ಕನ್ನಡಪ್ರಭ ವಾರ್ತೆ ಬೆಳಗಾವಿಐತಿಹಾಸಿಕ ಚನ್ನಮ್ಮನ ಕಿತ್ತೂರು ಉತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅ.25ರಂದು ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ. ಎರಡು ದಿನಗಳ ಪ್ರವಾಸದಲ್ಲಿ ಕಿತ್ತೂರು ಉತ್ಸವ, ಜತೆಗೆ ಸವದತ್ತಿ ಯಲ್ಲಮ್ಮನಗುಡ್ಡದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ, ಕಬ್ಬಿನ ದರ ಹಾಗೂ ರೈತರ ಸಮಸ್ಯೆಗಳ ಕುರಿತು ಅ.26ರಂದು ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ಕಬ್ಬು ಬೆಳೆಗಾರರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಐತಿಹಾಸಿಕ ಚನ್ನಮ್ಮನ ಕಿತ್ತೂರು ಉತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅ.25ರಂದು ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ. ಎರಡು ದಿನಗಳ ಪ್ರವಾಸದಲ್ಲಿ ಕಿತ್ತೂರು ಉತ್ಸವ, ಜತೆಗೆ ಸವದತ್ತಿ ಯಲ್ಲಮ್ಮನಗುಡ್ಡದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ, ಕಬ್ಬಿನ ದರ ಹಾಗೂ ರೈತರ ಸಮಸ್ಯೆಗಳ ಕುರಿತು ಅ.26ರಂದು ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ಕಬ್ಬು ಬೆಳೆಗಾರರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ.ಅ.25ರಂದು ಮಧ್ಯಾಹ್ನ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಸಂಜೆ 4.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ರಸ್ತೆ ಮೂಲಕ ಸಂಜೆ 5.20ಕ್ಕೆ ಕಿತ್ತೂರು ತಲುಪಲಿದ್ದಾರೆ. ಕಿತ್ತೂರು ಉತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8ಕ್ಕೆ ಕಿತ್ತೂರಿನಿಂದ ಬೆಳಗಾವಿಗೆ ಆಗಮಿಸಿ ರಾತ್ರಿ ವಾಸ್ತವ್ಯ ಮಾಡಲಿದ್ದಾರೆ.
ಕಬ್ಬಿನ ವಿಚಾರಕ್ಕೆ ಪ್ರತ್ಯೇಕ ಸಭೆ:ಅ.26ರಂದು ಬೆಳಗ್ಗೆ 10ಕ್ಕೆ ಬೆಳಗಾವಿಯ ಸರ್ಕ್ಯೂಟ್ ಹೌಸ್ ಬಳಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಹಾಗೂ ಮೆರವಣಿಗೆಗೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಬಳಿಕ ಸುವರ್ಣ ವಿಧಾನಸೌಧಕ್ಕೆ ತೆರಳಿ ಬೆಳಗ್ಗೆ 11ಕ್ಕೆ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 1.30ಕ್ಕೆ ಸವದತ್ತಿ ಯಲ್ಲಮ್ಮನಗುಡ್ಡಕ್ಕೆ ತೆರಳಲಿದ್ದು, ಪ್ರವಾಸೋದ್ಯಮ, ಮುಜರಾಯಿ, ಲೋಕೋಪಯೋಗಿ ಇಲಾಖೆ ಹಾಗೂ ಸಂಬಂಧಿತ ಪ್ರಾಧಿಕಾರ ಮತ್ತು ಸಮಿತಿಗಳ ಆಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಬಳಿಕ ಬೆಳಗಾವಿಗೆ ಮರಳುವ ಸಿಎಂ ಮಧ್ಯಾಹ್ನ 3.30ಕ್ಕೆ ಸುವರ್ಣ ವಿಧಾನಸೌಧದಲ್ಲಿ ಕಬ್ಬು ಬೆಳೆಗಾರೊಂದಿಗೆ ಸಭೆ ನಡೆಸಲಿದ್ದಾರೆ. ಕಬ್ಬಿನ ದರ ಸೇರಿ ರೈತರ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.
ಒಂದೇ ದಿನ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರೊಂದಿಗೆ ಪ್ರತ್ಯೇಕ ಸಭೆ ನಡೆಸುತ್ತಿರುವುದು ಮಹತ್ವ ಪಡೆದಿದೆ. ರೈತರ ಹೋರಾಟ ತೀವ್ರಗೊಂಡಿರುವ ಸಂದರ್ಭದಲ್ಲಿ ಈ ಎರಡೂ ಸಭೆಗಳತ್ತ ರೈತರು ಹಾಗೂ ಸಕ್ಕರೆ ಉದ್ಯಮದ ಚಿತ್ತ ನೆಟ್ಟಿದೆ. ಸಭೆಗಳ ಬಳಿಕ ಸಂಜೆ 6ಕ್ಕೆ ಸುವರ್ಣ ವಿಧಾನಸೌಧದಿಂದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಸಂಜೆ 6.30ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.