ಜೆಡಿಎಸ್‌ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಪ್ರಶ್ನಿಸಿ ಇಬ್ರಾಹಿಂ ಹೈಕೋರ್ಟ್‌ಗೆ

| Published : May 09 2024, 01:03 AM IST

ಜೆಡಿಎಸ್‌ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಪ್ರಶ್ನಿಸಿ ಇಬ್ರಾಹಿಂ ಹೈಕೋರ್ಟ್‌ಗೆ
Share this Article
  • FB
  • TW
  • Linkdin
  • Email

ಸಾರಾಂಶ

ಜೆಡಿಎಸ್‌ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ನೇಮಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜೆಡಿಎಸ್ ಉಚ್ಚಾಟಿತ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಜೆಡಿಎಸ್‌ ಪಕ್ಷದ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ನೇಮಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜೆಡಿಎಸ್ ಉಚ್ಚಾಟಿತ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅಧೀನ ನ್ಯಾಯಾಲಯದ ಆದೇಶ ರದ್ದುಪಡಿಸುವಂತೆ ಕೋರಿ ಸಿ.ಎಂ.ಇಬ್ರಾಹಿಂ ಅವರು ಹೈಕೋರ್ಟ್‌ಗೆ ಆರ್‌ಎಫ್‌ಎ (ರೆಗ್ಯೂಲರ್‌ ಸೆಕೆಂಡ್‌ ಅಪೀಲ್‌) ಸಲ್ಲಿಸಿ, ಜೆಡಿಎಸ್‌ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದಕ್ಕೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿದ್ದಾರೆ.

ಅರ್ಜಿ ವಿಚಾರಣೆಗೆ ಬಂದಾಗ ಇಬ್ರಾಹಿಂ ಪರ ವಕೀಲರು, ಜೆಡಿಎಸ್‌ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಮಾಡಬೇಕು ಎಂದು ಕೋರಿದರು. ವಿಚಾರಣೆಗೆ ಹಾಜರಿದ್ದ ಜೆಡಿಎಸ್‌ ಪಕ್ಷದ ಪರ ವಕೀಲರು, ಪಕ್ಷದಿಂದ ಅಗತ್ಯ ಸಲಹೆ/ಸೂಚನೆಗಳನ್ನು ಪಡೆದು ನ್ಯಾಯಾಲಯಕ್ಕೆ ತಿಳಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿಗೆ ಒಪ್ಪಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾಕಾಲೀನ ಏಕಸದಸ್ಯ ಪೀಠ, ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿತು.ಸಿ.ಎಂ.ಇಬ್ರಾಹಿಂ ಅವರನ್ನು 2022ರ ಆ.3ರಂದು ಜೆಡಿಎಸ್ ಅಧ್ಯಕ್ಷರಾಗಿ ರಾಜ್ಯ ಕಾರ್ಯಕಾರಿಣಿಯಲ್ಲಿ ಘೋಷಿಸಲಾಗಿತ್ತು. ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು 2024 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ನಂತರ ಸಕಾರಣವಿಲ್ಲದೇ ತಮ್ಮನ್ನು 2023ರ ನ.16ರಂದು ಪಕ್ಷ ಹಾಗೂ ಅಧ್ಯಕ್ಷ ಹುದ್ದೆಯಿಂದ ಉಚ್ಚಾಟನೆ ಮಾಡಲಾಗಿದೆ. ಇದು ಜೆಡಿಎಸ್ ಸಂವಿಧಾನಕ್ಕೆ ವಿರುದ್ಧವಾಗಿದೆ. ಉಚ್ಚಾಟನೆಗೂ ಮುನ್ನ ತಮ್ಮ ಅಹವಾಲು ಆಲಿಸಿಲ್ಲ. ಆದ್ದರಿಂದ ಉಚ್ಚಾಟನೆ ಆದೇಶ ರದ್ದುಪಡಿಸಬೇಕು. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಿಟಿ ಸಿವಿಲ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಜಾಗೊಳಿಸಿ 2024ರ ಮಾ.23ರಂದು ನಗರದ 26ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿತ್ತು.