ಮಹದಾಯಿಗೆ ಅನುಮತಿ ರದ್ದು ದ್ರೋಹ : ಸಿಎಂ ಕಿಡಿ

| N/A | Published : Jul 24 2025, 01:45 AM IST / Updated: Jul 24 2025, 06:19 AM IST

Karnataka Chief Minister Siddaramaiah (File Photo/ANI)

ಸಾರಾಂಶ

‘ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹ. ಇದನ್ನು ರಾಜ್ಯ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ ನಡೆಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

 ಬೆಂಗಳೂರು :  ‘ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹ. ಇದನ್ನು ರಾಜ್ಯ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ ನಡೆಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್‍ ಅವರೇ ನನಗೆ ತಿಳಿಸಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಅವರು ಬುಧವಾರ ಅಲ್ಲಿನ ವಿಧಾನಸಭೆಯಲ್ಲಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರ ಕರ್ನಾಟಕದ ಹಿತಾಸಕ್ತಿ ಮೇಲಿನ ಮತ್ತೊಂದು ಪ್ರಹಾರ. 2018ರಲ್ಲಿ ಮಹದಾಯಿ ಜಲವಿವಾದ ನ್ಯಾಯಮಂಡಳಿ 13.42 ಟಿಎಂಸಿ ನೀರನ್ನು ನಮ್ಮ ರಾಜ್ಯಕ್ಕೆ ನಿಗದಿಪಡಿಸಿ ಐತೀರ್ಪು ನೀಡಿದ್ದರೂ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ಯೋಜನೆಯ ಅನುಷ್ಠಾನ ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ.

ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ಧಗೊಂಡಿದ್ದು, ಗೋವಾದ ಬಿಜೆಪಿ ಸರ್ಕಾರದ ಜೊತೆ ಶಾಮೀಲಾಗಿ ಕೇಂದ್ರ ಸರ್ಕಾರ ನಿರಂತರವಾಗಿ ಅಡ್ಡಗಾಲು ಹಾಕುತ್ತಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ರಾಜ್ಯದ ಬಿಜೆಪಿ ನಾಯಕರಾಗಲಿ, ಕನ್ನಡಿಗರಿಂದಲೇ ಆರಿಸಿ ಹೋಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರಾಗಲಿ ಈ ಅನ್ಯಾಯದ ವಿರುದ್ದ ದನಿ ಎತ್ತಲಾಗದಷ್ಟು ನಿರ್ವೀರ್ಯರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿದ ಕರ್ನಾಟಕದ ಜನತೆಯ ವಿರುದ್ಧ ಸೇಡು ತೀರಿಸಿಕೊಳ್ಳುವ ದುರುದ್ದೇಶದಿಂದಲೇ ಪರಿಸರ ಖಾತೆಯ ಅನುಮತಿಯನ್ನು ನಿರಾಕರಿಸಿದೆ.

ನೆಲ-ಜಲ-ಭಾಷೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ವಿಚಾರದಲ್ಲಿ ನಿರಂತರವಾಗಿ ಅನ್ಯಾಯ ಎಸಗುತ್ತಿದೆ. ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆ ವಿರುದ್ಧ ನಾಡಿನ ಸಮಸ್ತ ಕನ್ನಡಿಗರನ್ನು ಜೊತೆಯಲ್ಲಿ ಕಟ್ಟಿಕೊಂಡು ಹೋರಾಟ ನಡೆಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Read more Articles on