ಬರಗಾಲ ವಿಚಾರ ಮುಂದಿಟ್ಟುಕೊಂಡು ಸಿಎಂ ರಾಜಕೀಯ ಗಿಮಿಕ್: ಸಿ.ಎಚ್.ವಿಜಯಶಂಕರ್ ಆರೋಪ

| Published : Apr 05 2024, 01:07 AM IST

ಬರಗಾಲ ವಿಚಾರ ಮುಂದಿಟ್ಟುಕೊಂಡು ಸಿಎಂ ರಾಜಕೀಯ ಗಿಮಿಕ್: ಸಿ.ಎಚ್.ವಿಜಯಶಂಕರ್ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ಮೈತ್ರಿಕೂಟದಲ್ಲಿ ಪ್ರಧಾ‌ನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ನಿಶ್ಚಿತ. ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ನವರು ಚರ್ಚೆಗೆ ಬರಲಿ. ಹಾಗೇ ಲೋಕಸಭಾ ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕಂತಲೇ ಬರಗಾಲ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರು

ಲೋಕಸಭಾ ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕಂತಲೇ ಬರಗಾಲ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಎಚ್. ವಿಜಯಶಂಕರ್ ಆರೋಪಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಕೇಂದ್ರದಿಂದ ಅನುದಾನ ಬಿಡುಗಡೆ ಮಾಡಲು ಆಗುವುದಿಲ್ಲ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಅನುದಾನ ಬಿಡುಗಡೆ ಮಾಡಲಾಗುವುದಿಲ್ಲ. ಈ ವಿಚಾರ ಗೊತ್ತಿದ್ದರೂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದು ಕೇವಲ ರಾಜಕೀಯ ಗಿಮಿಕ್ ಅಷ್ಟೇ ಎಂದು ದೂರಿದರು.

ಕೇಂದ್ರ ಗೃಹ ಸಚಿವರಿಗೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾಡಲು ಸಾಕಷ್ಟು ಕೆಲಸಗಳಿವೆ. ಇದರ ಮಧ್ಯೆ ಇವರೊಂದಿಗೆ ಚರ್ಚಿಸಲು ಸಮಯವಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾ‌ನಿ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ ಎಂದರು.

ಕಾಂಗ್ರೆಸ್ ಮೈತ್ರಿಕೂಟದಲ್ಲಿ ಪ್ರಧಾ‌ನಿ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ನಿಶ್ಚಿತ. ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ನವರು ಚರ್ಚೆಗೆ ಬರಲಿ ಎಂದು ಅವರು ಹೇಳಿದರು.

ವಿಶ್ವನಾಥ್ ಬೆಂಬಲ ಸ್ವಾಗತಾರ್ಹ:

ಬಿಜೆಪಿ ಅಭ್ಯರ್ಥಿ ಯದುವೀರಗೆ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಬೆಂಬಲ ಘೋಷಿಸಿರುವುದು ಸ್ವಾಗತಾರ್ಹ. ರಾಜಮನೆತನದ ಬಗ್ಗೆ ಎಚ್. ವಿಶ್ವನಾಥ್ ಅವರಿಗೆ ಇರುವ ಗೌರವ ಭಾವನೆಯಿಂದ ಯದುವೀರ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಯದುವೀರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಸಲಹೆ ನೀಡಿದ್ದಾರೆ. ಅವರ ನಿಲುವನ್ನು ಸ್ವಾಗತಿಸುತ್ತೇವೆ ಎಂದು ಅವರು ತಿಳಿಸಿದರು.