ಮಾರುಕಟ್ಟೆ ಪ್ರದೇಶ, ಧಾರ್ಮಿಕ ಕೇಂದ್ರ, ಘನ ತ್ಯಾಜ್ಯ ನಿರ್ವಹಣಾ ಘಟಕ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಶ್ರಮದಾನ ಚಟುವಟಿಕೆಗಳನ್ನು ಆಯೋಜಿಸುವುದರೊಂದಿಗೆ ಎಲ್ಲ ತಾಲೂಕಿನ ಗ್ರಾಮ ಪಂಚಾಯಿತಿಗಳು ಗ್ರಾಮಗಳ ಸ್ವಚ್ಛತೆಗಾಗಿ ಸ್ವಯಂ ಪ್ರೇರಿತವಾಗಿ ಶ್ರಮದಾನ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಪ್ರತಿಜ್ಞಾ ವಿಧಿ, ಮಾನವ ಸರಪಳಿ, ಗಿಡ ನೆಡುವುದು, ಅರಿವು ಕಾರ್ಯಾಗಾರ, ಜಾಥಾ ಆಯೋಜನೆ ಸೇರಿದಂತೆ ಮತ್ತಿತರ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮಕೈಗೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಸಫಾಯಿ ಮಿತ್ರ ಸುರಕ್ಷಾ ಶಿಬಿರ ಮೂಲಕ ಜಿಲ್ಲೆಯ ನೈರ್ಮಲ್ಯ ಕಾರ್ಯಕರ್ತರುಗಳಿಗೆ ಉಚಿತ ಆರೋಗ್ಯ ತಪಾಸಣೆ, ಅಗತ್ಯ ವ್ಯಾಕ್ಸಿನೇಷನ್, ಔದ್ಯೋಗಿಕ ಅಪಾಯಗಳಿಂದ ರಕ್ಷಿಸಲು ಆಯ್ದ ಕಾರ್ಮಿಕರುಗಳಿಗೆ ಪಿ.ಪಿ.ಇ ಕಿಟ್, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಮತ್ತು ಮಂಜೂರಾತಿ ಪತ್ರಗಳನ್ನು ವಿತರಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಹಸೀಲ್ದಾರ್‌ಗಳು, ತಾಲೂಕು ಪಂಚಾಯಿತಿ ಇಒಗಳು, ಪಿ.ಡಿ.ಒಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.