ಸ್ವಚ್ಛತಾ ಕಾರ್ಯ ಒಂದು ದಿನಕ್ಕೆ ಸೀಮಿತವಾಗದಿರಲಿ: ನ್ಯಾ.ಆರ್.ಮಹೇಶ್ ಸಲಹೆ

| Published : Oct 01 2024, 01:18 AM IST

ಸ್ವಚ್ಛತಾ ಕಾರ್ಯ ಒಂದು ದಿನಕ್ಕೆ ಸೀಮಿತವಾಗದಿರಲಿ: ನ್ಯಾ.ಆರ್.ಮಹೇಶ್ ಸಲಹೆ
Share this Article
  • FB
  • TW
  • Linkdin
  • Email

ಸಾರಾಂಶ

ಆಶುಚಿತ್ವದಿಂದ ಸಾಕಷ್ಟು ಸಾಂಕ್ರಾಮಿಕ ಕಾಯಿಲೆಗಳು ಹರಡುತ್ತದೆ. ಹೀಗಾಗಿ ನಾವು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಮಹತ್ವದ ಕಾರ್ಯಕ್ರಮಕ್ಕೆ ಎಲ್ಲರೂ ಅಗತ್ಯ ಸಹಕಾರ ನೀಡಿ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ರೋಗ- ರುಜಿನಗಳಿಂದ ಮುಕ್ತರಾಗಿ ಬದುಕಬಹುದು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಸ್ವಚ್ಛತಾ ಕಾರ್ಯಕ್ರಮಗಳು ಒಂದು ದಿನಕ್ಕೆ ಸೀಮಿತವಾಗದೇ ಪ್ರತಿಯೊಬ್ಬ ನಾಗರಿಕ, ಪ್ರತಿ ದಿನ ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಕೆಲಸ ಮಾಡಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಹೇಶ್ ಸಲಹೆ ನೀಡಿದರು.

ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಸ್ವಚ್ಛ ಭಾರತ ಅಭಿಯಾನದಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ನಗರಾಭಿವೃದ್ಧಿ ಇಲಾಖೆ, ಸ್ವಚ್ಛ ಭಾರತ್ ಮಿಷನ್, ಪೌರಾಡಳಿತ ನಿರ್ದೇಶನಾಲಯ, ಪುರಸಭೆ ಕಾರ್ಯಾಲಯದ ಸಹಕಾರದೊಂದಿಗೆ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಶ್ರಮದಾನದಲ್ಲಿ ರಸ್ತೆ ಮೇಲಿನ ಕಸದ ರಾಶಿಯನ್ನು ಸ್ವಚ್ಛಗೊಳಿಸಿ ಮಾತನಾಡಿದರು.

ಆಶುಚಿತ್ವದಿಂದ ಸಾಕಷ್ಟು ಸಾಂಕ್ರಾಮಿಕ ಕಾಯಿಲೆಗಳು ಹರಡುತ್ತದೆ. ಹೀಗಾಗಿ ನಾವು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಮಹತ್ವದ ಕಾರ್ಯಕ್ರಮಕ್ಕೆ ಎಲ್ಲರೂ ಅಗತ್ಯ ಸಹಕಾರ ನೀಡಿ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ರೋಗ- ರುಜಿನಗಳಿಂದ ಮುಕ್ತರಾಗಿ ಬದುಕಬಹುದು ಎಂದು ಹೇಳಿದರು.

ಅಪರ ಸಿವಿಲ್ ನ್ಯಾಯಾಧೀಶ ಕೆ.ಎನ್.ಕಿಶೋರ್‌ಕುಮಾರ್ ಮಾತನಾಡಿ, ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಸೇರಿ ಸಿಬ್ಬಂದಿ ವರ್ಗ ಸ್ಚಚ್ಛತೆ ಕಾರ್ಯಕ್ರಮ ಹಮ್ಮಿಕೊಂಡು ಚಾಲನೆ ನೀಡಿದ್ದೇವೆ. ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಪ್ರತಿಯೊಬ್ಬ ಸಾಮಾನ್ಯ ನಾಗರಿಕನೂ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು.

ಜೆಎಂಎಫ್‌ಸಿ ನ್ಯಾಯಾಲಯದ ಎಲ್ಲಾ ನ್ಯಾಯಾಧೀಶರು ಕೈಗೆ ಗ್ಲೌಸ್ ಧರಿಸಿಕೊಂಡು ನ್ಯಾಯಾಲಯದ ಆವರದಲ್ಲಿನ ಕಸವನ್ನು ಪೊರಕೆಯಿಂದ ಸ್ವಚ್ಛಗೊಳಿಸಿದರು. ಇದಕ್ಕೆ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಪೊಲೀಸ್ ಇಲಾಖೆ ಅಧಿಕಾರಿಗಳು ಸಹಕಾರ ನೀಡಿದರು.

ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಬಾಬು, ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಬಿ.ಪಾರ್ವತಮ್ಮ, ಎರಡನೇ ಅಪರ ಸಿವಿಲ್ ನ್ಯಾಯಾಧೀಶೆ ಎಂ.ಪದ್ಮ, ವಕೀಲರ ಸಂಘದ ಅಧ್ಯಕ್ಷ ಕಾಳೇಗೌಡ, ಪುರಸಭೆ ಮುಖ್ಯಾಧಿಕಾರಿ ಸತೀಶ್‌ಕುಮಾರ್, ಪರಿಸರ ಇಂಜಿನಿಯರ್ ಶಫಿನಾಜ್, ಆರೋಗ್ಯ ನಿರೀಕ್ಷಕ ಶ್ರೀನಾಥ್, ಪಿಎಸ್‌ಐ ಆರ್.ಬಿ.ಉಮೇಶ್, ನ್ಯಾಯಾಲಯದ ಸಿಬ್ಬಂದಿ ಮನು, ಮಂಚಯ್ಯ ಇತರರು ಇದ್ದರು.