ಸಾರಾಂಶ
ಮೂರ್ನಾಡು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಲಕಾವೇರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ಭಾಗಮಂಡಲ ಗ್ರಾಮ ಪಂಚಾಯಿತಿ ಸಹಕಾರ ನೀಡಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿಗೆ ಸಮೀಪದ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳು ಶನಿವಾರ ತಲಕಾವೇರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು.ಭಾಗಮಂಡಲದಿಂದ ತಲಕಾವೇರಿಯ ಕಡೆಗೆ ಹೋಗುವ ರಸ್ತೆಯ ಎರಡು ಬದಿಗಳಲ್ಲಿ ಇದ್ದ ಪ್ಲಾಸ್ಟಿಕ್, ಪೇಪರ್ ಕಸಗಳನ್ನು ಹೆಕ್ಕಿ ಸಂಗ್ರಹಿಸಿ ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದರು. ಕಸಗಳನ್ನು ಚೀಲಗಳಲ್ಲಿ ತುಂಬಿ ವಿಲೇವಾರಿ ಮಾಡಿದರು.
ಭಾಗಮಂಡಲ ಗ್ರಾಮ ಪಂಚಾಯಿತಿ ಸಹಕಾರದಿಂದ ಈ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಮೂರ್ನಾಡು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ನಂದೇಟಿರ ರಾಜ ಮಾದಪ್ಪ ಹಾಗೂ ಮೂರ್ನಾಡು ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಮುಂಡಂಡ ನಂದ ಚಂಗಪ್ಪ ನವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಧಿಕಾರಿಗಳಾದ ದಮಯಂತಿ ಹಾಗೂ ಉಪನ್ಯಾಸಕಿಯಾದ ಉಷಾ ಕೈಜೋಡಿಸಿದರು. ಹಾಗೆಯೇ ಮೂರ್ನಾಡು ವಿದ್ಯಾ ಸಂಸ್ಥೆಯ ವತಿಯಿಂದ ತಲಕಾವೇರಿಯಲ್ಲಿ ಭಕ್ತಾದಿಗಳಿಗೆ ಬೆಳಗಿನ ಉಪಹಾರ ಹಾಗೂ ಅನ್ನಸಂತರ್ಪಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.