ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಅ.25ರಂದು ನಡೆಯುವ ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.ನಗರದ ಪ್ರವಾಸಿ ಮಂದಿರಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹5 ಕೋಟಿ ಅನುದಾನ ನೀಡಿದೆ. ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಕಿತ್ತೂರು ರಾಣಿ ಚನ್ನಮ್ಮನ 200ನೇ ವಿಜಯೋತ್ಸವ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುತ್ತೇವೆ ಎಂದು ತಿಳಿಸಿದರು.
ಉತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಅದರಲ್ಲೂ ಉತ್ಸವದ ವೇಳೆ ಮಹಿಳೆಯರಿಗೆ ವಿಶೇಷ ಕ್ರೀಡೆಗಳನ್ನು ಆಯೋಜಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಅ.20ರಂದು ಕಿತ್ತೂರು ಪಟ್ಟಣದಲ್ಲಿ ಮಹಿಳೆಯರಿಂದ ಬೈಕ್ ರ್‍ಯಾಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಕಿತ್ತೂರಿನಲ್ಲಿ ಕಿತ್ತೂರು ಚನ್ನಮ್ಮ ಉತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಉತ್ಸವದಲ್ಲಿ ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದೆ. ಉತ್ಸವ ಅಂಗವಾಗಿ ಅ.22ರಂದು ಬೆಳಗಾವಿ ನಗರದಲ್ಲಿ ಚಲನಚಿತ್ರ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಮತ್ತು ಕುನಾಲ್ ಗಂಜವಾಲಾರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅ.23ರಿಂದ ಮೂರು ದಿನ ವಿವಿಧ ಸಾಂಸ್ಕೃತಿಕ ಕಿತ್ತೂರಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಾಕೂಟ ಆಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಖ್ಯಾತ ಕಲಾವಿದರು ಭಾಗ ವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಜನರಿಗಾಗಿ ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲಾಗಿದೆ. ಕಿತ್ತೂರು ಪಟ್ಟಣದಲ್ಲಿ ರಸ್ತೆ ಅಗಲೀಕರಣ ಸೇರಿದಂತೆ ಹಲವು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಮುಗಿಯವ ಹಂತದಲ್ಲಿವೆ ಎಂದು ಹೇಳಿದರು.
ಬೈಲಹೊಂಗಲದಲ್ಲಿಯೂ ಉತ್ಸವ ನಿಮಿತ್ತ ಕಾರ್ಯಕ್ರಮ ಆಯೋಜಿಸಲು ಒತ್ತಾಯಿಸಿ ಬಂದ್ ಗೆ ಕರೆಕೊಡಲಾಗಿದ್ದು, ಈ ಬಗ್ಗೆ ಅಲ್ಲಿನ ಶಾಸಕರೊಂದಿಗೆ ಮಾತನಾಡಿದ್ದೇನೆ. ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿಯ ಪಕ್ಕದಲ್ಲಿ ಕಾರ್ಯಕ್ರಮ ಆಯೋಜಿಸಲು ಚಿಂತನೆ ಮಾಡಲಾಗಿದ್ದು, ಅದು ಕೂಡ ನೆರವೇರಲಿದೆ ಎಂದು ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾತನಾಡಿ, ಕಿತ್ತೂರು ಉತ್ಸವದಲ್ಲಿ ಯಾವುದೇ ರೀತಿಯ ಲೋಪ ಆಗದಂತೆ ಬಂದೋಬಸ್ತ್ ಕೈಗೊಳ್ಳಲಾಗುವುದು. ವಾಹನಗಳ ಪಾರ್ಕಿಂಗ್ ಗಾಗಿ ವಿವಿಧೆಡೆ ಸ್ಥಳಗಳನ್ನು ಗುರುತಿಸಲಾಗಿದ್ದು, ಯಾವುದೇ ರೀತಿಯ ಸಂಚಾರ ದಟ್ಟಣೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಉತ್ಸವದ ಸಂದರ್ಭದಲ್ಲಿ ಕಿಡಿಗೇಡಿಗಳು ಮದ್ಯ ಸೇವಿಸಿ ತೊಂದರೆ ಕೊಡುವುದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲು ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ ಕಿತ್ತೂರು ಉತ್ಸವದ ಭಿತ್ತಿ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಬೈಲಹೊಂಗಲ ಉಪವಿಭಾಗಾಧಿಕಾರಿ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಪ್ರಭಾವತಿ ಫಕೀರಪುರ, ವಾರ್ತಾಧಿಕಾರಿ ಗುರುನಾಥ ಕಡಬೂರು ಮತ್ತಿತರರು ಉಪಸ್ಥಿತರಿದ್ದರು.