ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು
ಪಟ್ಟಣದ ಕರ್ನಾಟಕ ರಾಜ್ಯ ಸಾರಿಗೆ ಬಸ್ ನಿಲ್ದಾಣದ ಪಕ್ಕದಲ್ಲಿ ನಿರ್ಮಾಣವಾಗಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಫಲಕ ಅನಾವರಣಗೊಳಿಸಿ ಲೋಕಾರ್ಪಣೆಗೊಳಿಸಿದರು.ಉದ್ಘಾಟನೆ ನಂತರ ಉಪ್ಪಿಟ್ಟು ಕೇಸರಿ ಬಾತ್ ರುಚಿ ನೋಡಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳುವ ಮೂಲಕ ಬಡ ಜನತೆಗೆ ಇಷ್ಟವಾಗುವ ರೀತಿಯಲ್ಲಿ ಇಂದಿರಾ ಕ್ಯಾಂಟೀನ್‌ನಲ್ಲಿ ವಾರದ ಮೆನುವಿನಂತೆ ನಾಗರಿಕರಿಗೆ ಸದ್ಬಳಕೆ ಮಾಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಹನೂರು ವಿಧಾನಸಭಾ ಕ್ಷೇತ್ರ ಶಾಸಕ ಎಂಆರ್ ಮಂಜುನಾಥ್, ಕೊಳ್ಳೇಗಾಲ ಶಾಸಕ ಎ.ಆರ್ ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಸಿಟಿ ಶಿಲ್ಪಾನಾಗ್, ಪೋಲಿಸ್ ವರಿಷ್ಠಾಧಿಕಾರಿ ಕೆ.ಟಿ. ಕವಿತಾ, ಡಿ ವೈಎಸ್ಪಿ ಧರ್ಮೇಂದರ್ ಹಾಗೂ ಮುಖಂಡರು ಉಪಸ್ಥಿತರಿದ್ದರು.ಸಿಎಂರನ್ನು ಹೂಗುಚ್ಚ ನೀಡಿ ಬರಮಾಡಿಕೊಂಡ ಶಾಸಕ:
ಶಾಸಕ ಎಂ.ಆರ್.ಮಂಜುನಾಥ್ ಹಾಗೂ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಆತ್ಮೀಯವಾಗಿ ಹೂಗುಚ್ಚ ನೀಡಿ ಬರಮಾಡಿಕೊಂಡರು. ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮ್ತಾಜ್, ಉಪಾಧ್ಯಕ್ಷ ಅನಂತ್ ಕುಮಾರ್ ಸದಸ್ಯರಾದ ಗಿರೀಶ್, ಹರೀಶ್, ಸುರೇಶ್ ಹಾಗೂ ನಾಮನಿರ್ದೇಶನ ಸದಸ್ಯರಾದ ಬಸವರಾಜ್, ಮಾದೇಶ್, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್ ಇದ್ದರು.ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಲು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಸಚಿವರಿಗೆ ಇದೇ ವೇಳೆಯಲ್ಲಿ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು ರಸ್ತೆಯ ಎರಡು ಬದಿಗಳಲ್ಲಿ ನಿಂತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜೈಕಾರ ಕೂಗಿದರು. ಇದೇ ವೇಳೆ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೊಳಿಸಿ ನಂತರ ತೆರಳುವಾಗ ಕಾರ್ಯಕರ್ತರು ಜೈಕಾರ ಕೂಗುವುದನ್ನು ನೋಡಿ ಕೈ ಮೇಲೆತ್ತಿ ನಮಸ್ಕರಿಸಿ ತೆರಳಿದರು.
ಭಾರಿ ಬಂದೋಬಸ್ತ್:ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದಂತ ವೇಳೆಯಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸುವ ಮೂಲಕ ಬಿಗಿ ಪಹರೆ ಏರ್ಪಡಿಸಿದ್ದರು.