ಸಾರಾಂಶ
ಕನ್ನಡ ಪ್ರಭ ವಾರ್ತೆ ಮುಧೋಳ
ನಗರ ಮತ್ತು ತಾಲೂಕಿನಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಬೇಕು, ಸರ್ಕಾರಿ ಜಾಗ ಅತಿಕ್ರಮಣ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಮುಲಾಜುವಿಲ್ಲದೆ ತೆರವುಗೊಳಿಸಬೇಕು ಎಂದು ತಹಸೀಲ್ದಾರ್, ನಗರಸಭೆ ಪೌರಾಯುಕ್ತಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಸೂಚನೆ ನೀಡಿದರು.ಮುಧೋಳ ತಾಪಂ ಸಭಾಭವನದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ದ್ವಿತೀಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರಸಭೆ ವ್ಯಾಪ್ತಿಯಲ್ಲಿರುವ ಸಮುದಾಯ ಭವನಗಳನ್ನು ಕೆಲವು ಪ್ರಭಾವಿ ವ್ಯಕ್ತಿಗಳು ಬಳಸುತ್ತಿದ್ದಾರೆಂದು ಸಾರ್ವಜನಿಕರಿಂದ ದೂರುಗಳು ಬಂದಿವೆ. ಕಾರಣ ಸಮುದಾಯ ಭವನಗಳನ್ನು ತಮ್ಮ ಸ್ವಾಧೀನದಲ್ಲಿ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹಳೆಯ ಸರ್ಕಾರಿ ಆಸ್ಪತ್ರೆಯಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಯನ್ನು ಒಂದು ತಿಂಗಳೊಗಾಗಿ ತಾಲೂಕು ಆಡಳಿತ ಭವನಕ್ಕೆ ಸ್ಥಳಾಂತರಗೊಳಿಸುವ ವ್ಯವಸ್ಥೆ ಮಾಡಬೇಕೆಂದು ತಹಸೀಲ್ದಾರಗೆ ಸೂಚಿಸಿದ ಸಚಿವ ತಿಮ್ಮಾಪುರ, ನಗರ ಸಾರಿಗೆ ಇಲಾಖೆಯಲ್ಲಿ ಕನಿಷ್ಠ 25 ಬಸ್ ಗಳ ಕೊರತೆ ಇದ್ದು, ಅವುಗಳ ಪೂರೈಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.ಸಮಾಜ ಕಲ್ಯಾಣ ಹಾಗೂ ಬಿಸಿಎಂ ಇಲಾಖೆ ವ್ಯಾಪ್ತಿಯಲ್ಲಿರುವ ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶುದ್ಧ ಮತ್ತು ಗುಣಮಟ್ಟದ ಆಹಾರವನ್ನು ಮಕ್ಕಳಿಗೆ ನೀಡಬೇಕು. ವಿದ್ಯಾರ್ಥಿಗಳು ಅಥವಾ ಪಾಲಕರಿಂದ ದೂರುಗಳು ಬಾರದಂತೆ ನೋಡಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು.
ಮಾರ್ಚ್ ತಿಂಗಳೊಳಗೆ ಸರ್ಕಾರದ ಅನುದಾನ ಬಳಕೆ ಮಾಡಿಕೊಳ್ಳಬೇಕು, ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಲೋಕಸಭೆ ಚುನಾವಣೆ ನೀತಿಸಂಹಿತೆ ಘೋಷಣೆ ಆಗುವ ಮುನ್ನವೇ ಎಲ್ಲ ಕೆಲಸಗಳನ್ನು ಪೂರ್ಣ ಮಾಡಬೇಕೆಂದು ಸಚಿವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಮುಧೋಳ ನಗರದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಸಾರ್ವಜನಿಕರು ಭಯಗೊಂಡಿದ್ದಾರೆ. ಕಳ್ಳತನ ನಡೆಯದಂತೆ ಪೊಲೀಸರು ಎಚ್ಚೆತ್ತುಕೊಳ್ಳಬೇಕು, ಈಗಾಗಲೇ ನಡೆದಿರುವ ಕಳ್ಳತನ ಪ್ರಕರಣ ಪತ್ತೆ ಹಚ್ಚುವಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸಚಿವರು ಹೇಳಿದರು.
ಮುಧೋಳ ನಗರ ಮಧ್ಯಭಾಗದಲ್ಲಿ ಹಾಯ್ದು ಹೋಗಿರುವ ರಸ್ತೆಯಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಲಿವೆ. ಅಪಘಾತಗಳನ್ನು ತಡೆಗಟ್ಟಲು ಆಯ ಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು ಮತ್ತು ಟ್ರಾಫಿಕ್ ಜಾಮ್ ಆಗದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು.ಇದೆ ವೇಳೆ ಸಚಿವರು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ತಹಸೀಲ್ದಾರ್ ವಿನೋದ ಹತ್ತಳ್ಳಿ, ತಾಪಂ ಆಡಳಿತಾಧಿಕಾರಿ ಸಿದ್ರಾಮೇಶ್ವರ ಉಕ್ಕಲಿ, ತಾಲೂಕು ಪಂಚಾಯತಿ ಪ್ರಭಾರಿ ಕಾರ್ಯನಿರ್ವಹಣಾಧಿಕಾರಿ ಸಂಜಯ ಹಿಪ್ಪರಗಿ, ಡಿವೈಎಸ್ಪಿ ಶಾಂತವೀರ, ಸಿಪಿಐ ಮಹಾದೇವ ಶಿರಹಟ್ಟಿ ವೇದಿಕೆ ಮೇಲಿದ್ದರು. ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.