ಸಾರಾಂಶ
ಕನ್ನಡಪ್ರಭ ವಾರ್ತೆ
ಬೆಂಗಳೂರು: ಸೇವಾನುಭವ ಆಧಾರದಲ್ಲಿ ಗೌರವಧನವನ್ನು 5 ಸಾವಿರ ರು.ಗಳಿಂದ 8 ಸಾವಿರ ರು.ವರೆಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಷ್ಕರ ನಿರತ ಅತಿಥಿ ಉಪನ್ಯಾಸಕರಿಗೆ ಭರವಸೆ ನೀಡಿದ್ದು, ಇದರ ಬೆನ್ನಲ್ಲೇ ಸೇವೆ ಕಾಯಂಗಾಗಿ ಕಳೆದ 45 ದಿನಗಳಿಂದ ನಡೆಸುತ್ತಿದ್ದ ತಮ್ಮ ಮುಷ್ಕರವನ್ನು ಅತಿಥಿ ಉಪನ್ಯಾಸಕರು ಹಿಂಪಡೆದು ಸೋಮವಾರದಿಂದ ಕರ್ತವ್ಯಕ್ಕೆ ಮರಳಲು ತೀರ್ಮಾನಿಸಿದ್ದಾರೆ.
ತನ್ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶನಿವಾರ ನಡೆದ ಅತಿಥಿ ಉಪನ್ಯಾಸಕರೊಂದಿಗಿನ ಸಂಧಾನ ಸಭೆ ಯಶಸ್ವಿಯಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಪುಟ್ಟಣ್ಣ ನೇತೃತ್ವದಲ್ಲಿ ಆಗಮಿಸಿದ್ದ ಅತಿಥಿ ಉಪನ್ಯಾಸಕರ ನಿಯೋಗದೊಂದಿಗೆ ಶನಿವಾರ ತಮ್ಮ ಗೃಹ ಕಚೇರಿಯಲ್ಲಿ ಸಿದ್ದರಾಮಯ್ಯ ಸಂಧಾನ ಸಭೆ ನಡೆಸಿದರು.
ಈ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಅಹವಾಲನ್ನು ಖುದ್ದು ಆಲಿಸಿದ ಮುಖ್ಯಮಂತ್ರಿಯವರು ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರು., 5ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರು., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರು. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರು. ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಪ್ರಮುಖ ಬೇಡಿಕೆಯಾಗಿರುವ ಸೇವೆ ಕಾಯಮಾತಿ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಅತಿಥಿ ಉಪನ್ಯಾಸಕರ ಬಗ್ಗೆ ಸರ್ಕಾರಕ್ಕೆ ಮಾನವೀಯ ಕಾಳಜಿ ಇದೆ. ಆದರೆ, ಕಾನೂನು ತೊಡಕು ಇರುವುದರಿಂದ ಕಾಯಂ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ಧ್ವನಿ ಎತ್ತಿ ಗೌರವಧನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ. ಅದರಂತೆ ಗೌರವಧನ ಹೆಚ್ಚಳ ಮಾಡಲು ಮುಂದಾಗಿದ್ದೇವೆ ಎಂದು ಹೇಳಿದರು.
ವಾರ್ಷಿಕ 5 ಲಕ್ಷ ರು. ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ನಿವೃತ್ತರಿಗೆ 5 ಲಕ್ಷ ರು. ಇಡಗಂಟು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.
ಅಲ್ಲದೇ, ನೇಮಕಾತಿ ವೇಳೆ ಸೇವಾನುಭವ ಆಧರಿಸಿ ಕೃಪಾಂಕ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿರುವ ಕಾಲೇಜಿನಲ್ಲಿ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್ ಪ್ರಕ್ರಿಯೆ ಸರಳೀಕರಣಗೊಳಿಸಲು ಮುಖ್ಯಮಂತ್ರಿ ಸಮ್ಮತಿಸಿದರು.
ಕರ್ತವ್ಯಕ್ಕೆ ಹಾಜರಾಗುತ್ತೇವೆ: ಗೌರವಧನ ಹೆಚ್ಟಳ, ಕೌನ್ಸೆಲಿಂಗ್ ಪದ್ಧತಿ ತೆಗೆದು ಹಾಕುವುದು ಸೇರಿ ಅನೇಕ ಭರವಸೆ ಈಡೇರಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಜನವರಿಯಿಂದ ಗೌರವಧನ ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ. ಪ್ರಮುಖ ಬೇಡಿಕೆಯಾಗಿರುವ ಕಾಯಮಾತಿ ಕುರಿತು ಕಾನೂನು ತೊಡಕಿನ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆದು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಹನುಮಂತೇಗೌಡ ತಿಳಿಸಿದರು.