ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15ರಂದು ನಡೆಯುವ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ 80 ಮಂದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿ ಪ್ರಶಂಸಾ ಪತ್ರ ವಿತರಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.ಸ್ವಾತಂತ್ರ್ಯ ದಿನಾಚರಣೆ ಪೂರ್ವ ತಯಾರಿ ಕುರಿತು ಬುಧವಾರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾರಂಭ ಸುಸೂತ್ರವಾಗಿ ನಡೆಯಲು ಬೇಕಾದ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶಿಸಲಾಗಿದೆ. ಉಳಿದಂತೆ ಇಲಾಖಾವಾರು ಅಧಿಕಾರಿಗಳಿಗೆ ನೀಡಲಾದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಆಸನಗಳ ವ್ಯವಸ್ಥೆ, ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಯಾವ ದ್ವಾರದಲ್ಲಿ ಪ್ರವೇಶ ನೀಡಬೇಕು. ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಲ್ಲಿ ಯಾವುದೇ ಗೊಂದಲವಾಗದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಲಾಗಿದೆ ಎಂದು ಹೇಳಿದರು.
ಜಲಮಂಡಳಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೈದಾನದಲ್ಲಿ ಶೌಚಾಲಯಗಳ ವ್ಯವಸ್ಥೆ, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು, ಭದ್ರತೆಯ ದೃಷ್ಠಿಯಿಂದ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪ್ರಥಮ ಚಿಕಿತ್ಸೆ ವ್ಯವಸ್ಥೆಗಾಗಿ ಆ್ಯಂಬುಲೆನ್ಸ್ ಜತೆಗೆ ಅಗತ್ಯ ಔಷಧಿ ಹಾಗೂ ಸಿಬ್ಬಂದಿ ನಿಯೋಜಿಸಬೇಕೆಂದು ನಿರ್ದೇಶಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಾಭ್ಯಾಸ ಮಾಡುವ ವೇಳೆ ಅವರಿಗೆ ತಿಂಡಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು. ಆವರಣ ಹಾಗೂ ಆವರಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಪೂರ್ಣ ಸ್ವಚ್ಛತೆ ಕಾಪಾಡಬೇಕೆಂದು ಸೂಚಿಸಲಾಗಿದೆ ಎಂದರು.ಈ ವೇಳೆ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸ್ನೇಹಲ್, ವಿನೋತ್ ಪ್ರಿಯಾ, ರಮ್ಯಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್, ಉಪ ಆಯುಕ್ತ ಮಂಜುನಾಥ ಸ್ವಾಮಿ ಉಪಸ್ಥಿತರಿದ್ದರು.
ಚಾಮರಾಜಪೇಟೆಯಲ್ಲಿ ಸ್ವಾತಂತ್ರ್ಯೋತ್ಸವಕಳೆದ ಬಾರಿಯಂತೆ ಚಾಮರಾಜಪೇಟೆಯ ಮೈದಾನದಲ್ಲಿ ಬೆಂಗಳೂರು ನಗರ ಜಿಲ್ಲಾಡಳಿತದಿಂದಲೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗುವುದು. ಶಾಲಾ ಮಕ್ಕಳು ಹಾಗೂ ಸ್ಥಳೀಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಪ್ರಮೋದ್ ಪಾಟೀಲ್ ಧ್ವಜಾರೋಹಣ ಮಾಡಲಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಮಾಹಿತಿ ನೀಡಿದ್ದಾರೆ.