ನಗರದ ಕೋಗಿಲು ಬಳಿಯ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯು ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಸಂತ್ರಸ್ತರಿಗೆ ಪುನರ್‌ವಸತಿ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಲಿದೆ.

ಕನ್ನಡಪ್ರಭ ವಾರ್ತೆ, ಬೆಂಗಳೂರು

ನಗರದ ಕೋಗಿಲು ಬಳಿಯ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯು ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಸಂತ್ರಸ್ತರಿಗೆ ಪುನರ್‌ವಸತಿ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಲಿದೆ.

ನಗರದ ಕೋಗಿಲು ಲೇಔಟ್​​ ಬಳಿಯ ಕಸ ವಿಲೇವಾರಿ ಘಟಕದ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದನ್ನು ಸರ್ಕಾರ ತೆರವುಗೊಳಿಸಿತ್ತು. ಇದರಿಂದ ನಿರಾಶ್ರಿತರಾದವರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಕರ್ನಾಟಕ ಸರ್ಕಾರ ಬುಲ್ಡೋಜರ್‌ ನ್ಯಾಯವನ್ನು ತಂದಿದೆ ಎಂದು ಟೀಕಿಸಿದ್ದರು.

ಕೇರಳದ ಸಂಸದ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಟ್ವೀಟ್‌ ಮಾಡಿ, ಇಂತಹ ವಿಚಾರದಲ್ಲಿ ಸರ್ಕಾರ ಎಚ್ಚರಿಕೆಯಿಂದ, ಮಾನವೀಯತೆ, ಸೂಕ್ಷ್ಮತೆ ಮತ್ತು ಸಹಾನುಭೂತಿಯಿಂದ ಕ್ರಮ ಕೈಗೊಳ್ಳಬೇಕಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು ಪುನರ್‌ವಸತಿ ಕಲ್ಪಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದರು.

ಇದರಿಂದ ವಿಷಯವು ತೀವ್ರ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಸಭೆ ಕರೆಯಲಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ಮನೆಗಳನ್ನು ಅರ್ಹರಿಗೆ ವಿತರಿಸಲು ನಿರ್ಧರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.