ಸಾರಾಂಶ
ವಿಶ್ವದ ಅನೇಕ ಅಧ್ಯಯನಗಳೂ ಇದನ್ನು ಹೇಳಿವೆ
ನಮ್ಮಲ್ಲಿ ಆತುರದಲ್ಲಿ ಲಸಿಕೆಗೆ ಒಪ್ಪಿಗೆ ನೀಡಲಾಗಿತ್ತುಕನ್ನಡಪ್ರಭ ವಾರ್ತೆ ಬೆಂಗಳೂರು‘ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ನಮ್ಮನ್ನು ಟೀಕಿಸುವ ಮುನ್ನ ಬಿಜೆಪಿ ನಾಯಕರು ತಮ್ಮ ಆತ್ಮಸಾಕ್ಷಿ ಪರೀಕ್ಷಿಸಿಕೊಳ್ಳಬೇಕು. ಏಕೆಂದರೆ, ಆತುರಾತುರದಲ್ಲಿ ಕೊರೋನಾ ಲಸಿಕೆಗೆ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು''''
ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆಯೊಂದರಲ್ಲೇ 20ಕ್ಕೂ ಹೆಚ್ಚು ಹೃದಯಾಘಾತ ಪ್ರಕರಣ ಸಂಭವಿಸಿರುವುದು ಸೇರಿ ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ತಿರುಗೇಟಿದು.ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘ ಟ್ವೀಟ್ ಮಾಡಿರುವ ಅವರು‘ಬದುಕಿ ಬಾಳಬೇಕಾದ ಚಿಕ್ಕಮಕ್ಕಳು, ಯುವಜನರು, ಅಮಾಯಕರ ಜೀವಗಳು, ಅವರ ಕುಟುಂಬಸ್ಥರ ಕಾಳಜಿ ನಮಗೂ ಇದೆ. ಇಂತಹ ವಿಚಾರಗಳನ್ನು ಕೂಡ ತಮ್ಮ ರಾಜಕೀಯ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ನಾಯಕರ ನಡೆಯನ್ನು ನಾನು ಖಂಡಿಸುತ್ತೇನೆ’ ಎಂದಿದ್ದಾರೆ.
ಜತೆಗೆ, ಆತುರಾತುರದಲ್ಲಿ ಕೋವಿಡ್ ಲಸಿಕೆಗೆ ಅಧಿಕೃತ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎಂಬುದನ್ನು ಅಲ್ಲಗಳೆಯಲು ಆಗಲ್ಲ. ವಿಶ್ವದ ಅನೇಕ ಅಧ್ಯಯನಗಳು ಇತ್ತೀಚೆಗೆ ಹೆಚ್ಚಾಗಿರುವ ಹೃದಯ ಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣ ಎಂದು ಹೇಳಿವೆ. ಈ ವಿಚಾರದಲ್ಲಿ ಬಿಜೆಪಿಯವರು ನಮ್ಮನ್ನು ಟೀಕಿಸುವ ಮುನ್ನ ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಲಿ ಎಂದು ಹೇಳಿದ್ದಾರೆ.10 ದಿನದಲ್ಲಿ ವರದಿಗೆ ಸೂಚನೆ:
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಆಗಿರುವ ಸರಣಿ ಸಾವಿನ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣ ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾದ ಡಾ.ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.ರಾಜ್ಯದಲ್ಲಿ ಎಳೆಯ ವಯಸ್ಸಿನವರ, ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.
ಹಾಸನ ಜಿಲ್ಲೆ ಸೇರಿ ರಾಜ್ಯದಲ್ಲಿ ಸಂಭವಿಸುತ್ತಿರುವ ಹಠಾತ್ ಸರಣಿ ಸಾವುಗಳಿಗೆ ನೈಜ ಕಾರಣ ಪತ್ತೆಮಾಡಿ, ತಡೆಯಲು ನಾವು ಬದ್ಧರಿದ್ದೇವೆ. ಈ ಉದ್ದೇಶದಿಂದಲೇ ಹೃದಯ ಜ್ಯೋತಿ ಮತ್ತು ಗೃಹ ಆರೋಗ್ಯದಂತಹ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿ ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಡಾ.ರವೀಂದ್ರನಾಥ್ ಅವರ ನೇತೃತ್ವದ ತಜ್ಞರ ಸಮಿತಿ ವರದಿ ಆಧರಿಸಿ ಮುಂದೆ ಇನ್ನಷ್ಟು ಅಗತ್ಯ ಕ್ರಮಗಳನ್ನು ಕೂಡ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.---- ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಾವು ಮಾಡುತ್ತಿದ್ದು, ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು ಎಂದು ಮನವಿ ಮಾಡುತ್ತೇನೆ.
- ಸಿದ್ದರಾಮಯ್ಯ, ಮುಖ್ಯಮಂತ್ರಿ