ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬೀಳಗಿ ಮತಕ್ಷೇತ್ರ ವ್ಯಾಪ್ತಿಯ ಬಾದಾಮಿ ತಾಲೂಕಿನ ಕಾಡರಕೊಪ್ಪ ಹಾಗೂ ಅನವಾಲ ಏತ ನೀರಾವರಿ ಯೋಜನೆಗಳಿಗೆ ಅಕ್ಟೋಬರ್ 17 ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬೀಳಗಿ ಮತಕ್ಷೇತ್ರ ವ್ಯಾಪ್ತಿಯ ಬಾದಾಮಿ ತಾಲೂಕಿನ ಕಾಡರಕೊಪ್ಪ ಹಾಗೂ ಅನವಾಲ ಏತ ನೀರಾವರಿ ಯೋಜನೆಗಳಿಗೆ ಅಕ್ಟೋಬರ್ 17 ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅವರ ಭೂಮಿಪೂಜೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ಕೈಗೊಳ್ಳಬೇಕಾದ ಅಗತ್ಯ ಸಿದ್ಧತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಾರ್ಯಕ್ರಮಕ್ಕೆ 20 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು ಅಧಿಕಾರಿಗಳಿಗೆ ಸೂಚಿಸಿದರು.ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಸಮರ್ಪಕ ಆಸನ ವ್ಯವಸ್ಥೆ, ಕುಡಿಯುವ ನೀರು ಹಾಗೂ ಉಪಹಾರ ಕಲ್ಪಿಸುವಂತೆ ತಿಳಿಸಿದರು. ಕಾರ್ಯಕ್ರಮದ ಸ್ಥಳದಲ್ಲಿ ಜನದಟ್ಟಣೆ ಗಮನದಲ್ಲಿಟ್ಟುಕೊಂಡು ಅಗತ್ಯ ಮೂಲಸೌಕರ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಬೇಕು. ಅಲ್ಲದೇ, 10 ಸಾವಿರ ಮಹಿಳಾ ಫಲಾನುಭವಿಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮಹಿಳಾ ಫಲಾನುಭವಿಗಳ ಅನುಕೂಲಕ್ಕಾಗಿ ವಿವಿಧ ಸ್ಥಳಗಳಿಂದ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಲು ಸೂಕ್ತ ವಾಹನಗಳ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಹಿನ್ನೆಲೆಯಲ್ಲಿ ಸಂಚಾರ, ಪಾರ್ಕಿಂಗ್, ಭದ್ರತೆ, ವಿದ್ಯುತ್, ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೈಗೊಳ್ಳಬೇಕು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಯಾವುದೇ ಲೋಪವಿಲ್ಲದೆ ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಶಾಸಕ ಜೆ.ಟಿ.ಪಾಟೀಲ ಸೂಚಿಸಿದರು.ಸಭೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಅನೀಕುಮಾರ ದಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಜಾನನ ಬಾಲೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಜಗದೀಶ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿ.ಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಕರ್ನಾಟಕ ನೀರಾವರಿ ನಿಗಮ ನಿಯಮಿತದ ಮುಖ್ಯ ಅಭಿಯಂತರ ಲಕ್ಷ್ಮಣ ನಾಯಕ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಹಸೀಲ್ದಾರರು ಉಪಸ್ಥಿತರಿದ್ದರು.