ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವು ಉಂಟಾದ ಹಿನ್ನೆಲೆಯಲ್ಲಿ ಜಿಬಿಎ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಜಿಬಿಎ ಕಾರ್ಯಪಾಲಕ ಎಂಜಿನಿಯರ್‌ಗಳು (ಇಇ), ಆರೋಗ್ಯ ಇಲಾಖೆಯ ಎಂಜಿನಿಯರ್‌ನ್ನು ಅಮಾನತುಗೊಳಿಸುವಂತೆ ಹಾಗೂ ನಿರ್ಲಕ್ಷ್ಯ ವಹಿಸಿದ ಆಸ್ಪತ್ರೆ ಮುಖ್ಯಸ್ಥರಿಗೆ ನೋಟೀಸ್ ನೀಡುವಂತೆ ಸೂಚನೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವು ಉಂಟಾದ ಹಿನ್ನೆಲೆಯಲ್ಲಿ ಜಿಬಿಎ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಜಿಬಿಎ ಕಾರ್ಯಪಾಲಕ ಎಂಜಿನಿಯರ್‌ಗಳು (ಇಇ), ಆರೋಗ್ಯ ಇಲಾಖೆಯ ಎಂಜಿನಿಯರ್‌ನ್ನು ಅಮಾನತುಗೊಳಿಸುವಂತೆ ಹಾಗೂ ನಿರ್ಲಕ್ಷ್ಯ ವಹಿಸಿದ ಆಸ್ಪತ್ರೆ ಮುಖ್ಯಸ್ಥರಿಗೆ ನೋಟೀಸ್ ನೀಡುವಂತೆ ಸೂಚನೆ ನೀಡಿದ್ದಾರೆ.ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಉಂಟಾದ ದುರಂತದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜತೆಗೂಡಿ ಜಿಬಿಎ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದರು.ಈ ವೇಳೆ ಜಿಬಿಎ ಆಯುಕ್ತರಿಗೆ ತರಾಟೆಗೆ ತೆಗೆದುಕೊಂಡ ಸಿಎಂ, ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ? ಎಂದು ಪ್ರಶ್ನಿಸಿದರು. ಇದೇ ವೇಳೆ ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದಿದ್ದರೂ ನೀವು ಏಕೆ ನೋಡಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮುಖ್ಯಸ್ಥರ ವಿರುದ್ಧವೂ ಹರಿಹಾಯ್ದರು. ಇದೇ ಕಾರಣಕ್ಕೆ ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸೂಚಿಸಿದ ಮುಖ್ಯಮಂತ್ರಿಗಳು ಮತ್ತೊಮ್ಮೆ ಇಂತಹ ಘಟನೆ ಪುನರಾವರ್ತನೆ ಆಗದಂತೆ ಎಲ್ಲಾ ವಿಭಾಗಗಳ ಅಧಿಕಾರಿಗಳೂ ಕಟ್ಟೆಚ್ಚರ ವಹಿಸಬೇಕು. ಮಳೆಗಾಲದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ರಾಜಕಾಲುವೆ ಹೂಳು ತೆಗೆಯಿರಿ:ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ರಾಜಕಾಲುವೆಗಳಲ್ಲಿ ಹೂಳು ತೆಗೆಯುವುದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಬೇಕು. ಅಂಡರ್ ಪಾಸ್‌ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ಜನ ಅಂಡರ್ ಪಾಸ್ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಿ ಎಂದು ಸಿಎಂ ಸೂಚಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಬಿಎ ಆಯುಕ್ತ ಮಹೇಶ್ವರ ರಾವ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಇದ್ದರು.ಮುಂಗಾರು ಸಿದ್ಧತೆಗೆ ಸಿದ್ದರಾಮಯ್ಯ ಸೂಚನೆಬುಧವಾರದ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದ್ದು, 250ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಕೂಡಲೇ ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು. ಮುಖ್ಯವಾಗಿ ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ನಗರದ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಕತ್ತರಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.