ಸಾರಾಂಶ
ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಂಡ ತರಬೇತಿ ಕಾರ್ಯಗಾರವನ್ನು ಆರೋಗ್ಯಾಧಿಕಾರಿ ಡಾ.ಎನ್.ಕಾಶಿ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಚಳ್ಳಕೆರೆ
ರಾಷ್ಟ್ರೀಯ ಹವಾಮಾನ ವೈಪರಿತ್ಯ ಹಾಗೂ ಮಾನವನ ಆರೋಗ್ಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ನಗರದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಎನ್.ಕಾಶಿ ಉದ್ಘಾಟಿಸಿದರು.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದಿಢೀರನೆ ಹವಾಮಾನದಲ್ಲಿ ಉಂಟಾಗುವ ಬದಲಾವಣೆಯಿಂದ ಸಾರ್ವಜನಿಕರು ಅನೇಕ ತೊಂದರೆ ಎದುರಿಸಬೇಕಾಗುತ್ತದೆ. ಹವಾಮಾನ ಬದಲಾವಣೆ ನೈಸರ್ಗಿಕ ಕ್ರಿಯೆಯಾಗಿದೆ. ಹವಾಮಾನ ಬದಲಾವಣೆಯಿಂದ ಆಗಬಹುದಾದ ಸಮಸ್ಯೆಗಳಿಂದ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ವಿಶೇಷವಾಗಿ ಹಿರಿಯೂರು, ಮೊಳಕಾಲ್ಮೂರು, ಚಳ್ಳಕೆರೆ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಈ ತರಬೇತಿ ಆಯೋಜಿಸಿದೆ. ತರಬೇತಿಯಲ್ಲಿ ನೀವು ಪಡೆಯುವ ಮಾಹಿತಿಯನ್ನು ನಿಮ್ಮ ಗ್ರಾಮದ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ತಿಳಿಸಿ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮೇಲ್ವಿಚಾರಕರಾದ ಸುರೇಶ್‌ಬಾಬು ಮಾತನಾಡಿ, ಮೂರು ತಾಲೂಕುಗಳ ಆಶಾ ಕಾರ್ಯಕರ್ತೆಯರ ಸಭೆಯಾಗಿದೆ. ಹವಾಮಾನ ಮತ್ತು ಅದರ ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಉಂಟು ಮಾಡಲು ಈ ಕಾರ್ಯಕ್ರಮ ಆಯೋಜಿಸಿದೆ. ಗ್ರಾಮೀಣ ಭಾಗಗಳಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಮೇಲ್ವಿಚಾರಕ ಮಲ್ಲಿಕಾರ್ಜುನ್, ಲೋಕೇಶ್ ನಾಯ್ಡು, ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಎಚ್.ರಾಜು, ಅಮೃತರಾಜ್, ಎಸ್.ಬಿ.ತಿಪ್ಪೇಸ್ವಾಮಿ ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.