ಸಾರಾಂಶ
ಕೊಪ್ಪಳ:
ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಆ. 4ರಂದು ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯ ವಿತರಿಸುವ ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳನ್ನು ಸೇರಿಸಬೇಕೆಂದು ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಜಿಲ್ಲೆಯ 1 ಲಕ್ಷ ಫಲಾನುಭವಿಗಳನ್ನು ಕರೆತರಬೇಕು. ಕಾರ್ಯಕ್ರಮದಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಚ್ಚುಕಟ್ಟಾಗಿ ಅಧಿಕಾರಿಗಳು ನೋಡಿಕೊಳ್ಳಬೇಕು. ತಾಲೂಕು ಮಟ್ಟದಲ್ಲಿ ತಹಸೀಲ್ದಾರ್, ತಾಪಂ ಇಒ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಸಭೆ ನಡೆಸಿ ಫಲಾನುಭವಿಗಳ ಪಟ್ಟಿ ತಯಾರಿಸಿ ಅವರನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದರು.
ಮಳೆ ಇರುವುದರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಜರ್ಮನ್ ಟೆಂಟ್ ಹಾಕಿ ಹೆಚ್ಚಿನ ಆಸನ ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಯಾವುದೇ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳ ಪಟ್ಟಿಯನ್ನು ಮತ್ತೊಂದು ಸಭೆ ನಡೆಸುವ ಮೊದಲೇ ನೀಡಬೇಕು ಎಂದು ಸೂಚಿಸಿದರು.ವಿವಿಧ ಇಲಾಖೆ ಹಾಗೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಲು ಬಸ್ ವ್ಯವಸ್ಥೆ ಕಲ್ಪಿಸಬೇಕು. ಜಿಲ್ಲೆಯ ಬಸ್‌ಗಳು ಸಾಲದಿದ್ದರೆ ಅಕ್ಕ- ಪಕ್ಕದ ಜಿಲ್ಲೆಯಿಂದ ತರಿಸಬೇಕು. ಪ್ರತಿ ಬಸ್‌ಗೆ ಜರನ್ನು ಕರೆತರಲು ಆಯಾ ಇಲಾಖೆ ಅಧಿಕಾರಿ, ಸಿಬ್ಬಂದಿ ನಿಯೋಜಿಸಬೇಕು ಎಂದ ಅವರು, ವಿವಿಧ ಇಲಾಖೆಯ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾಮಗಾರಿ, ವಿವಿಧ ತಾಲೂಕಿನ ಪ್ರಜಾಸೌಧ, ಆಸ್ಪತ್ರೆ ಸೇರಿದಂತೆ ಹಲವು ಕಾರ್ಯಕ್ರಮ ಇರುವುದರಿಂದ ಅಧಿಕಾರಿಗಳು ಸಂಬಂಧಿಸಿದವರೊಂದಿಗೆ ಮಾತನಾಡಬೇಕು. ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಸಮಿತಿ ರಚಿಸಿ ಜವಾಬ್ದಾರಿ ನೀಡಬೇಕು. ಕಲ್ಯಾಣ ಕರ್ನಾಟಕ ಭಾಗದ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಅಚ್ಚುಕಟ್ಟಾಗಿ ಕಾರ್ಯಕ್ರಮ ಮಾಡಬೇಕೆಂದು ಹೇಳಿದರು.
ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ಗ್ರಾಮ ಪಂಚಾಯಿತಿಯಿಂದ ಮಾಡಬೇಕು. ಕಾರ್ಯಕ್ರಮಕ್ಕೆ ಬರಲು ಎಷ್ಟು ಬಸ್ ಬೇಕಾಗುತ್ತವೆ ಎಂದು ಮುಂಚಿತವಾಗಿ ಪಟ್ಟಿ ತಯಾರಿಸಿರಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಸಂಸದ ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಟಿ. ಲಿಂಗರಾಜು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಹೇಮಂತ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.