ಹಲವು ಕಾಮಗಾರಿಗೆ ಇಂದು ಸಿಎಂ ಸಿದ್ದರಾಮಯ್ಯರಿಂದ ಚಾಲನೆ

| Published : May 23 2025, 12:08 AM IST

ಹಲವು ಕಾಮಗಾರಿಗೆ ಇಂದು ಸಿಎಂ ಸಿದ್ದರಾಮಯ್ಯರಿಂದ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಇವರಿಗೆ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಸೇರಿದಂತೆ ಪಕ್ಷದ ಚುನಾಯಿತ ಜನ ಪ್ರತಿನಿಧಿಗಳು, ಮುಖಂಡರು ಮತ್ತು ಕಾರ್ಯಕರ್ತರು ಸಹಕಾರ ನೀಡುತ್ತಿದ್ದು, ಕೆ.ಆರ್. ನಗರ ಕ್ಷೇತ್ರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಎಲ್ಲ ಸಚಿವರಿಗೆ ಭವ್ಯ ಸ್ವಾಗತ ನೀಡಲು ಸಿದ್ದರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ಜಿಲ್ಲಾಡಳಿತ ಮತ್ತು ಜಿಪಂ ವತಿಯಿಂದ ಮೇ 23ರ ಬೆಳಗ್ಗೆ 11ಕ್ಕೆ ಪಟ್ಟಣದ ಪುರಸಭೆ ಬಯರು ರಂಗಮಂದಿರದ ಆವರಣದಲ್ಲಿ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದ ವಿವಿಧ ಇಲಾಖೆಗಳ ಅಂದಾಜು 514 ಕೋಟಿ ರು. ಗಳ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರು.ಶಾಸಕ ಡಿ. ರವಿಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಮತ್ತು ಕೆ. ವೆಂಕಟೇಶ್ ಭಾಗವಹಿಸುವರು.ಇವರೊಂದಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಪೌರಾಡಳಿತ ಸಚಿವ ರಹೀಮ್ ಖಾನ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಪ್ರಾಥಮಿಕ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ನೀರಾವರಿ ಸಚಿವ ಎನ್.ಎಸ್. ಬೋಸರಾಜು ಭಾಗವಹಿಸುವರು.ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಮೈಸೂರು ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು ಸೇರಿದಂತೆ ಇತರ ಚುನಾಯಿತ ಜನಪ್ರತಿನಿಧಿಗಳು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಭಾಗವಹಿಸುವರು. ಕಾಮಗಾರಿ ಉದ್ಘಾಟನೆಗೆ ಸಿದ್ಧತೆಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ ಬಾರಿಗೆ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಉದ್ಘಾಟನೆ ನೆರವೇರಿಸಲು ಆಗಮಿಸುತ್ತಿರುವ ಹಿನ್ನೆಲೆ ಕಳೆದ ಒಂದು ವಾರದಿಂದ ಬಾರಿ ಸಿದ್ಧತೆ ಮಾಡಿಕೊಳ್ಳಲಾಗಿದೆ.ಇಲ್ಲಿನ ಪುರಸಭೆ ಬಯಲು ರಂಗಮಂದಿರದ ಆವರಣದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದ್ದು, ಬೃಹತ್ ವೇದಿಕೆ ನಿರ್ಮಾಣ ಮಾಡುವುದರೊಂದಿಗೆ ಪಟ್ಟಣದ ಪ್ರಮುಖ ಬೀದಿಗಳನ್ನು ಸ್ವಚ್ಛಗೊಳಿಸಲಾಗಿದೆ.ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಜತೆಗೆ ವಿವಿಧ ಇಲಾಖಾ ಸಚಿವರು ಮತ್ತು ಕ್ಷೇತ್ರದ ಶಾಸಕರು ಸೇರಿದಂತೆ ಇನ್ನಿತರ ಆಹ್ವಾನಿತರಿಗೆ ಸ್ವಾಗತ ಕೋರುವ ಬೃಹತ್ ಗಾತ್ರದ ಬ್ಯಾನರ್ ಮತ್ತು ಕಟೌಟ್ ಗಳು ಹಾಗೂ ಪಕ್ಷದ ಬಾವುಟಗಳು ಪಟ್ಟಣದ ತುಂಬೆಲ್ಲ ರಾಜಾಜಿಸುತ್ತಿವೆ.ಶಾಸಕ ಡಿ. ರವಿಶಂಕರ್ ಕಳೆದ ಒಂದು ವಾರದಿಂದ ಸತತವಾಗಿ ಅಧಿಕಾರಿಗಳ ಸಭೆ ನಡೆಸುವುದರ ಜೊತೆಗೆ ನಾಲ್ಕು ದಿನಗಳ ಹಿಂದೆ ಸಾಲಿಗ್ರಾಮ ಮತ್ತು ಕೆ.ಆರ್. ನಗರ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಮುಖಂಡರ ಸಭೆ ನಡೆಸಿ ಕಾರ್ಯಕ್ರಮದ ಯಶಸ್ವಿಗೆ ಕಾರ್ಯ ಯೋಜನೆ ರೂಪಿಸಿದ್ದಾರೆ. ಇವರಿಗೆ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಸೇರಿದಂತೆ ಪಕ್ಷದ ಚುನಾಯಿತ ಜನ ಪ್ರತಿನಿಧಿಗಳು, ಮುಖಂಡರು ಮತ್ತು ಕಾರ್ಯಕರ್ತರು ಸಹಕಾರ ನೀಡುತ್ತಿದ್ದು, ಕೆ.ಆರ್. ನಗರ ಕ್ಷೇತ್ರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಎಲ್ಲ ಸಚಿವರಿಗೆ ಭವ್ಯ ಸ್ವಾಗತ ನೀಡಲು ಸಿದ್ದರಾಗಿದ್ದಾರೆ. ಪೊಲೀಸ್ ಭದ್ರತೆ- ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸಚಿವ ಸಂಪುಟದ ಬಹುತೇಕ ಸಚಿವರು ಮತ್ತು ಮೈಸೂರು- ಚಾಮರಾಜನಗರ ಜಿಲ್ಲೆಯ ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಕೆ. ಆರ್. ನಗರ ಪೋಲಿಸರ ಸಹಕಾರದೊಂದಿಗೆ ಭದ್ರತಾ ಕಾರ್ಯ ಕೈಗೊಳ್ಳಲಾಗಿದ್ದು ಕಳೆದ ಮೂರು ದಿನಗಳಿಂದ ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳು ಉಸ್ತುವಾರಿ ವಹಿಸಿ ತಾಲೀಮು ನಡೆಸುತ್ತಿದ್ದಾರೆ.ಕೆ.ಆರ್. ನಗರ ಪಟ್ಟಣ ನವ ವಧುವಿನಂತೆ ಸಿಂಗಾರಗೊಂಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಇದು ಸಂಚಲನ ಮೂಡಿಸಿದೆ.