ಬಳ್ಳಾರಿ ಶಾಸಕರ ಜೊತೆ ಸಿಎಂ ಸಭೆ; ಜಿಲ್ಲೆಯ ಅಭಿವೃದ್ಧಿಗೆ ಅನುದಾನದ ಭರವಸೆ

| Published : Aug 01 2025, 12:30 AM IST

ಬಳ್ಳಾರಿ ಶಾಸಕರ ಜೊತೆ ಸಿಎಂ ಸಭೆ; ಜಿಲ್ಲೆಯ ಅಭಿವೃದ್ಧಿಗೆ ಅನುದಾನದ ಭರವಸೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಬುಧವಾರ ಬೆಂಗಳೂರಿನಲ್ಲಿ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ನೆಲೆಯಲ್ಲಿ ಅಗತ್ಯ ಅನುದಾನದ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬಳ್ಳಾರಿ

ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಬುಧವಾರ ಬೆಂಗಳೂರಿನಲ್ಲಿ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ನೆಲೆಯಲ್ಲಿ ಅಗತ್ಯ ಅನುದಾನದ ಭರವಸೆ ನೀಡಿದ್ದಾರೆ.

ಇದೇ ವೇಳೆ ಬಳ್ಳಾರಿ ವಿಮಾನ ನಿಲ್ದಾಣ, ಒಣ ಮೆಣಸಿನಕಾಯಿ ಮಾರುಕಟ್ಟೆ, ಜೀನ್ಸ್‌ ಉದ್ಯಮ ಎದುರಿಸುತ್ತಿರುವ ಸಂಕಷ್ಟ ಹಾಗೂ ಜೀನ್ಸ್‌ ಅಪರೇಲ್ ಪಾರ್ಕ್ ನಿರ್ಮಾಣ ಸೇರಿದಂತೆ ಒಟ್ಟಾರೆ ಜಿಲ್ಲೆಯ ಸಮಗ್ರ ಪ್ರಗತಿ ಕುರಿತಂತೆ ಚರ್ಚೆ ನಡೆದಿದ್ದು, ಆಯಾ ಶಾಸಕರು ತಮ್ಮ ಕ್ಷೇತ್ರದಲ್ಲಿನ ಸಮಸ್ಯೆಗಳು ಹಾಗೂ ತುರ್ತಾಗಿ ಆಗಬೇಕಾಗಿರುವ ಕಾರ್ಯಗಳು ಕುರಿತು ಸಿಎಂ ಅವರ ಬಳಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಂಡೂರು ಶಾಸಕಿ ಅನ್ನಪೂರ್ಣ ಕುಡಿತಿನಿಯಲ್ಲಿ ಹೋರಾಟ ನಡೆಸುತ್ತಿರುವ ಭೂ ಸಂತ್ರಸ್ತರ ಸಮಸ್ಯೆ, ಶಿಕ್ಷಕರ ಕೊರತೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಪ್ರಸ್ತಾಪಿಸಿದರೆ, ಕಂಪ್ಲಿಯ ಶಾಸಕ ಜೆ.ಎನ್. ಗಣೇಶ್ ಕಂಪ್ಲಿ-ಗಂಗಾವತಿ ಸೇತುವೆ ಸಮಸ್ಯೆ, ಕಂಪ್ಲಿಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಾಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳು ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಹಾಗೂ ಸಿರುಗುಪ್ಪ ಶಾಸಕ ಬಿ.ಎಂ. ನಾಗರಾಜ್ ತಮ್ಮ ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಸಭೆಯಲ್ಲಿ ಪ್ರಸ್ತಾಪಿಸಿದ್ದು, ಒಟ್ಟಾರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬೇಕಾದ ಅನುದಾನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಬಳ್ಳಾರಿ ಅಭಿವೃದ್ಧಿಗೆ 50 ಕೋಟಿ ಹಂಚಿಕೆ

ನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ₹50 ಕೋಟಿ ಹಂಚಿಕೆ ಮಾಡಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ಹಾಗೂ ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚೆ ಮಾಡಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಳ್ಳಾರಿ ನಗರ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದರು.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆಯೇ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ₹50 ಕೋಟಿ ಅನುದಾನ ಹಂಚಿಕೆಯಾಗಿದೆ ಎಂದು ಶಾಸಕ ಭರತ್ ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.